Bengaluru stampede: ಕಾಲ್ತುಳಿತ ಪ್ರಕರಣ; ನಾಲ್ವರು ಪೊಲೀಸ್ ಅಧಿಕಾರಿಗಳ ಅಮಾನತು ಆದೇಶ ಹಿಂಪಡೆದ ರಾಜ್ಯ ಸರ್ಕಾರ
Chinnaswamy stampede: ಕಾಲ್ತುಳಿದ ಪ್ರಕರಣದಲ್ಲಿ ಕರ್ತವ್ಯ ಲೋಪ ಹಿನ್ನೆಲೆಯಲ್ಲಿ ಬೆಂಗಳೂರು ಪೊಲೀಸ್ ಕಮಿಷನರ್ ಬಿ.ದಯಾನಂದ್, ಡಿಸಿಪಿ ಶೇಖರ್ ಎಚ್.ಟಿ., ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ ಎಎಸ್‌ಐ ಬಾಲಕೃಷ್ಣ ಹಾಗೂ ಇನ್ಸ್‌ಪೆಕ್ಟರ್ ಗಿರೀಶ್ ಅವರನ್ನು ಅಮಾನತು ಮಾಡಲಾಗಿತ್ತು. ಇದೀಗ ಈ ಅಧಿಕಾರಿಗಳ ಅಮಾನತು ಆದೇಶ ಹಿಂಪಡೆಯಲಾಗಿದೆ.


ಬೆಂಗಳೂರು: ನಗರದ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದಿದ್ದ ಕಾಲ್ತುಳಿತ ಪ್ರಕರಣಕ್ಕೆ (Bengaluru stampede) ಸಂಬಂಧಿಸಿ ನಾಲ್ವರು ಪೊಲೀಸ್ ಅಧಿಕಾರಿಗಳ ಅಮಾನತು ಆದೇಶವನ್ನು ರಾಜ್ಯ ಸರ್ಕಾರ ಹಿಂಪಡೆದಿದೆ. ಕರ್ತವ್ಯ ಲೋಪ ಆರೋಪದಲ್ಲಿ ಬೆಂಗಳೂರು ಪೊಲೀಸ್ ಕಮಿಷನರ್ ಬಿ.ದಯಾನಂದ್, ಡಿಸಿಪಿ ಶೇಖರ್ ಎಚ್.ಟಿ., ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ ಎಎಸ್‌ಐ ಬಾಲಕೃಷ್ಣ ಹಾಗೂ ಇನ್ಸ್‌ಪೆಕ್ಟರ್ ಗಿರೀಶ್ ಅವರನ್ನು ಅಮಾನತು ಮಾಡಲಾಗಿತ್ತು, ಇದೀಗ ಈ ಅಧಿಕಾರಿಗಳ ಅಮಾನತು ಆದೇಶವನ್ನು ರಾಜ್ಯ ಸರ್ಕಾರ ಹಿಂಪಡೆದಿದೆ.
ಪೊಲೀಸ್ ಅಧಿಕಾರಿಗಳನ್ನು ಹೊಣೆ ಮಾಡಿ ಅಮಾನತು ಮಾಡಿದ್ದರಿಂದ ಸರ್ಕಾರದ ವಿರುದ್ಧ ಭಾರೀ ಟೀಕೆಗಳು ವ್ಯಕ್ತವಾಗಿದ್ದವು. ಆದರೆ ಇದೀಗ ಅಮಾನತು ಆದೇಶವನ್ನು ಸರ್ಕಾರ ವಾಪಸ್ ಪಡೆದುಕೊಂಡಿದೆ.
ಜೂನ್ 4ರಂದು ನಡೆದ ಕಾಲ್ತುಳಿತ ಪ್ರಕರಣವನ್ನು ರಾಜ್ಯ ಸರ್ಕಾರ ಮ್ಯಾಜಿಸ್ಟೀರಿಯಲ್ ವಿಚಾರಣೆಗೆ ಆದೇಶಿಸಿತ್ತು. ಘಟನೆಯ ಕುರಿತು ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಮ್ಯಾಜಿಸ್ಟ್ರೇಟ್ ಜಗದೀಶ್ ಜಿ. ಅವರು ತನಿಖೆ ನಡೆಸಿದ್ದರು. ಇದಲ್ಲದೆ, ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕೆಲ್ ಡಿ ಕುನ್ಹಾ ಅವರ ಅಧ್ಯಕ್ಷತೆಯಲ್ಲಿ ಏಕಸದಸ್ಯ ತನಿಖಾ ಆಯೋಗ ರಚಿಸಿತ್ತು.

