ಬಸವಕಲ್ಯಾಣ: ಜೇವರ್ಗಿ ವಿಧಾನಸಭಾ ಕ್ಷೇತ್ರದ ಶಾಸಕ ಅಜಯ್ ಸಿಂಗ್(MLA Ajay Singh) ಅವರಿಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್(Chief Minister D K Shivkumar) ಅವರ ನೇತೃತ್ವದ ರಾಜ್ಯ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ದೊರೆತ ಹಿನ್ನೆಲೆಯಲ್ಲಿ ಬಸವಕಲ್ಯಾಣ ನಗರದ ಅಂಬೇಡ್ಕರ್ ವೃತ್ತದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು.
ಸಚಿವ ಸ್ಥಾನ ಲಭಿಸಿರುವ ಸುದ್ದಿ ತಿಳಿಯುತ್ತಿದ್ದಂತೆಯೇ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯ ಕರ್ತರು ಅಂಬೇಡ್ಕರ್ ವೃತ್ತದಲ್ಲಿ ಸೇರಿ ಪಟಾಕಿ ಸಿಡಿಸಿ, ಪರಸ್ಪರ ಸಿಹಿ ಹಂಚಿಕೊಳ್ಳುವ ಮೂಲಕ ಸಂತಸ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಪರ ಘೋಷಣೆಗಳನ್ನು ಕೂಗಿ, ಪಕ್ಷದ ನಾಯಕತ್ವದ ನಿರ್ಧಾರವನ್ನು ಸ್ವಾಗತಿಸಿದರು. ಸಚಿವ ಸಂಪುಟದಲ್ಲಿ ಅಜಯ್ ಸಿಂಗ್ ಅವರಿಗೆ ಅವಕಾಶ ನೀಡಿರುವುದು ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ಮತ್ತಷ್ಟು ವೇಗ ನೀಡಲಿದೆ ಎಂಬ ವಿಶ್ವಾಸವನ್ನು ಮುಖಂಡರು ವ್ಯಕ್ತಪಡಿಸಿದರು.
ಇದನ್ನೂ ಓದಿ: Jewargi MLA Dr. Ajay Singh: ಪಕ್ಷ ನಿಷ್ಠೆಗೆ ಫಲವಾಗಿ ಡಾ.ಅಜಯಸಿಂಗ್‌ಗೆ ಸಚಿವ ಸಂಪುಟ ಪ್ರವೇಶ
ಕಾರ್ಯಕ್ರಮದಲ್ಲಿ ಮಾತನಾಡಿದ ಕಾಂಗ್ರೆಸ್ ಮುಖಂಡರು, ಅಜಯ್ ಸಿಂಗ್ ಅವರು ಜನಪರ ರಾಜಕಾರಣಿಯಾಗಿ ಗುರುತಿಸಿಕೊಂಡಿದ್ದು, ಅವರಿಗೆ ಸಚಿವ ಸ್ಥಾನ ದೊರೆತಿರುವುದು ಪಕ್ಷದ ಕಾರ್ಯ ಕರ್ತರಲ್ಲಿ ಹೊಸ ಉತ್ಸಾಹ ತುಂಬಿದೆ ಎಂದು ಹೇಳಿದರು. ಅವರ ನಾಯಕತ್ವದಲ್ಲಿ ರಾಜ್ಯ ಹಾಗೂ ವಿಶೇಷವಾಗಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ಅಭಿವೃದ್ಧಿ ಕಾರ್ಯಗಳು ಇನ್ನಷ್ಟು ಚುರುಕುಗೊಳ್ಳ ಲಿವೆ ಎಂಬ ನಿರೀಕ್ಷೆಯನ್ನೂ ವ್ಯಕ್ತಪಡಿಸಿದರು.
ಈ ಸಂಭ್ರಮಾಚರಣೆಯಲ್ಲಿ ಮಾಜಿ ನಗರಸಭೆ ಅಧ್ಯಕ್ಷ ಸಗಿರೋದಿನ್, ಮಾಜಿ ಸದಸ್ಯರಾದ ರವಿ ಗಾಯಕಾವಾಡ, ರೈಸ್ ಶೇಖ್, ಖಲೀಲ್ ಅಹಮದ್, ಅಶೋಕ್ ಢಗಳೇ, ಸಂಜು ಸಗನೂರ್ ