ಬೆಂಗಳೂರು, ಜ. 28: ಕೆಎಸ್‌ಆರ್‌ಟಿಸಿ ಸ್ಟಾಫ್ ವರ್ಕರ್ಸ್ ಫೆಡರೇಷನ್ ಅಧ್ಯಕ್ಷ, ಕಾರ್ಮಿಕ ಮುಖಂಡ ಎಚ್.ವಿ. ಅನಂತ ಸುಬ್ಬರಾವ್ (Anantha Subbarao) ಹೃದಯಾಘಾತದಿಂದ ಬುಧವಾರ (ಜನವರಿ 28) ನಿಧನ ಹೊಂದಿದರು. ಅವರಿಗೆ 85 ವರ್ಷ ವಯಸ್ಸಾಗಿತ್ತು. ಹೃದಯಾಘಾತ ಕಾಣಿಸಿಕೊಂಡ ತಕ್ಷಣ ಅವರನ್ನು ಬೆಂಗಳೂರಿನ ವಿಜಯನಗರದಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ದುರದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಅನಂತ್ ಸುಬ್ಬರಾವ್ ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿಯ ಅಧ್ಯಕ್ಷರಾಗಿದ್ದರು. ಕಳೆದ ಐದು ದಶಕಗಳಿಂದ ಸಾರಿಗೆ ನೌಕರರ ಪರ ಹೋರಾಟ ಮಾಡಿಕೊಂಡು ಬಂದಿದ್ದರು. ಗುರುವಾರ (ಜನವರಿ 29) ಅವರು ಬೆಂಗಳೂರು ಚಲೋ ಮುಷ್ಕರಕ್ಕೆ ಕರೆ ನೀಡಿದ್ದರು. ಅದಕ್ಕಾಗಿ ಸಿದ್ಧತೆಯನ್ನೂ ನಡೆಸಿದ್ದರು. ಇದೀಗ ಅವರ ನಿಧನದ ಹಿನ್ನೆಲೆಯಲ್ಲಿ ಬೆಂಗಳೂರು ಚಲೋವನ್ನು ಮುಂದೂಡಲಾಗಿದೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಕ್ರಿಯಾ ಸಮಿತಿ ಮುಖಂಡರಾಗಿದ್ದ ಅವರು 4 ಸಾರಿಗೆ ನಿಗಮಗಳ ನೌಕರರ ಬೇಡಿಕೆ ಈಡೇರಿಕೆಗಾಗಿ ಜನವರಿ 29ರಂದು ಬೆಂಗಳೂರು ಚಲೋಗೆ ಕರೆ ನೀಡಿದ್ದರು.
ಅನಂತ್ ಸುಬ್ಬರಾವ್ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕು ಮೂಲದವರು. ಅವರು ನಿಧನರಾದ ಹಿನ್ನಲೆಯಲ್ಲಿ ಗುರುವಾರ ನಡೆಯಬೇಕಾಗಿದ್ದ ಸಾರಿಗೆ ನೌಕರರ ಮುಷ್ಕರ ಹಾಗೂ ಬೆಂಗಳೂರು ಚಲೋವನ್ನು ಮುಂದೂಡಲಾಗಿದ್ದು, ಬಸ್‌ಗಳು ಎಂದಿನಂತೆ ಸಂಚರಿಸಲಿವೆ ಎಂದು ಮೂಲಗಳು ತಿಳಿಸಿವೆ.
ಸಿದ್ದರಾಮಯ್ಯ ಅವರ ಎಕ್ಸ್ ಪೋಸ್ಟ್:
ಇಂದು ಏನಾಯ್ತು?
