R Hithendra IPS: ಬೆಂಗಳೂರು ನೂತನ ಮುಖ್ಯ ಪೊಲೀಸ್ ಕಮಿಷನರ್ ಆಗಿ ಹಿತೇಂದ್ರ ಅಧಿಕಾರ ಸ್ವೀಕಾರ
New Bengaluru Police Commissioner: ಈ ಹಿಂದೆ ಹಿತೇಂದ್ರ ಅವರು ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಇದೀಗ ಅವರ ಅನುಭವಕ್ಕೆ ಬೆಂಗಳೂರು ನಗರದ ಪೊಲೀಸ್ ಇಲಾಖೆಯ ನೇತೃತ್ವ ವಹಿಸುವ ಜವಾಬ್ದಾರಿ ನೀಡಲಾಗಿದೆ.
-
ಬೆಂಗಳೂರು: ನಗರದ ನೂತನ ಪೊಲೀಸ್ ಕಮಿಷನರ್ ಆಗಿ ಆರ್. ಹಿತೇಂದ್ರ (R Hithendra IPS) ಅವರು ಬುಧವಾರ ಅಧಿಕಾರ ಸ್ವೀಕರಿಸಿದರು. ನೇಮಕಾತಿ ಆದೇಶ ಹೊರಬಂದ ಕೆಲವೇ ಗಂಟೆಗಳಲ್ಲಿ ಅವರು ತಮ್ಮ ಹೊಸ ಹುದ್ದೆಯ ಕರ್ತವ್ಯ ಆರಂಭಿಸಿದ್ದಾರೆ. ಈ ಹಿಂದಿನ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರು ಆರ್. ಹಿತೇಂದ್ರ ಅವರಿಗೆ ಅಧಿಕಾರ ಹಸ್ತಾಂತರಿಸಿದರು.
ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ (Bengaluru city Police Commissioner) ಸೀಮಂತ್ ಕುಮಾರ್ ಸಿಂಗ್ ಅವರನ್ನು ಅಗ್ನಿಶಾಮಕ ದಳ ಎಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ. ಅವರ ಸ್ಥಾನಕ್ಕೆ ಆರ್. ಹಿತೇಂದ್ರ ಅವರನ್ನು ನೇಮಕ ಮಾಡಲಾಗಿದೆ. ಇವರಿಗೆ ನಗರದ ಕಾನೂನು ಸುವ್ಯವಸ್ಥೆಯ ಜವಾಬ್ದಾರಿ ನೀಡಲಾಗಿದೆ.
ಈ ಹಿಂದೆ ಹಿತೇಂದ್ರ ಅವರು ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಇದೀಗ ಅವರ ಅನುಭವಕ್ಕೆ ಬೆಂಗಳೂರು ನಗರದ ಪೊಲೀಸ್ ಇಲಾಖೆಯ ನೇತೃತ್ವ ವಹಿಸುವ ಜವಾಬ್ದಾರಿ ನೀಡಲಾಗಿದೆ. ನೇಮಕಾತಿ ಆದೇಶ ಪ್ರಕಟವಾದ ಬೆನ್ನಲ್ಲೇ ಅವರು ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಗೆ ತೆರಳಿ ಅಧಿಕಾರ ಸ್ವೀಕರಿಸಿದರು.
