ಬೆಂಗಳೂರು: ಮಹಿಳೆಯರನ್ನು ಗೌರವಿಸುವ ಕಾರ್ಯ ನಿರಂತರವಾಗಿರಬೇಕು. ಅದು ಕೇವಲ ಆಚರಣೆಗೆ ಸೀಮಿತವಾಗದೆ, ಸಾಮಾಜಿಕ ಮೌಲ್ಯವಾಗಿ ಪ್ರತಿದಿನವೂ ಅಳವಡಿಸಿಕೊಳ್ಳಬೇಕಾದ ಕರ್ತವ್ಯವಾಗಿದೆ ಎಂದು ಅಖಿಲ ಭಾರತೀಯ ಬ್ರಾಹ್ಮಣ ಮಹಾಸಂಘದ ರಾಜ್ಯಾಧ್ಯಕ್ಷ ಜಿ.ಆರ್. ಪ್ರದೀಪ್ ಅವರು (International Women's day 2026) ಅಭಿಪ್ರಾಯಪಟ್ಟರು.
ಅಖಿಲ ಭಾರತೀಯ ಬ್ರಾಹ್ಮಣ ಮಹಾಸಂಘ ಬೆಂಗಳೂರು ದಕ್ಷಿಣ ಮಹಿಳಾ ಘಟಕದ ವತಿಯಿಂದ ಆಯೋಜಿಸಲಾಗಿದ್ದ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಭಾರತೀಯ ಸಂಸ್ಕೃತಿಯಲ್ಲಿ ಮಹಿಳೆಗೆ ಪೂಜನೀಯ ಸ್ಥಾನವಿದೆ. ಮಹಿಳಾ ಶಕ್ತಿಯನ್ನು ಗೌರವಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದ್ದು, ಕುಟುಂಬ, ಸಮಾಜ ಹಾಗೂ ರಾಷ್ಟ್ರದ ಅಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅಖಿಲ ಭಾರತೀಯ ಬ್ರಾಹ್ಮಣ ಮಹಾಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ವಿಶ್ವನಾಥ ಜೋಶಿ ಅವರು, ಸಂಘಟನೆಯನ್ನು ಇನ್ನಷ್ಟು ಬಲಪಡಿಸುವ ಕಾರ್ಯ ಆಗಬೇಕಿದೆ. ಎಲ್ಲ ವಲಯಗಳಲ್ಲೂ ಪದಾಧಿಕಾರಿಗಳ ಸಂಖ್ಯೆ ಹೆಚ್ಚಾಗಬೇಕು. ಸದಸ್ಯರ ನೋಂದಣಿ ಪ್ರಕ್ರಿಯೆಯನ್ನು ವೇಗಗೊಳಿಸುವ ಉದ್ದೇಶದಿಂದ ಶೀಘ್ರದಲ್ಲೇ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಚಾಲನೆ ನೀಡಲಾಗುವುದು ಎಂದು ತಿಳಿಸಿದರು.
ಕಾರ್ಯಕ್ರಮದ ಅಂಗವಾಗಿ ಸಾಮೂಹಿಕ ಮಹಾಲಕ್ಷ್ಮಿ ಪೂಜೆ ಹಾಗೂ ಕುಂಕುಮಾರ್ಚನೆ ಭಕ್ತಿಭಾವದಿಂದ ನೆರವೇರಿಸಲಾಯಿತು. ಇದೇ ವೇಳೆ ಶಿಕ್ಷಣ, ಸಾಮಾಜಿಕ ಸೇವೆ, ವೃತ್ತಿ, ಸಂಸ್ಕೃತಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಮಹಿಳೆಯರನ್ನು ಗುರುತಿಸಿ ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು. ಈ ಸನ್ಮಾನ ಸಮಾರಂಭವು ಮಹಿಳೆಯರಲ್ಲಿ ಆತ್ಮವಿಶ್ವಾಸ ಮತ್ತು ಸಮಾಜಮುಖಿ ಸೇವೆಗೆ ಹೊಸ ಪ್ರೇರಣೆಯನ್ನು ನೀಡಿತು.
Women's Day: ಮಹಿಳಾ ದಿನದ ಹಿನ್ನೆಲೆ: ಲಯನ್ಸ್ ಡಿಸ್ಟ್ರಿಕ್ಟ್ 317ಎಫ್ ನಿಂದ ಮಹಿಳೆಯರಿಗೆ 15 ಇ-ಆಟೋ ವಿತರಣೆ
ಕಾರ್ಯಕ್ರಮದಲ್ಲಿ ಬೆಂಗಳೂರು ದಕ್ಷಿಣ ಘಟಕದ ಅಧ್ಯಕ್ಷೆ ಪೂರ್ಣಿಮಾ, ರಾಜ್ಯ ಯುವ ಘಟಕದ ಅಧ್ಯಕ್ಷ ಕಾರ್ತಿಕ್ ಸೋಮಯಾಜಿ, ರಾಜ್ಯ ಉದ್ಯಮ ವಿಭಾಗದ ಅಧ್ಯಕ್ಷ ಶ್ರೀಧರ, ಬೆಂಗಳೂರು ದಕ್ಷಿಣ ಮಹಿಳಾ ಘಟಕದ ಅಧ್ಯಕ್ಷೆ ಜಯಶ್ರೀ ಸೂರ್ಯನಾರಾಯಣ ಸೇರಿದಂತೆ ಸಂಘಟನೆಯ ಹಲವು ಪದಾಧಿಕಾರಿಗಳು, ಗಣ್ಯರು ಹಾಗೂ ಮಹಿಳಾ ಸದಸ್ಯರು ಉಪಸ್ಥಿತರಿದ್ದರು.
ಕಾರ್ಯಕ್ರಮವು ಭಕ್ತಿಭಾವ, ಸಾಮಾಜಿಕ ಜವಾಬ್ದಾರಿ ಹಾಗೂ ಮಹಿಳಾ ಶಕ್ತಿಯ ಮಹತ್ವವನ್ನು ಪ್ರತಿಪಾದಿಸುವ ಮೂಲಕ ಅತ್ಯಂತ ಯಶಸ್ವಿಯಾಗಿ ನೆರವೇರಿತು.