ಬೆಂಗಳೂರು: ಉದ್ಯಮಿ ಸಿ.ಜೆ ರಾಯ್ ಆತ್ಮಹತ್ಯೆ (CJ Roy Death Case) ಸಂಬಂಧ ನಗರದ ಅಶೋಕ್ ನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. ಈ ಬಗ್ಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಉದ್ಯಮಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಐಟಿ ಅಧಿಕಾರಿಗಳ ಜತೆ ಯಾರ‍್ಯಾರು ಇದ್ದರು ಎಂಬ ಬಗ್ಗೆಯೂ ತನಿಖೆ ನಡೆಯುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.
ಕೇರಳ ಐಟಿ ಅಧಿಕಾರಿಗಳ ತಂಡ ಕಳೆದ ಮೂರು ದಿನಗಳಿಂದ ಪರಿಶೀಲನೆ ನಡೆಸುತ್ತಿತ್ತು. ಈ ಸಂದರ್ಭದಲ್ಲಿ ಸಿ.ಜೆ ರಾಯ್ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ. ಮಧ್ಯಾಹ್ನ 3 ಗಂಟೆಯಿಂದ 3:15 ರ ಸುಮಾರಿನಲ್ಲಿ ಘಟನೆ ನಡೆದಿದೆ ಎಂದು ತಿಳಿಸಿದರು.
ಕಾನ್ಫಿಡೆಂಟ್ ಗ್ರೂಪ್ ನಿರ್ದೇಶಕರು ಘಟನೆ ಸಂಬಂಧ ದೂರು ಕೊಟ್ಟಿದ್ದಾರೆ. ಅಶೋಕ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ತನಿಖೆ ನಡೆಯಬೇಕಿದೆ ಎಂದಿರುವ ಅವರು, ಘಟನೆ ಬಳಿಕ ಮೃತದೇಹವನ್ನು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಶೂಟ್ ಮಾಡಿಕೊಂಡ ಗನ್ ಯಾವುದು? ಎಂಬ ಬಗ್ಗೆಯೂ ಸೋಕೋ ಮತ್ತು ಬ್ಯಾಲೆಸ್ಟಿಕ್ ಟೀಂ ನಿಂದ ಪರಿಶೀಲನೆ ನಡೆಯುತ್ತಿದೆ. ದಾಳಿ ವೇಳೆ ಐಟಿ ಅಧಿಕಾರಿಗಳ ಜತೆ ಬೇರೆ ಯಾರಾದರೂ ಇದ್ದರಾ ಎನ್ನುವ ಬಗ್ಗೆಯೂ ತನಿಖೆ ನಡೆಯುತ್ತಿದೆ. ಶೀಘ್ರದಲ್ಲೇ ಹೆಚ್ಚಿನ ಮಾಹಿತಿ ನೀಡಲಿದ್ದೇವೆ ಎಂದು ತಿಳಿಸಿದ್ದಾರೆ.
ಏನಿದು ಪ್ರಕರಣ?
ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್, ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ ಸಿ.ಜೆ. ರಾಯ್ ಅವರು ಗುಂಡು ಹಾರಿಸಿಕೊಂಡು ಬೆಂಗಳೂರಿನ ಲ್ಯಾಂಗ್‌ಫೋರ್ಡ್ ರಸ್ತೆಯಲ್ಲಿರುವ ಬಂಗಲೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು. ಐಟಿ ದಾಳಿಗೆ ಹೆದರಿ ಸಿ.ಜೆ.ರಾಯ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
C J Roy: ಮಗಳಿಗಾಗಿ ಖರೀದಿಸಿದ್ದ ಜಾಗವನ್ನು ನಟ ಪುನೀತ್ ರಾಜ್‌ಕುಮಾರ್‌ಗೆ ನೀಡಿದ್ದ ಸಿ.ಜೆ. ರಾಯ್
ಇಂದು ಅವರ ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದರು. ಅದರ ಬೆನ್ನಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದರು. ಸ್ಥಳಕ್ಕೆ ಅಶೋಕನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ನಗರದಲ್ಲಿ ಇವರ ಹೆಸರಿನಲ್ಲಿ ಹಲವು ದೊಡ್ಡ ಹೋಟೆಲ್‌ಗಳು ಮತ್ತು ರೆಸಾರ್ಟ್‌ಗಳು ಇದ್ದವು. ಈ ಘಟನೆ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.