ಬೆಂಗಳೂರು, ನ.3: ನಾಳೆ ಬೆಳಗಾವಿಗೆ ತೆರಳಿ ಕಬ್ಬು ಬೆಳೆಗಾರರ ಹೋರಾಟದಲ್ಲಿ ಪಾಲ್ಗೊಳ್ಳುವುದಾಗಿ ಬಿಜೆಪಿ (BJP) ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ (BY Vijayendra) ತಿಳಿಸಿದ್ದಾರೆ. ಭಾರತೀಯ ವಿದ್ಯಾಭವನದ ಬಿಜೆಪಿ ಚಿಂತನ ವರ್ಗದಲ್ಲಿ ಸೋಮವಾರ ಪಾಲ್ಗೊಂಡಿದ್ದ ಅವರು ಮಾಧ್ಯಮಗಳ ಜತೆ ಮಾತನಾಡಿದರು. ರಾಜ್ಯದಲ್ಲಿ ಅನೇಕ ಜ್ವಲಂತ ಸಮಸ್ಯೆಗಳಿವೆ. ಇವುಗಳ ಕಡೆ ರಾಜ್ಯ ಸರ್ಕಾರ (State Congress Government) ಗಂಭೀರ ಚಿಂತನೆ ಮಾಡುತ್ತಿಲ್ಲ ಎಂದು ಆರೋಪಿಸಿದ ಅವರು, ಕಲ್ಯಾಣ ಕರ್ನಾಟಕ, ಕಿತ್ತೂರು ಕರ್ನಾಟಕಗಳಲ್ಲಿ ಅತಿವೃಷ್ಟಿಯಿಂದ ರೈತರು ಸಂಕಷ್ಟದಲ್ಲಿದ್ದರು. ನಾವೂ ಪ್ರವಾಸ ಮಾಡಿದ್ದೆವು. ಜಿಲ್ಲಾ ಉಸ್ತುವಾರಿಗಳು ನಾಪತ್ತೆಯಾಗಿದ್ದಾರೆ ಎಂದು ಗಮನಕ್ಕೆ ತಂದಿದ್ದೇವೆ ಎಂದು ಹೇಳಿದರು.
ಇಲಾಖಾ ಅಧಿಕಾರಿಗಳೂ ತಲೆ ಕೆಡಿಸಿಕೊಳ್ಳುತ್ತಿಲ್ಲ. ತಕ್ಷಣ ಪರಿಹಾರ ಬಿಡುಗಡೆಗೆ ಒತ್ತಾಯಿಸಿದ್ದೇವೆ. ಆದರೆ, ಸಚಿವರು ಬೆಂಗಳೂರಿನಲ್ಲಿ ಕುಳಿತು ಕೇಂದ್ರ ಸರ್ಕಾರ ಪರಿಹಾರ ಕೊಟ್ಟಿಲ್ಲ ಎಂಬ ಹೇಳಿಕೆಗೆ ಸೀಮಿತ ಮಾಡಿದ್ದಾರೆಯೇ ವಿನಾ, ಸಂಕಷ್ಟದಲ್ಲಿರುವ ರೈತರಿಗೆ ಕಾಂಗ್ರೆಸ್ ಸರ್ಕಾರ ಪರಿಹಾರ ಕೊಟ್ಟಿಲ್ಲ ಎಂದು ದೂರಿದರು.
ಈ ಸುದ್ದಿಯನ್ನೂ ಓದಿ | Golden Chariot: ಚಕ್ರಗಳ ಮೇಲೆ ರಾಜ್ಯದ ಸಾಮ್ರಾಜ್ಯಗಳು; 6 ದಿನ ಹೋಗಿ ಅರಸರಾಗಿ ಬನ್ನಿ
ಬೆಳಗಾವಿ, ಬಾಗಲಕೋಟೆ, ಬಿಜಾಪುರ, ಉತ್ತರ ಕನ್ನಡದಲ್ಲೂ ಕಬ್ಬು ಬೆಳೆಗಾರರು ಕಳೆದ ಕೆಲವು ದಿನಗಳಿಂದ ಪ್ರತಿಭಟನೆ ಮಾಡುತ್ತಿದ್ದಾರೆ. ಅವರ ಬೇಡಿಕೆ ಈಡೇರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ, ಸಚಿವರು ತಲೆ ಕೆಡಿಸಿಕೊಂಡಿಲ್ಲ ಎಂದು ಟೀಕಿಸಿದ ಅವರು, ನಾಳೆ ಬೆಳಗಾವಿಗೆ ತೆರಳಿ ಕಬ್ಬು ಬೆಳೆಗಾರರ ಹೋರಾಟದಲ್ಲಿ ಪಾಲ್ಗೊಳ್ಳುವುದಾಗಿ ಅವರು ಹೇಳಿದರು.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡೂವರೆ ವರ್ಷವಾಗಿದ್ದು, ಚಾಮರಾಜನಗರ ಜಿಲ್ಲೆಯಲ್ಲಿ ಕೆರೆಗಳಿಗೆ ನೀರು ತುಂಬಿಸಿಲ್ಲವೆಂದು ಅಲ್ಲಿನ ರೈತರು ಪ್ರತಿಭಟನೆ ಮಾಡುತ್ತಿದ್ದಾರೆ. ಈ ವಿಷಯದಲ್ಲೂ ರಾಜ್ಯ ಸರ್ಕಾರ ಗಮನ ಹರಿಸುತ್ತಿಲ್ಲ. ಒಟ್ಟಾರೆಯಾಗಿ ನಾಡಿನ ರೈತರ ಸಮಸ್ಯೆಗಳ ಬಗ್ಗೆ ಚಕಾರವನ್ನೂ ಎತ್ತದ ಈ ಕಾಂಗ್ರೆಸ್ ಸರ್ಕಾರವು ರೈತರ ವಿಚಾರದಲ್ಲಿ ಕಿಂಚಿತ್ತೂ ಕಾಳಜಿ ತೋರಿಸುತ್ತಿಲ್ಲ. ಇದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಾಂಗ್ರೆಸ್ಸಿನ ಒಳಗೆ ಸಿಎಂ ಕುರ್ಚಿಗಾಗಿ ಪೈಪೋಟಿ, ಬೀದಿಗಿಳಿದು ಹೊಡೆದಾಟ, ಬಡಿದಾಟ ನಡೆದಿದೆ. ನವೆಂಬರ್ ತಿಂಗಳಿಗೆ ಏನಾಗುತ್ತೋ ಕಾದು ನೋಡೋಣ. ಆದರೆ, ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಕೃಷಿ ಸಚಿವರು, ಕಂದಾಯ ಸಚಿವರು, ಕಬ್ಬು ಬೆಳೆಗಾರರ ಹಾಗೂ ರೈತರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಆಗ್ರಹಿಸಿದರು. ಅದು ಸರ್ಕಾರದ ಕರ್ತವ್ಯ ಎಂದು ತಿಳಿಸಿದರು.
ಪ್ರಿಯಾಂಕ್ ಖರ್ಗೆ ಅವರು ತಮ್ಮ ಇಲಾಖೆ ಕುರಿತು ಮಾತನಾಡದೇ, ಜಗತ್ತು, ದೇಶ, ಸಂಘ ಪರಿವಾರದ ಕುರಿತು ಮಾತನಾಡುತ್ತಿದ್ದಾರೆ. ನಮ್ಮ ಗೃಹ ಸಚಿವರು, ಸಂಘ ಪರಿವಾರದ ಹಿರಿಯರೂ ಉತ್ತರ ಕೊಟ್ಟಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಹೇಳಿದರು.