ಬೆಂಗಳೂರು, ಜೂ. 11: ಡಿ.ಕೆ. ಶಿವಕುಮಾರ್ (DK Shivakumar) ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ನೂತನ ಸಚಿವರಿಗೆ ಖಾತೆಗಳನ್ನು ಹಂಚಿಕೆ ಮಾಡಲಾಗಿದೆ. ಡಿಕೆಶಿ ಸಚಿವ ಸಂಪುಟದಲ್ಲಿ ಮುಸ್ಲಿಂ ಕೋಟಾದಲ್ಲಿ ಜಮೀರ್ ಅಹ್ಮದ್ ಖಾನ್ (Zameer Ahmed Khan) ಅವರಿಗೆ ಸ್ಥಾನ ಸಿಗಬಹುದು ಎನ್ನುವ ನಿರೀಕ್ಷೆ ಇತ್ತು. ಆದರೆ ಅವರಿಗೆ ಸಚಿವ ಸ್ಥಾನ ಸಿಕ್ಕಿಲ್ಲ. ಇದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಸಮಾಧಾನವೇ ಕಾರಣ ಎನ್ನಲಾಗುತ್ತಿದೆ. ಒಂದು ಕಾಲದಲ್ಲಿ ಸಿದ್ದರಾಮಯ್ಯ ಮತ್ತು ಜಮೀರ್ ಆಪ್ತರಾಗಿದ್ದರು. ಇಂತಹವರ ಮಧ್ಯೆ ಬಿರುಕು ಮೂಡಲು ಕಾರಣವೇನು ಎನ್ನುವ ಕುತೂಹಲ ಮೂಡಿದೆ.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಪರಮಾಪ್ತ ಜಮೀರ್ ಅಹ್ಮದ್ ಖಾನ್ ವಿರುದ್ಧೇ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದರಿಂದಲೇ ಜಮೀರ್ ಅಹ್ಮದ್ ಖಾನ್ ಅವರಿಗೆ ಸಚಿವ ಸ್ಥಾನ ಕೈತಪ್ಪಿದೆ ಎನ್ನಲಾಗುತ್ತಿದೆ.
ಸಿದ್ದರಾಮಯ್ಯ ಹೇಳಿದ್ದೇನು?
ಜಮೀರ್ ಅಹ್ಮದ್ ಅವರಿಗೆ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಮುಸ್ಲಿಂ ಸಮುದಾಯದವರು, ಅವರ ಬೆಂಬಲಿಗರು ತೀವ್ರ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಈಗಾಗಲೇ ಕೆಲವು ಕಡೆ ಪ್ರತಿಭಟನೆಯೂ ನಡೆದಿದೆ. ಈ ಮಧ್ಯೆ ಜಮೀರ್‌ಗೆ ಸಚಿವ ಸ್ಥಾನ ನೀಡಬೇಕೆಂದು ಅವರ ಬೆಂಬಲಿಗರು ಸಿದ್ದರಾಮಯ್ಯ ಅವರನ್ನು ಆಗ್ರಹಿಸಿದ್ದಾರೆ. ಈ ವೇಳೆ ಗರಂ ಆದ ಸಿದ್ದರಾಮಯ್ಯ, ʼʼಜಮೀರ್ ಅಹ್ಮದ್ ಖಾನ್ ನನ್ನ ಆಪ್ತ ಎಂದು ನೀವೆಲ್ಲ ಹೇಳುತ್ತೀರಾ. ಆದರೆ ದಾವಣಗೆರೆ ದಕ್ಷಿಣ ಉಪಚುನಾವಣೆಯಲ್ಲಿ ನನ್ನ ವಿರುದ್ಧವೇ ಕೆಲಸ ಮಾಡಿದ್ದಾರೆʼʼ ಎಂದು ಹೇಳಿದ್ದಾರೆ. ಆ ಮೂಲಕ ಜಮಿರ್ ಅವರಿಗೆ ಸಚಿವ ಸ್ಥಾನ ಕೈ ತಪ್ಪಲು ಸಿದ್ದರಾಮಯ್ಯ ಕಾರಣವೇ ಎನ್ನುವ ಅನುಮಾನ ಮೂಡಿದೆ.
