ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಬಕ್ರೀದ್ ಹಬ್ಬದ ಹಿನ್ನೆಲೆ ಅನಧಿಕೃತ ಕುರಿ ಮತ್ತು ಮೇಕೆ ಮಾರುಕಟ್ಟೆ ಶೆಡ್ ತೆರವು

ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ನಗರ ಪಾಲಿಕೆಯ ವಿವಿಧ ಪ್ರದೇಶಗಳಲ್ಲಿ ಅನಧಿಕೃತವಾಗಿ ನಿರ್ಮಿಸಲಾಗಿದ್ದ ತಾತ್ಕಾಲಿಕ ಕುರಿ ಮತ್ತು ಮೇಕೆ ಮಾರುಕಟ್ಟೆ ಶೆಡ್ ಗಳ ವಿರುದ್ಧ ಬೆಂಗಳೂರು ಉತ್ತರ ನಗರ ಪಾಲಿಕೆ ವತಿಯಿಂದ ಇಂದು ಜಂಟಿ ವಿಶೇಷ ಕಾರ್ಯಾಚರಣೆ ಕೈಗೊಳ್ಳಲಾಗಿದೆ.

ಸಂಗ್ರಹ ಚಿತ್ರ

ಬೆಂಗಳೂರು: ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ನಗರ ಪಾಲಿಕೆಯ ವಿವಿಧ ಪ್ರದೇಶಗಳಲ್ಲಿ ಅನಧಿಕೃತವಾಗಿ ನಿರ್ಮಿಸಲಾಗಿದ್ದ ತಾತ್ಕಾಲಿಕ ಕುರಿ ಮತ್ತು ಮೇಕೆ (Bengaluru News) ಮಾರುಕಟ್ಟೆ ಶೆಡ್ ಗಳ ವಿರುದ್ಧ ಬೆಂಗಳೂರು ಉತ್ತರ ನಗರ ಪಾಲಿಕೆ ವತಿಯಿಂದ ಇಂದು ಜಂಟಿ ವಿಶೇಷ ಕಾರ್ಯಾಚರಣೆ ಕೈಗೊಳ್ಳಲಾಗಿದೆ. ನಗರ ಪಾಲಿಕೆ ಆಯುಕ್ತರಾದ ಪಿ. ಸುನೀಲ್ ಕುಮಾರ್ ಅವರ ನಿರ್ದೇಶನದಂತೆ ಪಶುಪಾಲನಾ ಇಲಾಖೆ, ಇಂಜಿನಿಯರಿಂಗ್ ವಿಭಾಗ, ಆರೋಗ್ಯ ವಿಭಾಗ, ಪೊಲೀಸ್ ಇಲಾಖೆ ಹಾಗೂ ಇನ್ನಿತರೆ ಸಿಬ್ಬಂದಿಗಳ ಸಹಯೋಗದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.

ಸಾರ್ವಜನಿಕ ರಸ್ತೆ, ಪಾದಚಾರಿ ಮಾರ್ಗ, ಖಾಲಿ ಸರ್ಕಾರಿ ಜಾಗ ಹಾಗೂ ರಾಜಕಾಲುವೆ ಪಕ್ಕಗಳಲ್ಲಿ ಅನುಮತಿ ಪಡೆಯದೆ ನಿರ್ಮಿಸಲಾಗಿದ್ದ ತಾತ್ಕಾಲಿಕ ಶೆಡ್ ಗಳು, ತಾರ್ಪಾಲಿನ್ ಆವರಣಗಳು, ಕಬ್ಬಿಣದ ಬೇಲಿಗಳು ಹಾಗೂ ಕುರಿ/ಮೇಕೆ ವ್ಯಾಪಾರಕ್ಕಾಗಿ ಅಕ್ರಮವಾಗಿ ಬಳಸಲಾಗುತ್ತಿದ್ದ ನಿರ್ಮಿತಿಗಳನ್ನು ಅಧಿಕಾರಿಗಳು ತೆರವುಗೊಳಿಸಿದರು. ಕಾರ್ಯಾಚರಣೆಯ ವೇಳೆ ಸಾರ್ವಜನಿಕ ಸಂಚಾರಕ್ಕೆ ಅಡಚಣೆ ಆಗದಂತೆ ನೋಡಿಕೊಳ್ಳುವುದು, ಸಾರ್ವಜನಿಕ ಆರೋಗ್ಯ ಮತ್ತು ಸ್ವಚ್ಛತೆ ಕಾಪಾಡುವುದು, ತ್ಯಾಜ್ಯ ನಿರ್ವಹಣೆ, ಪ್ರಾಣಿಗಳ ಕಲ್ಯಾಣ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ವಿಚಾರಗಳಿಗೆ ವಿಶೇಷ ಆದ್ಯತೆ ನೀಡಲಾಗಿದೆ.

