ಕರ್ನಾಟಕದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಶುರು; ನಾಳೆಯಿಂದ ಮನೆಮನೆಗೆ ಎಸ್‌ಐಆರ್
ರಾಜ್ಯದಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆ ಆರಂಭವಾಗಿದ್ದು, ಜೂನ್ 30ರಿಂದ ಜುಲೈ 29ರವರೆಗೆ ಚುನಾವಣಾಧಿಕಾರಿಗಳು ಹಾಗೂ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿ ಮತದಾರರ ವಿವರಗಳನ್ನು ಪರಿಶೀಲಿಸಲಿದ್ದಾರೆ. ಈ ವೇಳೆ ಬಿಎಲ್‌ಒಗಳು ಎಸ್‌ಐಆರ್ ಅರ್ಜಿಯನ್ನು ನೀಡಲಿದ್ದಾರೆ.
ಸಂಗ್ರಹ ಚಿತ್ರ -
ಬೆಂಗಳೂರು: ರಾಜ್ಯದಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆ ಆರಂಭವಾಗಿದ್ದು, ಜೂನ್ 30ರಿಂದ ಜುಲೈ 29ರವರೆಗೆ ಚುನಾವಣಾಧಿಕಾರಿಗಳು ಹಾಗೂ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿ ಮತದಾರರ ವಿವರಗಳನ್ನು ಪರಿಶೀಲಿಸಲಿದ್ದಾರೆ. ಈ ವೇಳೆ ಬಿಎಲ್‌ಒಗಳು ಎಸ್‌ಐಆರ್ ಅರ್ಜಿಯನ್ನು ನೀಡಲಿದ್ದು, ಮತದಾರರು ಅರ್ಜಿಯನ್ನು ಭರ್ತಿ ಮಾಡಿ ಸಹಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬೇಕಾಗಿದೆ.
ಮತದಾರರ ಪಟ್ಟಿಯಲ್ಲಿರುವ ಹೆಸರುಗಳ ಪರಿಶೀಲನೆ, ತಿದ್ದುಪಡಿ, ಹೊಸ ಮತದಾರರ ಹೆಸರು ಸೇರ್ಪಡೆ, ಮೃತಪಟ್ಟವರು ಹಾಗೂ ಸ್ಥಳಾಂತರಗೊಂಡವರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕುವ ಪ್ರಕ್ರಿಯೆಯೂ ಈ ಅವಧಿಯಲ್ಲಿ ನಡೆಯಲಿದೆ. ಚುನಾವಣಾ ಆಯೋಗದ ಸೂಚನೆಯಂತೆ, ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾಗವಹಿಸಿ ಅಗತ್ಯ ಮಾಹಿತಿಯನ್ನು ಸಲ್ಲಿಸುವುದು ಅತ್ಯಂತ ಮುಖ್ಯವಾಗಿದೆ. ಅರ್ಜಿ ಸಲ್ಲಿಸದಿದ್ದಲ್ಲಿ ಮತದಾರರ ಪಟ್ಟಿಯಲ್ಲಿ ಹೆಸರು ಉಳಿಯದಿರುವ ಸಾಧ್ಯತೆ ಇರುತ್ತದೆ.
ಮನೆಗೆ ಬರುವ ಬಿಎಲ್‌ಒಗಳು ಎರಡು ಅರ್ಜಿಗಳನ್ನು (ಎನ್ಯುಮರೇಷನ್ ಫಾರ್ಮ್) ನೀಡುತ್ತಾರೆ. ಮತದಾರರು ಎರಡನ್ನು ಭರ್ತಿ ಮಾಡಿ ಸಹಿ ಮಾಡಬೇಕು. ಬಿಎಲ್‌ಒ ಕೂಡ ಆ ಎರಡು ಫಾರ್ಮ್‌ಗಳ ಮೇಲೆ ಸಹಿ ಮಾಡುತ್ತಾರೆ. ಒಂದನ್ನು ಸ್ವೀಕೃತಿ ಪ್ರತಿಯಾಗಿ ಮತದಾರರಿಗೆ ಮರಳಿಸಿದರೆ, ಇನ್ನೊಂದು ಪ್ರತಿಯನ್ನು ಅಧಿಕಾರಿಗಳು ಕೊಂಡೊಯ್ಯುತ್ತಾರೆ. ನಂತರ ಅದನ್ನು ಸ್ಕ್ಯಾನ್ ಮಾಡಿ ಡಿಜಿಟಲ್ ರೂಪದಲ್ಲಿ ಸಂಗ್ರಹ ಮಾಡುತ್ತಾರೆ.
ಎಸ್‌ಐಆರ್ ಪ್ರಕ್ರಿಯೆಗಾಗಿ ರಾಜ್ಯಾದ್ಯಂತ ಒಟ್ಟು 59,050ಕ್ಕೂ ಹೆಚ್ಚು ಮತಗಟ್ಟೆ ಮಟ್ಟದ ಅಧಿಕಾರಿಗಳು ತೊಡಗಿಸಿಕೊಳ್ಳಲಿದ್ದಾರೆ. 2026ರ ಮೇ 12ರ ವರೆಗಿನ ಅಂಕಿ-ಅಂಶಗಳ ಪ್ರಕಾರ, ರಾಜ್ಯದ ಒಟ್ಟು 5,55,74,064 ಮತದಾರರನ್ನು ಈ ವಿಶೇಷ ಪರಿಷ್ಕರಣೆಗೆ ಒಳಪಡಿಸಲಾಗುತ್ತದೆ. ಇಡೀ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಲು ಮಾನ್ಯತೆ ಪಡೆದ ರಾಜಕೀಯ ಪಕ್ಷಗಳಿಂದ ಪ್ರತಿಯೊಂದು ಮತಗಟ್ಟೆಗೆ ಬೂತ್ ಮಟ್ಟದ ಏಜೆಂಟರನ್ನು ನೇಮಿಸಿಕೊಳ್ಳಲಾಗಿದೆ.
ಅಗತ್ಯ ದಾಖಲೆಗಳು ಏನು ಬೇಕು?
- ಕುಟುಂಬದ ಸದಸ್ಯರ ಗುರುತಿನ ಚೀಟಿ
- ಮತದಾರರ ಗುರುತಿನ ಚೀಟಿ (ವೋಟರ್ ಐಡಿ)
- ಆಧಾರ್ ಕಾರ್ಡ್
- ವಿಳಾಸ ದೃಢೀಕರಣ ದಾಖಲೆ
- ಪಾಸ್‌ಪೋರ್ಟ್ ಗಾತ್ರದ ಭಾವಚಿತ್ರವನ್ನು ನೀಡಬೇಕು.