ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ದೀಪಾವಳಿ ಹಬ್ಬಕ್ಕೆ ಕರ್ನಾಟಕ ಸರ್ಕಾರ ಸಿಹಿಸುದ್ದಿ ನೀಡಿದೆ. ಕೇಂದ್ರ ಸರ್ಕಾರ ತುಟ್ಟಿಭತ್ಯೆ ಹೆಚ್ಚಿಸಿದ (DA Hike) ಬೆನ್ನಲ್ಲೇ ರಾಜ್ಯ ಸರ್ಕಾರಿ ನೌಕರರಿಗೆ ಶೇ.2 ತುಟ್ಟಿ ಭತ್ಯೆ ಹೆಚ್ಚಳ ಮಾಡಲಾಗಿದ್ದು, ಈ ಬಗ್ಗೆ ಇದೀಗ ಅಧಿಕೃತ ಆದೇಶ ಹೊರಡಿಸಲಾಗಿದೆ. ತುಟ್ಟಿಭತ್ಯೆ ದರವನ್ನು ಶೇ.12.25ರಿಂದ 14.25ರಷ್ಟು ಪರಿಷ್ಕರಿಸಿ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ಆರ್ಥಿಕ ಇಲಾಖೆಯ (ಸೇವೆಗಳು-2) ಸರ್ಕಾರದ ಜಂಟಿ ಕಾರ್ಯದರ್ಶಿ ಉಮಾ ಕೆ. ಅವರು ಆದೇಶ ಹೊರಿಡಿಸಿದ್ದಾರೆ.
2024ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನವನ್ನು ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರುಗಳಿಗೆ 1ನೇ ಜುಲೈ 2025 ರಿಂದ ಜಾರಿಗೆ ಬರುವಂತೆ ತುಟ್ಟಿಭತ್ಯೆಯ ದರಗಳನ್ನು ಪ್ರಸ್ತುತ ಮೂಲ ವೇತನದ ಶೇಕಡ 12.25 ರಿಂದ ಶೇಕಡ 14.25 ಗೆ ಪರಿಷ್ಕರಿಸಿ ಮಂಜೂರು ಮಾಡಲು ಸರ್ಕಾರವು ಹರ್ಷಿಸುತ್ತದೆ ಎಂದು ತಿಳಿಸಿದ್ದಾರೆ.
ರಾಜ್ಯ ಸರ್ಕಾರಿ ನೌಕರರಿಗೆ ಜುಲೈ 1ರಿಂದ ಅನ್ವಯವಾಗುವಂತೆ ಬಾಕಿ ಇರುವ ತುಟ್ಟಿಭತ್ಯೆಯನ್ನು (Dearness Allowance) ರಾಜ್ಯ ಸರ್ಕಾರವು ನಗದು ರೂಪದಲ್ಲಿ ಬಿಡುಗಡೆ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರು ಇತ್ತೀಚೆಗೆ ಮನವಿ ಮಾಡಿದ್ದರು.
ಈ ಸುದ್ದಿಯನ್ನೂ ಓದಿ | DA Hike: ಕೇಂದ್ರ ಸರ್ಕಾರಿ ನೌಕರರಿಗೆ ಶುಭಸುದ್ದಿ- ಶೇ. 3ರಷ್ಟು ತುಟ್ಟಿ ಭತ್ಯೆ ಹೆಚ್ಚಳ
ಕೇಂದ್ರ ಸರ್ಕಾರವು ಅಖಿಲ ಭಾರತ ಬೆಲೆ ಸೂಚ್ಯಂಕವನ್ನಾಧರಿಸಿ ಉಲ್ಲೇಖಿತ ಆದೇಶದಲ್ಲಿ ದಿನಾಂಕ: 01-07-2025ರಿಂದ ಅನ್ವಯವಾಗುವಂತೆ ಕೇಂದ್ರ ಸರ್ಕಾರಿ ನೌಕರರಿಗೆ ಶೇ. 3%ರಷ್ಟು ತುಟ್ಟಿಭತ್ಯೆಯನ್ನು ಮಂಜೂರು ಮಾಡಿ ಆದೇಶಿಸಿದೆ. ಆದ್ದರಿಂದ, ಕರ್ನಾಟಕ ರಾಜ್ಯದ ಸರ್ಕಾರಿ ನೌಕರರಿಗೂ ದಿನಾಂಕ: 01-07-2025 ರಿಂದ ಅನ್ವಯವಾಗುವಂತೆ ಶೇ. 3%ರಷ್ಟು ತುಟ್ಟಿಭತ್ಯೆಯನ್ನು ಸಂಪೂರ್ಣ ನಗದು ರೂಪದಲ್ಲಿ ನೀಡಿ ಆದೇಶ ಹೊರಡಿಸಲು ಸಂಬಂಧಪಟ್ಟವರಿಗೆ ನಿರ್ದೇಶನ ನೀಡಲು ಕರ್ನಾಟಕ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ಕೋರಿದ್ದರು. ಹೀಗಾಗಿ ಶೇ.2ರಷ್ಟು ತುಟ್ಟಿ ಭತ್ಯೆ ಹೆಚ್ಚಳಕ್ಕೆ ಸಿಎಂ ಅನುಮೋದನೆ ನೀಡಿದ್ದರು. ಇದೀಗ ಆರ್ಥಿಕ ಇಲಾಖೆ ಅಧಿಕೃತ ಆದೇಶ ಹೊರಡಿಸಿದೆ.