Vishnuvardhan Memorial: ವಿಷ್ಣು ಸ್ಮಾರಕಕ್ಕಾಗಿ ಅಭಿಮಾನ್ ಸ್ಟುಡಿಯೊ ಭೂಸ್ವಾಧೀನ ಮಾಡಿಕೊಳ್ಳಿ; ಸಿಎಂಗೆ ಶೋಭಾ ಕರಂದ್ಲಾಜೆ ಪತ್ರ
Vishnuvardhan Memorial: ಬೆಂಗಳೂರಿನ ಅಭಿಮಾನ್ ಸ್ಟುಡಿಯೋ ಆವರಣದಲ್ಲಿದ್ದ ಡಾ. ವಿಷ್ಣುವರ್ಧನ್ ಅವರ ಸ್ಮಾರಕ, ಕನ್ನಡಾಭಿಮಾನಿಗಳ ಹೃದಯದಲ್ಲಿ ಭಾವನಾತ್ಮಕ ಪ್ರೇರಣೆಯ ಕೇಂದ್ರವಾಗಿದೆ. ಆ ಭೂಮಿಯನ್ನು ತಕ್ಷಣವೇ ಸ್ವಾಧೀನಪಡಿಸಿಕೊಳ್ಳಬೇಕು ಹಾಗೂ ಭೂ ಮಾಲೀಕರಿಗೆ ಸರ್ಕಾರದ ನಿಯಮಾನುಸಾರ ನ್ಯಾಯಸಮ್ಮತ ಪರಿಹಾರಿ ನೀಡಿ ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಮನವಿ ಮಾಡಿದ್ದಾರೆ.


ಬೆಂಗಳೂರು: ಕೆಂಗೇರಿಯ ಅಭಿಮಾನ್ ಸ್ಟುಡಿಯೊದಲ್ಲಿದ್ದ ನಟ ವಿಷ್ಣುವರ್ಧನ್ ಅವರ ಸಮಾಧಿ ತೆರವಿಗೆ ಅಭಿಮಾನಿಗಳಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಇದೀಗ ಈ ಬಗ್ಗೆ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿರುವ ಕೇಂದ್ರ ಕಾರ್ಮಿಕ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು, ವಿಷ್ಣುವರ್ಧನ್ ಅವರ ಸ್ಮಾರಕಕ್ಕಾಗಿ (Vishnuvardhan Memorial) ಅಭಿಮಾನ್ ಸ್ಟುಡಿಯೊದ ಜಾಗವನ್ನು ಸ್ವಾಧೀನ ಮಾಡಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.
ಕರ್ನಾಟಕದ ಚಲನಚಿತ್ರ ಲೋಕದಲ್ಲಿ ʼಸಾಹಸಸಿಂಹ' ಎಂದು ಹೆಸರಾದ, ಜನಮನಗಳನ್ನು ಗೆದ್ದ, ಶ್ರೇಷ್ಠ ನಟ ಸಂಸ್ಕೃತಿ ಪ್ರೇಮಿ ಡಾ. ವಿಷ್ಣುವರ್ಧನ್ ಅವರ ಸೇವೆ ಮತ್ತು ಕೊಡುಗೆಗಳನ್ನು ಮರೆಯಲು ಸಾಧ್ಯವಿಲ್ಲ. ಕನ್ನಡ ಮತ್ತು ಕರ್ನಾಟಕದ ಹೆಸರನ್ನು ದೇಶದಾದ್ಯಂತ ಪರಿಚಯಿಸಿದ ಮಹಾನ್ ವ್ಯಕ್ತಿಯಾಗಿದ್ದರು.
