ಚೌತಿ ಹಬ್ಬ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Bhovi Corporation Scam: ಭೋವಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಎಸ್.ರವಿಕುಮಾರ್ ರಾಜೀನಾಮೆ ಸಲ್ಲಿಕೆ

S Ravikumar: ಭೂಮಿ ಮಂಜೂರಾದವರಿಗೆ 25 ಲಕ್ಷ ರೂ. ಸಹಾಯಧನ ಬಿಡುಗಡೆ ಮಾಡಲು ಭೋವಿ ನಿಗಮದ ಅಧ್ಯಕ್ಷ ರವಿಕುಮಾರ್ 5 ಲಕ್ಷ ರೂ. ಕಮಿಷನ್ ಪಡೆಯುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಇದರ ಬೆನ್ನಲ್ಲೇ ರವಿಕುಮಾರ್ ಅವರು ರಾಜೀನಾಮೆ ಸಲ್ಲಿಸಿದ್ದಾರೆ.

ಬೆಂಗಳೂರು: ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ (Bhovi Corporation Scam) ಅಧ್ಯಕ್ಷ ಎಸ್.ರವಿ ಕುಮಾರ್ ಅವರು ರಾಜೀನಾಮೆ ಸಲ್ಲಿಸಿದ್ದಾರೆ. ಭೋವಿ ನಿಗಮದಲ್ಲಿ ಫಲಾನುಭವಿಗಳಿಂದ ಶೇ.60ರಷ್ಟು ಕಮಿಷನ್ ಪಡೆದಿರುವ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಎಸ್.ರವಿ ಕುಮಾರ್ ಅವರು ಶುಕ್ರವಾರ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.

ಪತ್ರದಲ್ಲಿ ಏನಿದೆ?

2024ರ ಮಾರ್ಚ್ 15 ರಿಂದ ನಾನು ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ನನ್ನ ಅಧಿಕಾರಾವಧಿಯಲ್ಲಿ ಸರ್ಕಾರದ ಕಾರ್ಯಕ್ರಮಗಳನ್ನು ನಿಗಮದ ಮೂಲಕ ಕಾರ್ಯಗತಗೊಳಿಸಿದ್ದೇನೆ. ನನ್ನ ಅವಧಿಯಲ್ಲಿ ನಿಗಮದಲ್ಲಿ ಯಾವುದೇ ಅಕ್ರಮಗಳು ನಡೆದಿರುವುದಿಲ್ಲ ಎಂಬುದನ್ನು ತಮ್ಮ ಗಮನಕ್ಕೆ ತರಬಯಸುತ್ತೇನೆ.

ಹಿಂದಿನ ಸರ್ಕಾರದ ಅವಧಿಯಲ್ಲಿ ನಡೆದಿದ ಅಕ್ರಮಗಳ ಬಗ್ಗೆ ತನಿಖಾ ಸಂಸ್ಥೆಗಳು ತನಿಖೆ ನಡೆಸುತ್ತಿರುವುದು ಸರಿಯಷ್ಟೆ. ನಿಗಮದಲ್ಲಿ ಹಿಂದಿನಿಂದ ನಡೆದುಕೊಂಡು ಬರುತ್ತಿದ್ದ ಕೆಲವು ಅನುಚಿತ ವ್ಯವಹಾರ ಮತ್ತು ಅಶಿಸ್ತನ್ನು ನಾನು ಪತ್ತೆ ಹಚ್ಚಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದ್ದಕ್ಕೇ ನನ್ನ ವಿರುದ್ಧ ಪಿತೂರಿ ನಡೆದು, ನನ್ನ ತೇಜೋವಧೆ ಮಾಡುವ ಪ್ರಯತ್ನ ನಡೆದಿದೆ. ಈ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧದ ಅಗತ್ಯ ಕ್ರಮಕ್ಕೆ ತಮ್ಮಲ್ಲಿ ವಿನಂತಿಸುತ್ತೇನೆ. ಸೈಬರ್ ಪೊಲೀಸರು ಮತ್ತು ಎಫ್‌ಎಸ್ಎ‌ಲ್ ತಂಡದಿಂದ ತನಿಖೆ ನಡೆಸಿ, ನನ್ನ ತೇಜೋವಧೆ ಮಾಡಲು ವಿಡಿಯೋ ಮಾಡಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ತಮಲಿ ವಿನಂತಿಸುತ್ತೇನೆ.

ನಾನು ಅಧ್ಯಕ್ಷನಾಗಿ ಕಾಠ್ಯ ನಿರ್ವಹಿಸಲು ಅವಕಾಶ ನೀಡಿದ ತಮಗೆ ಹಾಗೂ ಸರ್ಕಾರಕ್ಕೆ ನಾನು ಆಭಾರಿಯಾಗಿದ್ದೇನೆ. ನಾನು ಶಿವಮೊಗ್ಗ ನಿವಾಸಿಯಾಗಿರುವುದರಿಂದ, ನಿಗಮದ ಅಧ್ಯಕ್ಷನಾಗಿ ಕಾರ್ಯ ನಿರ್ವಹಿಸಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ನಿಗಮದ ಅಧ್ಯಕ್ಷ ಸ್ಥಾನಕ್ಕೆ ನನ್ನ ರಾಜೀನಾಮೆಯನ್ನು ನೀಡುತ್ತಿದ್ದೇನೆ ಎಂದು ರಾಜೀನಾಮೆ ಪತ್ರದಲ್ಲಿ ತಿಳಿಸಲಾಗಿದೆ.

ರವಿಕುಮಾರ್‌ ವಿರುದ್ಧ ಆರೋಪವೇನು?

ಭೋವಿ ನಿಗಮದ ಭೂ ಒಡೆತನ ಯೋಜನೆಯಲ್ಲಿ ಆಯ್ಕೆಯಾದ ಫಲಾನುಭವಿಗಳಿಂದ ನಿಗಮದ ಅಧ್ಯಕ್ಷ ರವಿಕುಮಾರ್‌ ಅವರು ಶೇ.60 ಲಂಚಕ್ಕೆ ಬೇಡಿಕೆ ಇಡುತ್ತಿದ್ದರು ಎಂದು ಭಾರತೀಯ ಭೋವಿ ಸಮಾಜ ಸೇವಾ ಸಂಘದ ರಾಷ್ಟ್ರೀಯ ಅಧ್ಯಕ್ಷ ವೆಂಕಟೇಶ್‌ ಮೌರ್ಯ ಆರೋಪಿಸಿದ್ದರು. ರವಿ ಕುಮಾರ್‌ ಅವರು ಮಾತನಾಡಿರುವ ವಿಡಿಯೊ ಮತ್ತು ಆಡಿಯೊ ತುಣುಕುಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದ್ದವು.