ವೈರಲ್ ಆಗಿದ್ದ ಆಡಿಯೊ
ಇತ್ತೀಚೆಗೆ ದಾವಣಗೆರೆ ಉಪ ಚುನಾವಣೆ ವೇಳೆ ಪಕ್ಷವಿರೋಧಿ ಚಟುವಟಿಕೆ ಆರೋಪಕ್ಕೆ ಸಂಬಂಧಿಸಿ ಜಮೀರ್ ಅಹ್ಮದ್ ಅವರದ್ದು ಎನ್ನಲಾದ ಆಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಸಂಚಲನ ಸೃಷ್ಟಿಸಿತ್ತು.
ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ನೀಡದ ಹಿನ್ನೆಲೆಯಲ್ಲಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಜಮೀರ್ ಅಂತರ ಕಾಯ್ದುಕೊಂಡಿದ್ದರು. ಸಂಧಾನ ಪ್ರಯತ್ನ ನಡೆದರೂ ಸಕ್ರಿಯವಾಗಿ ಚುನಾವಣಾ ಪ್ರಚಾರ ನಡೆಸಿರಲಿಲ್ಲ. ಹೀಗಿದ್ದರೂ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಜಯ ಗಳಿಸಿದ್ದರು. ಇದರ ನಡುವೆ ಟಿಕೆಟ್‌ಗೆ ಸಂಬಂಧಪಟ್ಟಂತೆ ಕಾಂಗ್ರೆಸ್ ಮುಸ್ಲಿಂ ನಾಯಕರ ನಡುವೆ ಭಿನ್ನಾಭಿಪ್ರಾಯ ಸ್ಫೋಟಗೊಂಡಿತ್ತು.
ಬಳಿಕ ಸಮರ್ಥ್ ಶಾಮನೂರು ಸೋಲಿಸಲು ಷಡ್ಯಂತ್ರ ರೂಪಿಸಿದ ಆರೋಪದಲ್ಲಿ ಸಿದ್ದರಾಮಯ್ಯ ಅವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಹಾಗೂ ಕೆಪಿಸಿಸಿ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಅಬ್ದುಲ್ ಜಬ್ಬಾರ್ ವಿರುದ್ಧ ಹೈಕಮಾಂಡ್ ಶಿಸ್ತು ಕ್ರಮ ಕೈಗೊಂಡಿತ್ತು. ಇನ್ನು ಅಭ್ಯರ್ಥಿ ಪರ ಸರಿಯಾಗಿ ಪ್ರಚಾರ ಮಾಡದ ಸಚಿವ ಜಮೀರ್ ಅಹ್ಮದ್ ವಿರುದ್ಧ ಕೂಡ ಕ್ರಮಕ್ಕೆ ಆಗ್ರಹ ಕೇಳಿಬಂದಿತ್ತು. ಅದೇ ವೇಳೆ ಜಮೀರ್ ಮಾತನಾಡಿದ್ದಾರೆ ಎನ್ನಲಾದ ಆಡಿಯೊ ವೈರಲ್ ಆಗಿತ್ತು. ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಬದಲಾಗಿ ಮುಸ್ಲಿಮರೆಲ್ಲ ಪಕ್ಷೇತರರಿಗೆ ವೋಟ್ ಹಾಕಬೇಕು ಎಂದು ಜಮೀರ್ ಆಗ್ರಹಿಸುವುದು ಆಡಿಯೊದಲ್ಲಿ ಕೇಳಿ ಬಂದಿತ್ತು. ಇದೇ ಕಾರಣಕ್ಕೆ ಸಿದ್ದರಾಮಯ್ಯ ಅಸಮಾಧಾನಗೊಂದಿದ್ದಾರೆ ಎನ್ನಲಾಗಿದೆ.
ರಾಜ್ಯದ ಇನ್ನಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
ʼಪ್ರವಾಸಿ ಪ್ರಪಂಚʼ ವೆಬ್‌ಸೈಟ್‌ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ.