ಚಳಿಗಾಲದ ಅಧಿವೇಶದ ದಿನಾಂಕ ಫಿಕ್ಸ್; ಡಿಸೆಂಬರ್ 7 ರಿಂದ ಬೆಳಗಾವಿಯಲ್ಲಿ ಕಲಾಪ ಶುರು
ಕರ್ನಾಟಕ ವಿಧಾನಮಂಡಲದ ಉಭಯ ಸದನಗಳ ಚಳಿಗಾಲದ ಅಧಿವೇಶನದ ದಿನಾಂಕ ನಿಗದಿ ಆಗಿದ್ದು, ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿ ಡಿಸೆಂಬರ್ 7 ರಿಂದ 10 ದಿನಗಳ ಕಾಲ ಕಲಾಪ ನಡೆಯುವ ಸಾಧ್ಯತೆಯಿದೆ ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ತಿಳಿಸಿದ್ದಾರೆ.
ಸಂಗ್ರಹ ಚಿತ್ರ -
ಬೆಂಗಳೂರು: ಕರ್ನಾಟಕ ವಿಧಾನಮಂಡಲದ ಉಭಯ ಸದನಗಳ ಚಳಿಗಾಲದ ಅಧಿವೇಶನದ ದಿನಾಂಕ ನಿಗದಿ ಆಗಿದ್ದು, ಬೆಳಗಾವಿಯ (Winter Session) ಸುವರ್ಣ ವಿಧಾನ ಸೌಧದಲ್ಲಿ ಡಿಸೆಂಬರ್ 7 ರಿಂದ 10 ದಿನಗಳ ಕಾಲ ಕಲಾಪ ನಡೆಯುವ ಸಾಧ್ಯತೆಯಿದೆ ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ತಿಳಿಸಿದ್ದಾರೆ. ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ಈ ಬಾರಿಯ ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಪ್ರಾದೇಶಿಕ ಅಭಿವೃದ್ಧಿ, ಕೃಷಿ ಬಿಕ್ಕಟ್ಟು ಮತ್ತು ಪ್ರಮುಖ ಮೂಲಸೌಕರ್ಯ ಯೋಜನೆಗಳ ಕುರಿತು ಸವಿಸ್ತಾರವಾದ ಚರ್ಚೆಗಳು ನಡೆಯಲಿವೆ.
ಅಕ್ಟೋಬರ್ 15, 2026 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿದಂತೆ, ಕರ್ನಾಟಕ ವಿಧಾನಮಂಡಲದ ಉಭಯ ಸದನಗಳ ಚಳಿಗಾಲದ ಅಧಿವೇಶನವನ್ನು ಡಿಸೆಂಬರ್ 7, 2026 ರಿಂದ ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿ ನಡೆಸಲು ತಾತ್ಕಾಲಿಕವಾಗಿ ನಿರ್ಧರಿಸಲಾಗಿದೆ ಎಂದು ಮುಖ್ಯ ಕಾರ್ಯದರ್ಶಿ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ. "ಇದರನ್ವಯ, ಡಿಸೆಂಬರ್ 7 ರಿಂದ ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿ ಕರ್ನಾಟಕ ವಿಧಾನಮಂಡಲದ ಉಭಯ ಸದನಗಳ 10 ದಿನಗಳ ಅಧಿವೇಶನವನ್ನು ನಡೆಸಲು ಅಗತ್ಯವಿರುವ ಪೂರ್ವ ಸಿದ್ಧತೆಗಳನ್ನು ಕೈಗೊಳ್ಳುವಂತೆ" ಎಂದು ಶಾಲಿನಿ ರಜನೀಶ್ ಸೂಚಿಸಿದ್ದಾರೆ.
ಯಾವೆಲ್ಲ ವಿಷಯಕ್ಕೆ ಒತ್ತು?
ನಂಜುಂಡಪ್ಪ ವರದಿ ಅನುಷ್ಠಾನ, ಹಿಂದುಳಿದ ತಾಲೂಕುಗಳ ಅಭಿವೃದ್ಧಿ ಹಾಗೂ ಈ ಭಾಗಕ್ಕೆ ಹೆಚ್ಚಿನ ಅನುದಾನ ಹಂಚಿಕೆ ಮಾಡುವ ಕುರಿತು ಸುದೀರ್ಘ ಚರ್ಚೆ ನಡೆಯಲಿದೆ. ಕಬ್ಬು ಮತ್ತು ಮೆಕ್ಕೆಜೋಳ ಬೆಳೆಗಾರರ ಬೆಂಬಲ ಬೆಲೆ (MSP) ನಿಗದಿ, ಖರೀದಿ ಪ್ರಕ್ರಿಯೆ, ಬೆಳೆ ಹಾನಿ ಪರಿಹಾರ ಹಾಗೂ ಕೃಷಿ ವಲಯದ ಇತರೆ ಗಂಭೀರ ಸವಾಲುಗಳ ಬಗ್ಗೆ ವಿರೋಧ ಪಕ್ಷಗಳು ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳುವ ಸಾಧ್ಯತೆಯಿದೆ.
ವಿಧಾನಸಭೆ ಕಲಾಪದಲ್ಲಿ ಡಿಕೆಶಿ-ಮುನಿರತ್ನ ನಡುವೆ ತೀವ್ರ ವಾಗ್ವಾದ; ಹೇ ರೇ*ಸ್ಟ್ ಕುಳಿತುಕೋ ಎಂದ ಡಿಸಿಎಂ
ಉತ್ತರ ಕರ್ನಾಟಕ ಭಾಗದಲ್ಲಿ ಹೊಸ ಉದ್ಯೋಗ ಸೃಷ್ಟಿ, ಕೈಗಾರಿಕೆಗಳ ಸ್ಥಾಪನೆ, ಗ್ರಾಮೀಣ ರಸ್ತೆಗಳ ಸಂಪರ್ಕ ಸುಧಾರಣೆ ಮತ್ತು ಕುಡಿಯುವ ನೀರಿನ ಯೋಜನೆಗಳ ವೇಗವರ್ಧನೆ ಕುರಿತು ಸರ್ಕಾರ ಕೆಲ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ. ರಾಜ್ಯ ಸರ್ಕಾರದ ಆಡಳಿತ ಹಾಗೂ ಜನ ಕಲ್ಯಾಣಕ್ಕೆ ಸಂಬಂಧಿಸಿದ ಹಲವು ಹೊಸ ಕಾನೂನು ಮತ್ತು ತಿದ್ದುಪಡಿ ವಿಧೇಯಕಗಳನ್ನು ಅಂಗೀಕರಿಸಲು ಸರ್ಕಾರ ಸಿದ್ಧತೆ ನಡೆಸಿದೆ.