ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

''ನಿಮ್ಮ ಪ್ರೀತಿಗೆ ಧನ್ಯವಾದʼʼ: ಸಿಎಂ ಹುದ್ದೆಗೆ ರಾಜೀನಾಮೆ ಸಲ್ಲಿಸಿ ಭಾವುಕ ಪೋಸ್ಟ್‌ ಹಂಚಿಕೊಂಡ ಸಿದ್ದರಾಮಯ್ಯ

Siddaramaiah Resigns: ಕಾಂಗ್ರೆಸ್‌ ಹೈಕಮಾಂಡ್‌ ಸೂಚನೆ ಮೇರೆಗೆ ಸಿದ್ದರಾಮಯ್ಯ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ಈ ಮಧ್ಯೆ ಎಕ್ಸ್‌ನಲ್ಲಿ ಭಾವುಕ ಪೋಸ್ಟ್‌ ಹಂಚಿಕೊಂಡು, ʼʼನನ್ನನ್ನು ಶಾಸಕಾಂಗ ಪಕ್ಷದ ನಾಯಕನಾಗಿ ಆರಿಸಿ, ಈವರೆಗೆ ಮುಖ್ಯಮಂತ್ರಿಯಾಗಿ ಜನಸೇವೆಗೆ ಅವಕಾಶ ಮಾಡಿಕೊಟ್ಟ ಪಕ್ಷದ ಶಾಸಕರಿಗೆ, ನನ್ನ ಹೆಗಲಿಗೆ ಹೆಗಲಾಗಿ ದುಡಿದ ಸಂಪುಟ ಸಹೋದ್ಯೋಗಿಗಳಿಗೆ, ಅವಕಾಶ ನೀಡಿದ ಪಕ್ಷದ ವರಿಷ್ಠರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಹಾಗೂ ನನ್ನ ರಾಜಕೀಯ ಬದುಕಿನುದ್ದಕ್ಕೂ ಪ್ರೀತಿ ತುಂಬಿದ, ಅಭಿಮಾನಿಸಿದ, ಇಲ್ಲಿಯ ತನಕ ಕೈಹಿಡಿದು ನಡೆಸಿದ ಹೃದಯವಂತ ಕನ್ನಡಿಗರಿಗೆ ನಾನು ಚಿರಋಣಿʼʼ ಎಂದಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಸಿದ್ದರಾಮಯ್ಯ ಮಾತನಾಡಿದರು

ಬೆಂಗಳೂರು, ಮೇ 28: ಕಾಂಗ್ರೆಸ್‌ ಹೈಕಮಾಂಡ್‌ ಸೂಚನೆ ಮೇರೆಗೆ ಸಿದ್ದರಾಮಯ್ಯ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ (Siddaramaiah Resigns). ಗುರುವಾರ (ಮೇ 28) ಅಪರಾಹ್ನ ಲೋಕ ಭವನಕ್ಕೆ ತೆರಳಿದ ಅವರು ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಅವರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆ ಪತ್ರ ನೀಡಿದ್ದಾರೆ. ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಯಾವುದೇ ಕಾರಣಕ್ಕೂ ರಾಷ್ಟ್ರ ರಾಜಕೀಯಕ್ಕೆ ತೆರಳುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಈ ಮಧ್ಯೆ ಎಕ್ಸ್‌ ಖಾತೆಯಲ್ಲಿ ಭಾವುಕ ಪೋಸ್ಟ್‌ ಹಂಚಿಕೊಂಡು ಕಾಂಗ್ರೆಸ್‌ ನಾಯಕರಿಗೆ, ನೆರವಾದವರಿಗೆ ಧನ್ಯವಾದ ತಿಳಿಸಿದ್ದಾರೆ.

ʼʼಇಂದು ಲೋಕಭವನಕ್ಕೆ ತೆರಳಿ ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಅವರ ವಿಶೇಷ ಕಾರ್ಯದರ್ಶಿಗಳಿಗೆ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ನನ್ನ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದೇನೆ. ಹಳ್ಳಿಗಾಡಿನಲ್ಲಿ ಹುಟ್ಟಿಬೆಳೆದ ನಾನು ಮುಂದೊಂದು ದಿನ ಈ ರಾಜ್ಯದ ಶಾಸಕ, ಮಂತ್ರಿ, ವಿರೋಧ ಪಕ್ಷದ ನಾಯಕ, ಎರಡೆರಡು ಬಾರಿ ಮುಖ್ಯಮಂತ್ರಿಯಾಗುತ್ತೇನೆ ಎಂಬ ಕನಸನ್ನು ಸಹ ಕಂಡಿರಲಿಲ್ಲ. ಇಂತದ್ದೊಂದು ದುಬಾರಿಯಾದ ಕನಸು ನನಸಾಗಿರುವುದು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನದಿಂದʼʼ ಎಂದಿದ್ದಾರೆ.