ಅಧಿಕಾರ ಸ್ವೀಕರಿಸಿದ ಬಳಿಕ ಮಾತನಾಡಿದ ನೂತನ ಪೊಲೀಸ್ ಆಯುಕ್ತ ಆರ್. ಹಿತೇಂದ್ರ ಅವರು, ಬೆಂಗಳೂರು ನಗರ ಪೊಲೀಸ್ ಮುಖ್ಯ ಆಯುಕ್ತರನ್ನಾಗಿ ನೇಮಕ ಮಾಡಿದ ರಾಜ್ಯ ಸರ್ಕಾರಕ್ಕೆ ಧನ್ಯವಾದ ಸಲ್ಲಿಸುವೆ. ಬೆಂಗಳೂರು ಪೊಲೀಸ್ ಆಯುಕ್ತರಾಗಿ ಈ ಹಿಂದೆ ಹಲವು ಹಿರಿಯ ಅಧಿಕಾರಿಗಳು ಉತ್ತಮವಾಗಿ ಕಾರ್ಯನಿರ್ವಹಿಸಿದ್ದಾರೆ. ಅವರ ಕಾರ್ಯವನ್ನ ಮುಂದುವರಿಸುವ ಭಾಗವಾಗಿ ಇದೀಗ ಐದು ಪ್ರತ್ಯೇಕ ಪೊಲೀಸ್ ಕಮಿಷನರೇಟ್ಗಳನ್ನು ರಚಿಸಲಾಗಿದೆ. ಬೆಂಗಳೂರು ನಗರದ ಜನಸಂಖ್ಯೆ ಸಾಕಷ್ಟು ಹೆಚ್ಚಾಗಿದೆ. ನಗರದ ವಿಸ್ತೀರ್ಣ, ಜನಸಂಖ್ಯೆ ಹಾಗೂ ಸಾರ್ವಜನಿಕರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ಈ ಮಹತ್ವದ ನಿರ್ಧಾರ ಕೈಗೊಂಡಿದೆ. ಜನರಿಗೆ ಇನ್ನಷ್ಟು ಉತ್ತಮ ಪೊಲೀಸ್ ಸೇವೆ ಒದಗಿಸುವುದು ಐದು ಕಮಿಷನರೇಟ್ಗಳ ರಚನೆಯ ಪ್ರಮುಖ ಉದ್ದೇಶವಾಗಿದೆ ಎಂದು ಅವರು ತಿಳಿಸಿದ್ದಾರೆ.
ಬೆಂಗಳೂರಿನ ಕಾನೂನು ಸುವ್ಯವಸ್ಥೆ, ಸಂಚಾರ ವ್ಯವಸ್ಥೆಯನ್ನ ಸಮರ್ಥವಾಗಿ ನಿಭಾಯಿಸುವುದು ಹಾಗೂ ನಿಯಂತ್ರಿಸುವುದರ ಜೊತೆಗೆ ಪೊಲೀಸ್ ವ್ಯವಸ್ಥೆಯಲ್ಲಿ ಆಗಿರುವ ಬದಲಾವಣೆಗಳು ಸಾರ್ವಜನಿಕರಿಗೆ ಕಾಣುವಂತಾಗಬೇಕು. ನಮ್ಮ ಕೆಲಸ ಮಾತನಾಡುವಂತೆ ಕಾರ್ಯನಿರ್ವಹಿಸುತ್ತೇವೆ. ನನ್ನ ಅನುಭವದ ಆಧಾರದ ಮೇಲೆ ಇಲಾಖೆಯಲ್ಲಿ ಹೊಸ ಬದಲಾವಣೆಗಳನ್ನು ತರುವ ಪ್ರಯತ್ನ ಮಾಡುತ್ತೇನೆ. ಕಳೆದ ಮೂರು ವರ್ಷಗಳಿಂದ ಎಡಿಜಿಪಿಯಾಗಿ ಕಾರ್ಯನಿರ್ವಹಿಸಿದ್ದೇನೆ. ಅಲ್ಲದೆ, ಸಿಬಿಐನಲ್ಲಿಯೂ ಕೆಲಸ ಮಾಡಿದ ಅನುಭವವಿದೆ. ಈ ಅನುಭವವನ್ನು ಬಳಸಿಕೊಂಡು ಬೆಂಗಳೂರು ನಗರ ಪೊಲೀಸ್ ವ್ಯವಸ್ಥೆಯಲ್ಲಿ ಪರಿಣಾಮಕಾರಿ ಬದಲಾವಣೆ ತರಲು ಪ್ರಯತ್ನಿಸುತ್ತೇನೆ ಎಂದು ಹೇಳಿದ್ದಾರೆ.