ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಇನ್ನುಮುಂದೆ ಸರ್ಕಾರಿ ಇಲಾಖೆಗಳಲ್ಲಿ ಹೊರಗುತ್ತಿಗೆ ಸಿಬ್ಬಂದಿ ನೇಮಕಾತಿಗೆ ಈ ಪ್ರಮಾಣಪತ್ರ ಕಡ್ಡಾಯ

ಕರ್ನಾಟಕದ ಸರ್ಕಾರಿ ಇಲಾಖೆಗಳಲ್ಲಿ ತಾತ್ಕಾಲಿಕ ಸಿಬ್ಬಂದಿಯನ್ನು ನೇಮಿಸಿಕೊಳ್ಳುವಾಗ ಪೊಲೀಸ್ ವೆರಿಫಿಕೇಶನ್ ಕಡ್ಡಾಯಗೊಳಿಸಬೇಕು ಎಂದು ರಾಜ್ಯ ಸರ್ಕಾರ ತಿಳಿಸಿದೆ. ಈ ಸಂಬಂಧ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸುತ್ತೋಲೆ ಹೊರಡಿಸಲಾಗಿದೆ. ಪ್ರಸ್ತುತ ಕರ್ತವ್ಯ ನಿರ್ವಹಿಸುತ್ತಿರುವ ತಾತ್ಕಾಲಿಕ ನೌಕರರಿಗೂ ಈ ನಿಯಮ ಅನ್ವಯವಾಗಲಿದೆ.

ಬೆಂಗಳೂರು: ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳಲ್ಲಿ ತಾತ್ಕಾಲಿಕವಾಗಿ ಹಾಗೂ ಹೊರಗುತ್ತಿಗೆ ಆಧಾರದ ಮೇಲೆ ನೇಮಕಗೊಳ್ಳುವ ಸಿಬ್ಬಂದಿಗೆ 'ಪೊಲೀಸ್ ಪರಿಶೀಲನಾ ಪ್ರಮಾಣಪತ್ರ'ವನ್ನು (Police verification certificate) ಕಡ್ಡಾಯಗೊಳಿಸಲಾಗಿದೆ. ಈ ಸಂಬಂಧ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸುತ್ತೋಲೆ ಹೊರಡಿಸಲಾಗಿದೆ.

ಕರ್ನಾಟಕ ಉಚ್ಚ ನ್ಯಾಯಾಲಯವು ಕ್ರಿಮಿನಲ್ ಅಪೀಲ್ ಸಂಖ್ಯೆ: 1225/2016 ರಲ್ಲಿ ನೀಡಿದ ನಿರ್ದೇಶನಗಳಂತೆ, ವಲಸೆ ಕಾರ್ಮಿಕರ ಹಿನ್ನೆಲೆ ಪರಿಶೀಲನೆ, ಗುರುತು ದೃಢೀಕರಣ ಹಾಗೂ ಪ್ರಮಾಣಿತ ಕಾರ್ಯಾಚರಣೆ ವಿಧಾನ ರೂಪಿಸುವ ಸಂಬಂಧ ಪೊಲೀಸ್ ಆಯುಕ್ತರ ಅಧ್ಯಕ್ಷತೆಯಲ್ಲಿ ನಡೆದ ಸಭೆಯ ನಡವಳಿಯಂತೆ ಈ ಕ್ರಮ ಕೈಗೊಳ್ಳಲಾಗಿದೆ. ಅದರಂತೆ, ಸರ್ಕಾರಿ ಇಲಾಖೆಗಳಲ್ಲಿ ತಾತ್ಕಾಲಿಕ ಸಿಬ್ಬಂದಿಯನ್ನು ನೇಮಿಸಿಕೊಳ್ಳುವಾಗ ಪೊಲೀಸ್ ವೆರಿಫಿಕೇಶನ್ ಕಡ್ಡಾಯಗೊಳಿಸಬೇಕು ಎಂದು ಸ್ಪಷ್ಟಪಡಿಸಲಾಗಿದೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧೀನ ಕಚೇರಿಗಳಲ್ಲಿ ಬಾಹ್ಯಮೂಲ, ಹೊರಗುತ್ತಿಗೆ ಅಥವಾ ಗುತ್ತಿಗೆ ಆಧಾರದ ಮೇಲೆ ನೌಕರರನ್ನು ನೇಮಿಸಿಕೊಳ್ಳುವ ಮುನ್ನ ಅವರ ಮೇಲೆ ಯಾವುದೇ ಕ್ರಿಮಿನಲ್ ಮೊಕದ್ದಮೆಗಳಿಲ್ಲ ಎಂಬುದನ್ನು ಖಚಿತಪಡಿಸಿಕೊಳ್ಳಬೇಕಿದೆ. ಪೊಲೀಸ್ ಇಲಾಖೆಯಿಂದ ಪರಿಶೀಲನಾ ಪ್ರಮಾಣಪತ್ರ ಪಡೆದ ನಂತರವೇ ನೇಮಕಾತಿ ಮಾಡಿಕೊಳ್ಳಬೇಕು.

ಅಲ್ಲದೆ, ನೌಕರರ ಗುರುತಿನ ಪುರಾವೆಗಳು, ದಾಖಲಾತಿಗಳು ಹಾಗೂ ತುರ್ತು ಸಂದರ್ಭದಲ್ಲಿ ಸಂಪರ್ಕಿಸಲು ದೂರವಾಣಿ ಸಂಖ್ಯೆಗಳನ್ನು ಕಡ್ಡಾಯವಾಗಿ ಸಂಗ್ರಹಿಸಲು ನಿರ್ದೇಶಿಸಲಾಗಿದೆ. ಪ್ರಸ್ತುತ ಕರ್ತವ್ಯ ನಿರ್ವಹಿಸುತ್ತಿರುವ ತಾತ್ಕಾಲಿಕ ನೌಕರರಿಗೂ ಈ ಪೊಲೀಸ್ ಪರಿಶೀಲನಾ ಪ್ರಮಾಣಪತ್ರವನ್ನು ಪಡೆಯುವುದು ಕಡ್ಡಾಯವಾಗಿದೆ ಎಂದು ಜಂಟಿ ನಿರ್ದೇಶಕರು (ಆಡಳಿತ) ಹೊರಡಿಸಿರುವ ಆದೇಶದಲ್ಲಿ ತಿಳಿಸಲಾಗಿದೆ.