ಬೆಂಗಳೂರು: ಕರ್ನಾಟಕದಲ್ಲಿ ತಂಬಾಕು ಮತ್ತು ನಿಕೋಟಿನ್ ಯುಕ್ತ ಗುಟ್ಕಾ ಹಾಗೂ ಪಾನ್ ಮಸಾಲಾ (Gutkha, Pan Masala Ban) ಮಾರಾಟದ ಮೇಲೆ ರಾಜ್ಯ ಸರ್ಕಾರ ಕಠಿಣ ಕ್ರಮ ಕೈಗೊಂಡಿದ್ದು, ಇವುಗಳ ಉತ್ಪಾದನೆ, ಶೇಖರಣೆ, ವಿತರಣೆ, ಸಾಗಣೆ ಮತ್ತು ಮಾರಾಟವನ್ನು ರಾಜ್ಯಾದ್ಯಂತ ಒಂದು ವರ್ಷದ ಅವಧಿಗೆ ಸಂಪೂರ್ಣವಾಗಿ ನಿಷೇಧಿಸಿ ಆದೇಶ ಹೊರಡಿಸಿದೆ.
ಸಾರ್ವಜನಿಕರ ಆರೋಗ್ಯ ರಕ್ಷಣೆಯ ಹಿತದೃಷ್ಟಿಯಿಂದ ಆಹಾರ ಭದ್ರತೆ ಮತ್ತು ಗುಣಮಟ್ಟ ಕಾಯ್ದೆ-2006 ರ ಸೆಕ್ಷನ್ 30(2)(a) ಹಾಗೂ ಆಹಾರ ಭದ್ರತೆ ಮತ್ತು ಗುಣಮಟ್ಟ ನಿಯಮಾವಳಿಗಳು-2011 ರ ನಿಯಮ 2.3.4 ರ ಅಧಿಕಾರ ಬಳಸಿ ರಾಜ್ಯ ಆಹಾರ ಸುರಕ್ಷತಾ ಆಯುಕ್ತರು ಈ ಅಧಿಕೃತ ಅಧಿಸೂಚನೆಯನ್ನು ಜಾರಿಗೊಳಿಸಿದ್ದಾರೆ.
ಈ ಆದೇಶದ ಅನ್ವಯ, ಯಾವುದೇ ಹೆಸರಿನಲ್ಲಿ ಅಥವಾ ಸ್ಯಾಚೆಟ್ ಹಾಗೂ ಪ್ಯಾಕೆಟ್‌ಗಳಲ್ಲಿ ತಂಬಾಕು ಅಥವಾ ನಿಕೋಟಿನ್ ಬೆರೆಸಿದ ಗುಟ್ಕಾ ಮತ್ತು ಪಾನ್ ಮಸಾಲಾಗಳನ್ನು ಮಾರಾಟ ಮಾಡುವುದು ಅಥವಾ ಸಾಗಿಸುವುದು ಸಂಪೂರ್ಣವಾಗಿ ಶಿಕ್ಷಾರ್ಹ ಅಪರಾಧವಾಗಿದ್ದು, ಈ ನಿಯಮ ಉಲ್ಲಂಘಿಸುವವರ ವಿರುದ್ಧ ಕಾನೂನು ಪ್ರಕಾರ ಕಠಿಣ ಕ್ರಮ ಜರುಗಿಸಲಾಗುತ್ತದೆ.
ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ದಾಳಿ; ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ!
ಸಾರ್ವಜನಿಕ ಆರೋಗ್ಯ ಮತ್ತು ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದ್ದು, ಅಧಿಸೂಚನೆ ಹೊರಡಿಸಿದ ದಿನಾಂಕದಿಂದಲೇ ಈ ನಿಷೇಧ ಜಾರಿಗೆ ಬಂದಿದೆ. ತಂಬಾಕು ಅಥವಾ ನಿಕೋಟಿನ್ ಅಂಶವನ್ನು ಪ್ರತ್ಯೇಕವಾಗಿ ಪ್ಯಾಕ್ ಮಾಡಿ, ನಂತರ ಗ್ರಾಹಕರು ಸುಲಭವಾಗಿ ಮಿಶ್ರಣ ಮಾಡಿ ಬಳಸುವಂತೆ ಮಾರಾಟ ಮಾಡುವ ಯಾವುದೇ ಉತ್ಪನ್ನಗಳಿಗೂ ಈ ನಿಷೇಧ ಅನ್ವಯವಾಗಲಿದೆ.