ಬೆಂಗಳೂರು, ಸೆ.23: ಕರ್ನಾಟಕ ಲೋಕಸೇವಾ ಆಯೋಗ (KPSC) ವನ್ನು ಶಾಸನಬದ್ಧವಾಗಿ ಮುಚ್ಚುತ್ತೇವೆ ಎನ್ನುವ ಮುಖ್ಯಮಂತ್ರಿ ಹೇಳಿಕೆ ಕೇವಲ ಹತಾಶೆಯಿಂದಷ್ಟೇ ಕೂಡಿಲ್ಲ, ಅದು ಬುದ್ಧಿಗೇಡಿತನ, ಹೊಣೆಗೇಡಿತನ ಮತ್ತು ಅಜ್ಞಾನದ ಪರಮಾವಧಿ. ಇವರ ವರಸೆ ಹೇಗಿದೆ ಎಂದರೆ 'ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಹಾಕಿದಂತೆ!'; 'ನೆಗಡಿ ಬಂದರೆ ಮೂಗಿಗೇ ಕತ್ತರಿ ಹಾಕಿದಂತೆ!!' ಮುಖ್ಯಮಂತ್ರಿಗೆ ಶಾಸನದ ಮಹತ್ವವೇ ಗೊತ್ತಿಲ್ಲದಂತಿದೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಟೀಕಿಸಿದ್ದಾರೆ.
ಈ ಕುರಿತು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಕೆಪಿಎಸ್ಸಿ ಸಂಸ್ಥೆ ಚೆನ್ನಾಗಿಯೇ ಇದೆ, ಕೆಟ್ಟ ಜನ ಬಂದು ಕೂತಿದ್ದಾರಷ್ಟೇ. ಬೇಲಿಯೇ ಹೊಲ ಮೇಯುತ್ತಿದೆ. ಅಲ್ಲಿಗೆ ಖದೀಮರನ್ನು ನೇಮಕ ಮಾಡಿದ್ದು ಯಾರು? ವಸೂಲಿಗೆ ಅಂಗಡಿ ತೆರೆಯಲು ಅವಕಾಶ ಕೊಟ್ಟಿದ್ದು ಯಾರು? ವಿಧಾನಸೌಧದ 3ನೇ ಮಹಡಿಯಲ್ಲಿ ಕೂತವರೇ ಎಸಗಿದ ಪಾಪವಲ್ಲವೇ ಇದು? ಆ ಲೆಕ್ಕಕ್ಕೆ ಬಂದರೆ ವಿಧಾನಸೌಧವನ್ನೇ ಮುಚ್ಚಬೇಕು. ನಿಮ್ಮ ಸಾರಥ್ಯದಲ್ಲಿ ಅದೂ ನಡೆದುಹೋಗಲಿ ಎಂದು ಟಾಂಗ್ ನೀಡಿದ್ದಾರೆ.
BJP Protest: ರಾಜ್ಯದ ಆರ್ಥಿಕ ಪರಿಸ್ಥಿತಿ ಬಗ್ಗೆ ಶ್ವೇತಪತ್ರ ಹೊರಡಿಸಿ: ಸಿಎಂಗೆ ಬಿ.ವೈ. ವಿಜಯೇಂದ್ರ ಆಗ್ರಹ
ಬೇಜವಾಬ್ದಾರಿಯಿಂದ ಚಪಲಕ್ಕೆ ನಾಲಿಗೆ ಜಾರುವ ಮೊದಲು ಕೆಪಿಎಸ್ಸಿ ಎಂದರೆ ಏನು? ಅದರ ಸಂರಚನೆ, ಸ್ವರೂಪ ಹೇಗಿರುತ್ತದೆ? ಸಾಂವಿಧಾನಿಕವಾಗಿ ಅದಕ್ಕಿರುವ ರಕ್ಷಣೆ ಏನು? ಆ ಸಂಸ್ಥೆ ನಡೆದುಬಂದ ಹಾದಿ, ಹೆಗ್ಗಳಿಕೆ ಬಗ್ಗೆ ತಿಳಿದುಕೊಳ್ಳಿ. ಹೊಲಕ್ಕೆ ಕಳೆ ಬಿದ್ದರೆ ಅದನ್ನು ಕಿತ್ತೆಸೆಯಬೇಕು, ಹೊಲಕ್ಕೇ ವಿಷವುಣಿಸುವ ಕೆಲಸ ಆಗಬಾರದು ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.