ಪಾಲಿಕೆ ಅಧಿಕಾರಿಗಳು ಮುಂಚಿತವಾಗಿ ಸೂಚನೆ ನೀಡಿದ್ದರೂ ಅನುಮತಿ ಇಲ್ಲದೆ ನಿರ್ಮಿಸಲಾಗಿದ್ದ ಹಲವಾರು ತಾತ್ಕಾಲಿಕ ಶೆಡ್ ಗಳನ್ನು ಜೆಸಿಬಿ ಯಂತ್ರಗಳ ಸಹಾಯದಿಂದ ತೆರವುಗೊಳಿಸಲಾಗಿದೆ. ಕೆಲವು ಪ್ರದೇಶಗಳಲ್ಲಿ ಸಾರ್ವಜನಿಕರಿಂದ ಸಹಕಾರ ದೊರೆತಿದ್ದು, ಕಾರ್ಯಾಚರಣೆ ಶಾಂತಿಯುತವಾಗಿ ಪೂರ್ಣಗೊಂಡಿದೆ. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, ಸಾರ್ವಜನಿಕ ಆರೋಗ್ಯ, ಸಂಚಾರ ಸುಗಮತೆ ಹಾಗೂ ನಗರ ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಅನಧಿಕೃತ ಮಾರುಕಟ್ಟೆಗಳಿಗೆ ಅವಕಾಶ ನೀಡಲಾಗುವುದಿಲ್ಲ ಎಂದು ತಿಳಿಸಿದರು. ಬಕ್ರೀದ್ ಹಬ್ಬವನ್ನು ಕಾನೂನುಬದ್ಧ ಹಾಗೂ ಪರಿಸರ ಸ್ನೇಹಿಯಾಗಿ ಆಚರಿಸಲು ಸಾರ್ವಜನಿಕರು ಸಹಕರಿಸುವಂತೆ ಮನವಿ ಮಾಡಿದರು.

ನಗರ ಪಾಲಿಕೆ ವತಿಯಿಂದ ಕುರಿ ಮತ್ತು ಮೇಕೆ ಮಾರಾಟಗಾರರಿಗೆ ಕೆಳಕಂಡ ಸೂಚನೆಗಳನ್ನು ನೀಡಲಾಗಿದೆ

  • ಅನುಮತಿ ಪಡೆದ ಸ್ಥಳಗಳಲ್ಲಿ ಮಾತ್ರ ಪ್ರಾಣಿಗಳ ವ್ಯಾಪಾರ ನಡೆಸಬೇಕು
  • ಸಾರ್ವಜನಿಕ ರಸ್ತೆ ಹಾಗೂ ಪಾದಚಾರಿ ಮಾರ್ಗಗಳ ಮೇಲೆ ಶೆಡ್ ಗಳ ನಿರ್ಮಾಣ ಮಾಡಬಾರದು
  • ತ್ಯಾಜ್ಯವನ್ನು ಪಾಲಿಕೆಯ ಸೂಚನೆಯಂತೆ ವಿಲೇವಾರಿ ಮಾಡಬೇಕು
  • ಪ್ರಾಣಿಗಳ ಸಾಗಣೆ ಮತ್ತು ನಿರ್ವಹಣೆಯಲ್ಲಿ ಪ್ರಾಣಿ ಕಲ್ಯಾಣ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು
  • ನಿಯಮ ಉಲ್ಲಂಘನೆ ಕಂಡುಬಂದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು

ಈ ಕಾರ್ಯಾಚರಣೆಯಲ್ಲಿ ಪಶುವೈದ್ಯಾಧಿಕಾರಿಗಳು, ಸಹಾಯಕ ಕಾರ್ಯಪಾಲಕ ಅಭಿಯಂತರರು, ಆರೋಗ್ಯಾಧಿಕಾರಿಗಳು, ಪೊಲೀಸ್ ಸಿಬ್ಬಂದಿ, ಮಾರ್ಷಲ್ ಸಿಬ್ಬಂದಿ ಹಾಗೂ ವಲಯ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

Vishakha Bhat Heggar

View all posts by this author