ಅನಂತ್ ಸುಬ್ಬರಾವ್ ಅವರ ಆಪ್ತ ಡಿ.ಎ. ವಿಜಯ ಭಾಸ್ಕರ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ ಘಟನೆ ಬಗ್ಗೆ ಮಾಹಿತಿ ನೀಡಿದ್ದಾರೆ. ʼʼಬುಧವಾರ ಸಂಜೆ 5.30ರ ಸುಮಾರಿನಲ್ಲಿ ಅನಂತ್ ಸುಬ್ಬರಾವ್ ಅವರಿಗೆ ಹೃದಯಾಘಾತವಾಗಿತ್ತು. ಕೂಡಲೇ ಅವರನ್ನು ವಿಜಯನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಅನಂತ್ ಸುಬ್ಬರಾವ್ ಸಾವನ್ನಪ್ಪಿದ್ದಾರೆ. ಬೆಂಗಳೂರು ಚಲೋ ಬಗ್ಗೆ ಬುಧವಾರ ಸಂಜೆ ವಿವಿಧ ನಾಯಕರೊಂದಿಗೆ ಚರ್ಚೆಯನ್ನೂ ನಡೆಸಿದ್ದರು. ಅದಾದ ಬಳಿಕ ಅಸ್ವಸ್ಥರಾದರುʼʼ ಎಂದು ಹೇಳಿದ್ದಾರೆ.
ತೇಜಸ್ವಿ ಸೂರ್ಯ ಅವರ ಎಕ್ಸ್ ಪೋಸ್ಟ್:
ಅನಿರ್ಧಿಷ್ಟಾವಧಿಗೆ ಮುಂದೂಡಿಕೆ
ಬೆಂಗಳೂರು ಚಲೋ ಮುಷ್ಕರವನ್ನು ಅನಿರ್ಧಿಷ್ಟಾವಧಿಗೆ ಮುಂದೂಡಲಾಗಿದ್ದು, ಹೊಸ ದಿನಾಂಕವನ್ನು ಬಳಿಕ ಪ್ರಕಟಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ. ಈ ಹೀಗಾಗಿ ಜನವರಿ 29ರಂದು ಎಂದಿನಂತೆ ಬಸ್ ಸಂಚಾರ ಇರಲಿದೆ.
ಪತ್ರಕರ್ತ, ಸಾಹಿತಿ ಮಾರ್ಕ್ ಟುಲ್ಲಿ ನಿಧನ
ಅನಂತ ಸುಬ್ಬರಾವ್ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ ವಿವಿಧ ಗಣ್ಯರು ಸಂತಾಪ ಸೂಚಿಸಿದ್ದಾರೆ. ''ಭಾರತ ಕಮ್ಯುನಿಸ್ಟ್ ಪಕ್ಷದ ಹಿರಿಯ ನಾಯಕ ಹಾಗೂ ಜನಪ್ರಿಯ ಕಾರ್ಮಿಕ ಮುಖಂಡ ಎಚ್.ವಿ. ಅನಂತ ಸುಬ್ಬರಾವ್ ನಿಧನರಾದ ಸುದ್ದಿ ತಿಳಿದು ದುಃಖವಾಯಿತು. ಸುದೀರ್ಘ ನಾಲ್ಕು ದಶಕಗಳ ಕಾಲ ಕಾರ್ಮಿಕ ಮುಖಂಡರಾಗಿ ಅನೇಕ ಚಳವಳಿಗಳನ್ನು ಮುನ್ನಡೆಸಿದ್ದ ಹೋರಾಟಗಾರ ಅನಂತ ಸುಬ್ಬರಾವ್ ನನಗೂ ಆತ್ಮೀಯರಾಗಿದ್ದರು. ಅವರ ದಣಿವರಿಯದ ಹೋರಾಟದ ಛಲ ಮತ್ತು ಸೈದ್ಧಾಂತಿಕ ಬದ್ಧತೆ ಹೋರಾಟಗಾರರಿಗೆ ಒಂದು ಮಾದರಿ'' ಎಂದು ಎಕ್ಸ್ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.
ಮುಂದುವರಿದು, ʼʼಅವರ ನಿರ್ಗಮನದಿಂದ ಸಮಾಜಕ್ಕೆ, ಮುಖ್ಯವಾಗಿ ಕಾರ್ಮಿಕ ವರ್ಗಕ್ಕೆ ತುಂಬಲಾರದ ನಷ್ಟವಾಗಿದೆ. ಮೃತರ ಆತ್ಮಕ್ಕೆ ಚಿರಶಾಂತಿ ಲಭಿಸಲಿ, ಅವರ ಕುಟುಂಬವರ್ಗಕ್ಕೆ ನೋವು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆʼʼ ಎಂದಿದ್ದಾರೆ.