ಈ ಸುದ್ದಿಯನ್ನೂ ಓದಿ | Stampede: ಅವಸಾನೇಶ್ವರ ದೇವಾಲಯದ ಶೆಡ್ ಮೇಲೆ ಬಿದ್ದ ವಿದ್ಯುತ್ ತಂತಿ; ಇಬ್ಬರ ಸಾವು, ಕಾಲ್ತುಳಿತದ ಪರಿಸ್ಥಿತಿ ನಿರ್ಮಾಣ
ನ್ಯಾಯಾಂಗ ಆಯೋಗ ಮತ್ತು ಮ್ಯಾಜಿಸ್ಟೀರಿಯಲ್ ಸಮಿತಿ ತನಿಖೆಯನ್ನು ಪೂರ್ಣಗೊಳಿಸಿ, ಕ್ರಮವಾಗಿ ಜುಲೈ 10 ಮತ್ತು 11 ಸರ್ಕಾರಕ್ಕೆ ವರದಿ ಸಲ್ಲಿಸಿದ್ದವು. ಇದಲ್ಲದೆ, ಅಧಿಕಾರಿಗಳು ತಮ್ಮ ಅಮಾನತ್ತನ್ನು ರದ್ದುಗೊಳಿಸುವಂತೆ ಕೋರಿದ್ದರು. ಈ ಎಲ್ಲಾ ಅಂಶಗಳನ್ನು ಗಮನದಲ್ಲಿಟ್ಟುಕೊಂಡು, ಮರು ಪರಿಶೀಲನೆ ಬಳಿಕ ಅಧಿಕಾರಿಗಳ ಅಮಾನತು ಆದೇಶವನ್ನು ರಾಜ್ಯ ಸರ್ಕಾರ ಹಿಂಪಡೆದಿದೆ.
ಬೆಂಗಳೂರು ಪಶ್ಚಿಮ ವಲಯದ ಹೆಚ್ಚುವರಿ ಪೊಲೀಸ್ ಕಮಿಷನರ್ ಆಗಿದ್ದ ಐಜಿಪಿ ವಿಕಾಸ್ ಕುಮಾರ್ ಅವರನ್ನು ಹೊರತುಪಡಿಸಿ, ನಾಲ್ವರು ಪೊಲೀಸ್ ಅಧಿಕಾರಿಗಳ ಅಮಾನತು ಆದೇಶವನ್ನು ರಾಜ್ಯ ಸರ್ಕಾರ ವಾಪಸ್ ಪಡೆದುಕೊಂಡಿದೆ.
ವಿಕಾಸ್ ಕುಮಾರ್ ಅವರ ಅಮಾನತು ಆದೇಶವನ್ನು ಕೇಂದ್ರೀಯ ಆಡಳಿತಾತ್ಮಕ ನ್ಯಾಯಮಂಡಳಿ (ಸಿಎಟಿ) ರದ್ದುಗೊಳಿಸಿತ್ತು. ಅರ್ಜಿದಾರರನ್ನು ಪುನಃ ಕರ್ತವ್ಯಕ್ಕೆ ನಿಯೋಜಿಸುವಂತೆ ರಾಜ್ಯ ಸರ್ಕಾರಕ್ಕೆ ಆದೇಶಿಸಿತ್ತು. ಈ ಆದೇಶವನ್ನು ಸರ್ಕಾರ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದೆ. ಪ್ರಕರಣ ಹೈಕೋರ್ಟ್‌ನಲ್ಲಿ ಇರುವ ಕಾರಣ ಐಜಿಪಿ ವಿಕಾಸ್ ಕುಮಾರ್ ಅವರ ಅಮಾನತು ಆದೇಶವನ್ನು ಸರ್ಕಾರ ಹಿಂದಕ್ಕೆ ಪಡೆದಿಲ್ಲ.