ಬೆಂಗಳೂರಿನ ಅಭಿಮಾನ್ ಸ್ಟುಡಿಯೋ ಆವರಣದಲ್ಲಿದ್ದ ಡಾ. ವಿಷ್ಣುವರ್ಧನ್ ಅವರ ಸ್ಮಾರಕ, ಕನ್ನಡಾಭಿಮಾನಿಗಳ ಹೃದಯದಲ್ಲಿ ಭಾವನಾತ್ಮಕ ಪ್ರೇರಣೆಯ ಕೇಂದ್ರವಾಗಿದೆ. ಆದರೆ ಇತ್ತೀಚೆಗೆ, ಸ್ಮಾರಕ ಇರುವ ಜಾಗವನ್ನು ಕೆಲವರು ತಮ್ಮ ಹಕ್ಕು ಭೂಮಿಯೆಂದು ಹೇಳಿಕೊಂಡು ರಾತ್ರೋರಾತ್ರಿ ಧ್ವಂಸ ಮಾಡಿರುವುದು ನಮ್ಮೆಲ್ಲರಿಗೂ ಭಾರೀ ನೋವು ತಂದಿದೆ.
ಡಾ. ವಿಷ್ಣುವರ್ಧನ್ ಸ್ಮಾರಕವನ್ನು ಶಾಶ್ವತವಾಗಿ ಕಾಪಾಡಿ, ಅದನ್ನು ರಾಷ್ಟ್ರೀಯ ಮಟ್ಟದ ಪ್ರವಾಸಿ ಆಕರ್ಷಣೆಯ ಕೇಂದ್ರವಾಗಿ, ಕಲೆಯ ಪ್ರದರ್ಶನ ಮತ್ತು ತರಬೇತಿಯ ಕಲಾ ಗ್ರಾಮವಾಗಿ ಹಾಗೂ ಕನ್ನಡ ಸಂಸ್ಕೃತಿಯ ಪ್ರತೀಕವಾಗಿ ಅಭಿವೃದ್ಧಿಪಡಿಸುವಂತೆ ಕೋರುತ್ತೇನೆ.
ಕನ್ನಡ ಚಲನಚಿತ್ರ ರಂಗಕ್ಕೆ ಸಾಹಸಸಿಂಹ ಡಾ. ವಿಷ್ಣುವರ್ಧನ್ ಅವರ ಕೊಡುಗೆಯ ಬಗ್ಗೆ ಇಡೀ ಕರುನಾಡಿನ ಮನೆಮನಗಳೂ ಮಾತನಾಡುತ್ತವೆ. ಎಲ್ಲರ ಮನೆಮಾತಾದ ಅಂತಹ ಅದ್ಭುತ ನಟಶ್ರೇಷ್ಠರಿಗೆ ಸೂಕ್ತ ಗೌರವ ನೀಡಲಾಗದ, ಅವರ ಸಮಾಧಿಸ್ಥಳವನ್ನು ಉಳಿಸಿಕೊಳ್ಳಲಾಗದ ಸ್ಥಿತಿಗೆ ನಾವು ತಲುಪಿದ್ದೇವೆ ಎನ್ನುವುದು ನಿಜಕ್ಕೂ ಬೇಸರದ ಸಂಗತಿ.
— Shobha Karandlaje (@ShobhaBJP) August 10, 2025
ಡಾ. ವಿಷ್ಣುವರ್ಧನ್ ಅವರ… pic.twitter.com/YJiFEeBNA5
ಈ ಸುದ್ದಿಯನ್ನೂ ಓದಿ | Vishnuvardhan Samadhi: ವಿಷ್ಣುವರ್ಧನ್ ಸಮಾಧಿ ನೆಲಸಮಕ್ಕೆ ನನ್ನ ತಮ್ಮನ ಮಗನೇ ಕಾರಣ: ಗೀತಾ ಬಾಲಕೃಷ್ಣ
ಈ ಹಿನ್ನೆಲೆಯಲ್ಲಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮೂಲಕ ಆ ಭೂಮಿಯನ್ನು ತಕ್ಷಣವೇ ಭೂಸ್ವಾಧೀನಪಡಿಸಿಕೊಳ್ಳಬೇಕು ಹಾಗೂ ಭೂ ಮಾಲೀಕರಿಗೆ ಸರ್ಕಾರದ ನಿಯಮಾನುಸಾರ ನ್ಯಾಯಸಮ್ಮತ ಪರಿಹಾರ ನೀಡುವಂತೆ ಸರ್ಕಾರಕ್ಕೆ ಆಗ್ರಹಿಸುತ್ತೇನೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.