ಸಿದ್ದರಾಮಯ್ಯ ಅವರ ಎಕ್ಸ್‌ ಪೋಸ್ಟ್‌:



ʼʼಬುದ್ಧ, ಬಸವ, ಬಾಬಾ ಸಾಹೇಬರು, ಮಹಾತ್ಮ ಗಾಂಧಿ ನನ್ನ ಆದರ್ಶ. ನನ್ನ ನಲವತ್ತೆಂಟು ವರ್ಷಗಳ ರಾಜಕೀಯ ಜೀವನದಲ್ಲಿ ನಾಡಿನ ಅವಕಾಶ ವಂಚಿತ, ಶೋಷಿತ, ಬಡ ಜನರ ಪರವಾಗಿ ಪ್ರಾಮಾಣಿಕವಾಗಿ ದುಡಿದ ಸಂತೃಪ್ತಿಯಿದೆ. ನನ್ನನ್ನು ಶಾಸಕಾಂಗ ಪಕ್ಷದ ನಾಯಕನಾಗಿ ಆರಿಸಿ, ಈವರೆಗೆ ಮುಖ್ಯಮಂತ್ರಿಯಾಗಿ ಜನಸೇವೆಗೆ ಅವಕಾಶ ಮಾಡಿಕೊಟ್ಟ ಪಕ್ಷದ ಶಾಸಕರಿಗೆ, ನನ್ನ ಹೆಗಲಿಗೆ ಹೆಗಲಾಗಿ ದುಡಿದ ಸಂಪುಟ ಸಹೋದ್ಯೋಗಿಗಳಿಗೆ, ಅವಕಾಶ ನೀಡಿದ ಪಕ್ಷದ ವರಿಷ್ಠರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಹಾಗೂ ನನ್ನ ರಾಜಕೀಯ ಬದುಕಿನುದ್ದಕ್ಕೂ ಪ್ರೀತಿ ತುಂಬಿದ, ಅಭಿಮಾನಿಸಿದ, ಇಲ್ಲಿಯ ತನಕ ಕೈಹಿಡಿದು ನಡೆಸಿದ ಹೃದಯವಂತ ಕನ್ನಡಿಗರಿಗೆ ನಾನು ಚಿರಋಣಿʼʼ ಎಂದು ಹೇಳಿದ್ದಾರೆ.

ʼʼರಾಷ್ಟ್ರ ರಾಜಕಾರಣಕ್ಕೆ ಹೋಗಲ್ಲʼʼ: ಸಿದ್ದರಾಮಯ್ಯ ಸ್ಪಷ್ಟನೆ

ಹೋರಾಟ ಮುಂದುವರಿಸುವ ಸೂಚನೆ

ʼʼಸಂವಿಧಾನವೇ ನನಗೆ ಧರ್ಮ, ಜನರೇ ನನ್ನ ಪಾಲಿನ ದೇವರು. ನನ್ನ ರಾಜೀನಾಮೆ ಮುಖ್ಯಮಂತ್ರಿ ಹುದ್ದೆಗೆ ಮಾತ್ರವೇ ಸೀಮಿತ, ಸಕ್ರಿಯ ರಾಜಕಾರಣಕ್ಕಲ್ಲ. ನನ್ನ ಜೀವದ ಕೊನೆಯುಸಿರು ಇರುವವರೆಗೂ ಸಾಮಾಜಿಕ ನ್ಯಾಯಕ್ಕಾಗಿ ಮತ್ತು ಸಂವಿಧಾನ ವಿರೋಧಿ ಕೋಮುವಾದಿ ಶಕ್ತಿಗಳ ವಿರುದ್ಧ ಹೋರಾಟ ಮಾಡುತ್ತೇನೆʼʼ ಎಂದು ಘೋಷಿಸಿದ್ದಾರೆ.

“ನಾನು ನಿಮಗೆ ರೇಗಿದ್ದರೆ ಅದನ್ನು ವೈಯಕ್ತಿಕವಾಗಿ ತೆಗೆದುಕೊಳ್ಳಬೇಡಿ”: ಸಚಿವರಿಗೆ ಸಿದ್ದರಾಮಯ್ಯ ಭಾವುಕ ವಿದಾಯ

ಕುತೂಹಲ ಮೂಡಿಸಿದ ನಡೆ

ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ ಮುಂದಿನ ಹಂತದ ಮಾತುಕತೆಗಾಗಿ ದೆಹಲಿಗೆ ತೆರಳಿದ್ದಾರೆ. ಅಲ್ಲಿ ಅವರು ರಾಹುಲ್‌ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅವರಂತಹ ಉನ್ನತ ನಾಯಕರನ್ನು ಭೇಟಿಯಾಗಲಿದ್ದಾರೆ. ಇತ್ತ ಡಿ.ಕೆ. ಶಿವಕುಮಾರ್‌ ಪ್ರಮಾಣ ವಚನ ಸ್ವೀಕರಿಸಲು ಸಿದ್ಧತೆ ನಡೆಸುತ್ತಿದ್ದಾರೆ. ಮೂಲಗಳ ಪ್ರಕಾರ ಗೋಧೋಳಿ ಮುಹೂರ್ತದಲ್ಲಿ ಡಿಕಶಿ ಮುಖ್ಯಮಂತ್ರಿಯಾಗಿ ಅದಿಕಾರ ಸ್ವೀಕರಿಸಲಿದ್ದಾರೆ. ಯಾವಾಗ ಸಮಾರಂಭ ನಡೆಯಲಿದೆ ಎನ್ನುವುದು ಇನ್ನೂ ಸ್ಪಷ್ಟವಾಗಿಲ್ಲ. ಡಿಕೆಶಿ ಮಹೂರ್ತದ ಬಗ್ಗೆ ಜ್ಯೋತಿಷಿ ಬಳಿ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

ರಾಜ್ಯದ ಇನ್ನಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ.

ʼಪ್ರವಾಸಿ ಪ್ರಪಂಚʼ ವೆಬ್‌ಸೈಟ್‌ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್‌ ಮಾಡಿ.

Ramesh Ballamoole

View all posts by this author