S L Bhyrappa: ನಾಳೆ ಎಸ್.ಎಲ್.ಭೈರಪ್ಪ ಅಂತಿಮ ದರ್ಶನಕ್ಕೆ ರವೀಂದ್ರ ಕಲಾಕ್ಷೇತ್ರದಲ್ಲಿ ವ್ಯವಸ್ಥೆ, ಶುಕ್ರವಾರ ಅಂತ್ಯ ಸಂಸ್ಕಾರ
ಖ್ಯಾತ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಅಂತಿಮ ದರ್ಶನಕ್ಕೆ ಗುರುವಾರ ಬೆಳಗ್ಗೆ 8 ಗಂಟೆಯಿಂದ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ವ್ಯವಸ್ಥೆ ಮಾಡಲಾಗುತ್ತದೆ. ಮಧ್ಯಾಹ್ನ 2 ಗಂಟೆ ನಂತರ ಮೈಸೂರಿನ ಕಲಾ ಮಂದಿರದಲ್ಲೂ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಬಳಿಕ ಶುಕ್ರವಾರ ಹಾಸನ ಜಿಲ್ಲೆಯ ಸಂತೇಶಿವರದಲ್ಲಿ ಅಂತಿಮ ಸಂಸ್ಕಾರ ನಡೆಯಲಿದೆ.

-

ಬೆಂಗಳೂರು: ಅನಾರೋಗ್ಯದಿಂದ ನಿಧನರಾಗಿರುವ ಖ್ಯಾತ ಸಾಹಿತಿ ಎಸ್.ಎಲ್.ಭೈರಪ್ಪ (S L Bhyrappa) ಅವರ ಅಂತಿಮ ದರ್ಶನಕ್ಕೆ ನಾಳೆ (ಸೆ.25) ಬೆಳಗ್ಗೆ 8 ಗಂಟೆಯಿಂದ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿದು ಬಂದಿದೆ.
ಮಧ್ಯಾಹ್ನ 2 ಗಂಟೆ ನಂತರ ಮೈಸೂರಿನ ಕಲಾ ಮಂದಿರದಲ್ಲೂ ಭೈರಪ್ಪ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಬಳಿಕ ಶುಕ್ರವಾರ ಹುಟ್ಟೂರಾದ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಸಂತೇಶಿವರ ಗ್ರಾಮದಲ್ಲಿ ಅಂತಿಮ ಸಂಸ್ಕಾರ ನಡೆಯಲಿದೆ. ಭೈರಪ್ಪ ಅವರ ಹಿರಿಯ ಮಗ ಲಂಡನ್‌ನಲ್ಲಿರುವುದರಿಂದ ಅವರು ಭಾರತಕ್ಕೆ ಬಂದ ನಂತರ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಆಪ್ತ ಮೂಲಗಳು ತಿಳಿಸಿವೆ.
ಕನ್ನಡದ ಖ್ಯಾತ ಕಾದಂಬರಿಕಾರ, ಚಿಂತಕ, ಸರಸ್ವತಿ ಸಮ್ಮಾನ್ ಪುರಸ್ಕೃತ ಸಾಹಿತಿ ಎಸ್ ಎಲ್ ಭೈರಪ್ಪ ಅವರು ಬುಧವಾರ ಮಧ್ಯಾಹ್ನ (SL Bhyrappa passes away) ನಿಧನರಾದರು. ಅಲ್ಪಕಾಲದ ಅಸೌಖ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 94 ವರ್ಷ ವಯಸ್ಸಾಗಿತ್ತು. ಹಾಸನ ಜಿಲ್ಲೆಯ ಸಂತೇಶಿವರದಲ್ಲಿ ಜನಿಸಿದ್ದ ಅವರು ತಮ್ಮ ಕೃತಿಗಳ ಮೂಲಕ ಕನ್ನಡದ ಹೆಮ್ಮೆಯನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಎತ್ತಿ ಹಿಡಿದಿದ್ದರು. ಅವರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ಈ ಸುದ್ದಿಯನ್ನೂ ಓದಿ | SL Bhyrappa: ಸಾಹಿತ್ಯ ಲೋಕದ ಮಾಣಿಕ್ಯ ಕಣ್ಮರೆ... ಭೈರಪ್ಪ ನಿಜಕ್ಕೂ ಕನ್ನಡದ ಸರಸ್ವತಿ ಪುತ್ರನೇ!
ಸಂತೇಶಿವರ ಲಿಂಗಣ್ಣಯ್ಯ ಭೈರಪ್ಪ ಆಧುನಿಕ ಕನ್ನಡ ಸಾಹಿತ್ಯದ ಕಾದಂಬರಿಕಾರರು ಮತ್ತು ಲೇಖಕರು. ಕನ್ನಡ ಭಾಷೆಯಲ್ಲಿ ಪುಸ್ತಕಗಳನ್ನು ಬರೆದಿರುವ ಇವರ ಕೃತಿಗಳು ಇಂಗ್ಲೀಷ್ ಹಾಗೂ ಭಾರತೀಯ ಭಾಷೆಗಳಿಗೆ ಅನುವಾದಗೊಂಡು ಭಾರತದ ಸಾಹಿತ್ಯವಲಯದಲ್ಲಿ ಹೆಸರಾಗಿದ್ದಾರೆ. ಇವರ ಕಾದಂಬರಿಗಳು ಹಲವಾರು ಮರುಮುದ್ರಣಗಳನ್ನು ಕಂಡು ಕನ್ನಡದ ಜನಪ್ರಿಯ ಬರಹಗಾರರಾಗಿದ್ದಾರೆ.ಇವರಿಗೆ ಭಾರತ ಸರ್ಕಾರವು 2023ನೇ ಸಾಲಿನಲ್ಲಿ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಿದೆ.