ನವದೆಹಲಿ, ಫೆ. 2: ಕರ್ನಾಟಕ-ತಮಿಳುನಾಡು ನಡುವಿನ ಪೆನ್ನಾರ್ ನದಿ ನೀರು ಹಂಚಿಕೆ ವಿವಾದ (Pennar River Dispute) ಸಂಬಂಧ ಸುಪ್ರೀಂಕೋರ್ಟ್ನಲ್ಲಿ ರಾಜ್ಯಕ್ಕೆ ಹಿನ್ನಡೆಯಾಗಿದೆ. ವಿವಾದ ಬಗೆಹರಿಸಲು ನ್ಯಾಯಾಧಿಕರಣ (tribunal) ರಚನೆಗೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಈ ಬಗ್ಗೆ ನ್ಯಾ. ವಿಕ್ರಮ್ ನಾಥ್ ಮತ್ತು ನ್ಯಾ.ಎನ್.ವಿ. ಅಂಜಾರಿಯಾ ಅವರಿದ್ದ ಪೀಠ ಮಹತ್ವದ ಆದೇಶ ನೀಡಿದೆ.
ವಿವಾದದ ಬಗ್ಗೆ ಕಳೆದ ಡಿಸೆಂಬರ್ನಲ್ಲಿ ವಿಚಾರಣೆ ನಡೆಸಿದ್ದ ಕೋರ್ಟ್ ತೀರ್ಪನ್ನು ಕಾಯ್ದಿರಿಸಿತ್ತು. ಇದೀಗ 1 ತಿಂಗಳ ಒಳಗೆ ನ್ಯಾಯಾಧಿಕರಣ ರಚನೆ ಮಾಡುವಂತೆ ಆದೇಶಿಸುವ ಮೂಲಕ ಕರ್ನಾಟಕ ಸರ್ಕಾರದ ವಾದವನ್ನು ಕೋರ್ಟ್ ತಿರಸ್ಕರಿಸಿದೆ.
ನ್ಯಾಯಾಧೀಕರಣ ರಚನೆ ಬೇಡ, ಮಾತುಕತೆ ಮೂಲಕ ವಿವಾದ ಬಗೆಹರಿಸುಕೊಳ್ಳುತ್ತೇವೆ ಎಂದು ಕರ್ನಾಟಕ ಹೇಳಿತ್ತು. ಆದರೆ ನ್ಯಾಯಾಧೀಕರಣ ರಚಿಸುವಂತೆ ತಮಿಳುನಾಡು ವಾದಿಸಿತ್ತು. ತಮಿಳುನಾಡು ಸರ್ಕಾರದ ವಾದ ಪುರಸ್ಕರಿಸಿರುವ ಸುಪ್ರೀಂಕೋರ್ಟ್ ಈ ಬಗ್ಗೆ ಆದೇಶ ಪ್ರಕಟಿಸಿದೆ.
ಏನಿದು ವಿವಾದ?
ದಕ್ಷಿಣ ಪಿನಾಕಿನಿ (ಪೆನ್ನಾರ್) ನದಿಯ ಕಣಿವೆಯಲ್ಲಿ ಕರ್ನಾಟಕ ಸರ್ಕಾರವು ಮಾರ್ಕಂಡೇಯ ನದಿಗೆ ಅಡ್ಡಲಾಗಿ ಅಣೆಕಟ್ಟೆ ನಿರ್ಮಿಸಿದೆ. ಬೆಂಗಳೂರಿನ ಎಲೆ ಮಲ್ಲಪ್ಪ ಚೆಟ್ಟಿ ಕೆರೆಯಿಂದ ಹೊಸಕೋಟೆಯವರೆಗೆ ನೀರು ಹರಿಸುವ ಕಾಮಗಾರಿ, ಬ್ಯಾಲಹಳ್ಳಿ ಹತ್ತಿರ ಪೆನ್ನಾರ್ ನದಿಯಿಂದ ನೀರು ಹರಿಸುವ ಕಾಮಗಾರಿಗಳನ್ನು ಕೈಗೆತ್ತಿಕೊಂಡಿದೆ. ಈ ಯೋಜನೆಗೆ ತಮಿಳುನಾಡು ಸರ್ಕಾರ ವಿರೋಧ ವ್ಯಕ್ತಪಡಿಸಿ ಸುಪ್ರೀಂ ಕೋರ್ಟ್‌ಗೆ 2018ರ ಮೇ 18ರಂದು ಅರ್ಜಿ ಸಲ್ಲಿಸಿತ್ತು. ಜಲವಿವಾದ ನ್ಯಾಯ ಮಂಡಳಿ ಸ್ಥಾಪಿಸುವಂತೆ ಒತ್ತಾಯಿಸಿ ತಮಿಳುನಾಡು ಸರ್ಕಾರವು ಕೇಂದ್ರ ಸರ್ಕಾರಕ್ಕೆ 2019ರ ನವೆಂಬರ್‌ನಲ್ಲಿ ಮನವಿ ಮಾಡಿತ್ತು.
ಕರ್ನಾಟಕದಲ್ಲಿ ಚೆಕ್‌ಡ್ಯಾಮ್‌ಗಳು ನಿರ್ಮಿಸಿದರೆ ತಮಿಳುನಾಡಿನ ಉತ್ತರ ಜಿಲ್ಲೆಗಳಾದ ಕೃಷ್ಣಗಿರಿ, ಧರ್ಮಪುರಿ ಮುಂತಾದ ಕಡೆ ಪೆನ್ನಾರ್ ನದಿ ನೀರಿನ ಹರಿವು ಕುಂಠಿತವಾಗುತ್ತದೆ ಎಂದು ತಮಿಳುನಾಡು ವಾದಿಸಿತ್ತು. 1892ರ ಮೈಸೂರು-ಮದ್ರಾಸ್ ಒಪ್ಪಂದದ ಪ್ರಕಾರ, ಕರ್ನಾಟಕವು ಕೆಳಭಾಗದ ರಾಜ್ಯದ ಅನುಮತಿಯಿಲ್ಲದೆ ಯಾವುದೇ ಹೊಸ ಯೋಜನೆಗಳನ್ನು ಕೈಗೊಳ್ಳುವಂತಿಲ್ಲ ಎಂದು ತಮಿಳುನಾಡು ಪ್ರತಿಪಾದಿಸಿತ್ತು. ಆದರೆ ಕುಡಿಯುವ ನೀರಿನ ಉದ್ದೇಶಕ್ಕಾಗಿ ಈ ಯೋಜನೆಗಳು ಇರುವುದರಿಂದ 1892ರ ಒಪ್ಪಂದದ ಉಲ್ಲಂಘನೆಯಾಗುವುದಿಲ್ಲ ಮತ್ತು ರಾಜ್ಯಕ್ಕೆ ತನ್ನ ಪಾಲಿನ ನೀರನ್ನು ಬಳಸುವ ಹಕ್ಕಿದೆ ಎಂದು ಕರ್ನಾಟಕ ಹೇಳಿತ್ತು.
ಜಲಶಕ್ತಿ ಸಚಿವಾಲಯವು 2020ರಲ್ಲಿ ನಡೆಸಿದ್ದ ಸಂಧಾನ ವಿಫಲವಾಗಿತ್ತು. ಹೀಗಾಗಿ ಹೊಸದಾಗಿ ಸಂಧಾನ ನಡೆಸುವಂತೆ ಕರ್ನಾಟಕ ಸರ್ಕಾರವು ಕೇಂದ್ರವನ್ನು 2024ರಲ್ಲಿ ಒತ್ತಾಯಿಸಿತ್ತು. ಈ ನಡುವೆ, ಸುಪ್ರೀಂ ಕೋರ್ಟ್ ನಿರ್ದೇಶನದ ಪ್ರಕಾರ, ಕೇಂದ್ರ ಜಲ ಆಯೋಗದ ಅಧ್ಯಕ್ಷರ ನೇತೃತ್ವದಲ್ಲಿ ಜಲಶಕ್ತಿ ಸಚಿವಾಲಯವು ಹೊಸ ಸಂಧಾನ ಸಮಿತಿ ರಚಿಸಿತ್ತು. ಈ ಸಮಿತಿಯು ಉಭಯ ರಾಜ್ಯಗಳ ನಡುವೆ 9 ಸಭೆಗಳನ್ನು ನಡೆಸಿತ್ತು. ಯೋಜನಾ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲಿಸಿತ್ತು.
ಜಲ ವಿವಾದ ಬಗೆಹರಿಸಲು ನ್ಯಾಯಮಂಡಳಿ ರಚಿಸುವ ಕೇಂದ್ರ ಸರ್ಕಾರದ ಪ್ರಸ್ತಾವಕ್ಕೆ ಕರ್ನಾಟಕ ಸರ್ಕಾರ ವಿರೋಧ ವ್ಯಕ್ತಪಡಿಸಿತ್ತು. ಮಾತುಕತೆಯ ಮೂಲಕ ಈ ವಿವಾದವನ್ನು ಸೌಹಾರ್ದ ಯುತವಾಗಿ ಬಗೆಹರಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ಸರ್ಕಾರವು ಜಲಶಕ್ತಿ ಸಚಿವಾಲಯಕ್ಕೆ ಪತ್ರ ಬರೆದಿತ್ತು.
Union Budget 2026: ವಿಕಸಿತ ಭಾರತದ ಬ್ಲೂಪ್ರಿಂಟ್ ನಮ್ಮ ಬಜೆಟ್: ಪ್ರಲ್ಹಾದ್ ಜೋಶಿ ಬಣ್ಣನೆ
ಕರ್ನಾಟಕದ ಜಲಾನಯನ ಪ್ರದೇಶದಲ್ಲಿ ಒಟ್ಟು 11.77 ಟಿಎಂಸಿ ನೀರಿನಲ್ಲಿ 9.77 ಟಿಎಂಸಿ ನೀರನ್ನು ಬಳಸಲು ಯೋಜಿಸಲಾಗಿದೆ. ಇದರಲ್ಲಿ 2 ಟಿಎಂಸಿ ಮತ್ತು ಹೆಚ್ಚುವರಿ ನೀರು ತಮಿಳುನಾಡಿಗೆ ಉಳಿದಿದೆ. ಇದು ತಮಿಳುನಾಡಿನ ಅವಶ್ಯಕತೆಗಳನ್ನು ಪೂರೈಸಲು ಸಾಕಾಗುತ್ತದೆ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿತ್ತು. ಆದರೆ, ಇದೀಗ ವಿವಾದ ಬಗೆಹರಿಸಲು ನ್ಯಾಯಾಧೀಕರಣ ರಚನೆ ಮಾಡಲು ಸುಪ್ರೀಂ ಕೋರ್ಟ್ ಸೂಚಿಸಿದೆ.