ಬೆಂಗಳೂರು: ಬುಡಕಟ್ಟು ಸಮುದಾಯದ ಶೈಕ್ಷಣಿಕ, ಸಾಮಾಜಿಕ ಹಾಗೂ ಆರ್ಥಿಕ ಅಭಿವೃದ್ಧಿಗೆ ಉತ್ತೇಜನ ನೀಡುವ ಉದ್ದೇಶದಿಂದ ಚಿತ್ರದುರ್ಗದ ಸಮೀಪ 120 ಎಕರೆ ಪ್ರದೇಶದಲ್ಲಿ ಬುಡಕಟ್ಟು ವಿಶ್ವವಿದ್ಯಾಲಯ(University for Tribal) ಸ್ಥಾಪಿಸಲು ಉದ್ದೇಶಿಸಲಾಗಿದೆ ಎಂದು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಟಿ.ರಘುಮೂರ್ತಿ(T Raghumurthy) ತಿಳಿಸಿದರು.
ನಗರದ ಎಂ.ಜಿ. ರೈಲ್ವೆ ಕಾಲೋನಿ ಬಳಿ ನಡೆದ ವಾಲ್ಮೀಕಿ ಜಯಂತಿ(Valmiki Jayanti) ಕಾರ್ಯಕ್ರಮದಲ್ಲಿ ಮಾತನಾಡಿ, ವಿಶ್ವವಿದ್ಯಾಲಯ ಸ್ಥಾಪನೆಗೆ ಸಂಬಂಧಿಸಿದಂತೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದೆ. ಈ ಕುರಿತು ಸಿಎಂ ಅವರೊಂದಿಗೆ ಸುದೀರ್ಘ ಚರ್ಚೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಬುಡಕಟ್ಟು ಸಮುದಾಯಗಳ ಕಲೆ, ಭಾಷೆ, ಸಾಹಿತ್ಯ, ಸಂಸ್ಕೃತಿ ಹಾಗೂ ಸಾಂಪ್ರದಾಯಿಕ ಜ್ಞಾನ ಅಧ್ಯಯನ ಮಾಡಲು ವಿಶ್ವವಿದ್ಯಾಲಯ ನೆರವಾಗಲಿದೆ.
ಬುಡಕಟ್ಟು ಜನರ ಜೀವನಶೈಲಿ, ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿಗತಿಗಳ ಕುರಿತು ಸಂಶೋಧನೆಗೆ ಉತ್ತೇಜನ ನೀಡಲಾಗುವುದು. ಕೌಶಲ್ಯಾಧಾರಿತ ಶಿಕ್ಷಣ ಹಾಗೂ ವೃತ್ತಿಪರ ಕೋರ್ಸ್‌ಗಳ ಮೂಲಕ ಯುವಜನರಿಗೆ ಉದ್ಯೋಗಾವಕಾಶ ಪಡೆಯಲು ಅಗತ್ಯ ಸಾಮರ್ಥ್ಯ ಬೆಳೆಸಲಾಗುವುದು ಎಂದರು.
ಅರ್ಹ ಸಾಧಕರಿಗೆ ಪ್ರಶಸ್ತಿ ನೀಡಿದೆ: ವಾಲ್ಮೀಕಿ ಪ್ರಶಸ್ತಿ ಪುರಸ್ಕೃತರು ತಮ್ಮದೇ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ್ದು, ಸಮುದಾಯದ ಏಳಿಗೆಗಾಗಿ ಹಾಗೂ ದಮನಿತರ ಪರವಾಗಿ ಧ್ವನಿ ಎತ್ತಿದ್ದಾರೆ. ಸಮಾಜದ ಬಗ್ಗೆ ಕಾಳಜಿ ಹೊಂದಿರುವ ಅವರೆಲ್ಲರೂ ಪ್ರಶಸ್ತಿಗೆ ಅರ್ಹರಾಗಿದ್ದು, ಆಯ್ಕೆಯಲ್ಲಿ ಯಾವುದೇ ರಾಜಿ ಮಾಡಿಕೊಂಡಿಲ್ಲ. ಮಹರ್ಷಿ ವಾಲ್ಮೀಕಿಯವರು ಮಾತೃಹೃದಯದ ಸಂತ, ಮಹಾನ್ ಮಾನವತಾ ವಾದಿ, ದಾರ್ಶನಿಕ, ತತ್ವಜ್ಞಾನಿ ಹಾಗೂ ಸಮಾಜ ಸುಧಾರಕರಾಗಿದ್ದರು. ಅವರ ಆದರ್ಶ ಇಂದಿಗೂ ಪ್ರಸ್ತುತವಾಗಿವೆ ಎಂದರು.
![]()
ಮುಂದಿನ ವರ್ಷದಿಂದ ಎಲ್ಲರೂ ತಮ್ಮ ಮನೆಗಳಲ್ಲಿ ಮಹರ್ಷಿ ವಾಲ್ಮೀಕಿಯವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಜಯಂತಿ ಅರ್ಥಪೂರ್ಣವಾಗಿ ಆಚರಿಸಬೇಕು. ಬೆಂಗಳೂರಿನ ಮೆಟ್ರೊ ನಿಲ್ದಾಣವೊಂದಕ್ಕೆ ಮಹರ್ಷಿ ವಾಲ್ಮೀಕಿಯವರ ಹೆಸರಿಡುವಂತೆ ಆಗ್ರಹಿಸಲಾಗಿದೆ.
- ಪ್ರಸನ್ನಾನಂದಪುರಿ ಸ್ವಾಮೀಜಿ , ರಾಜನಹಳ್ಳಿ ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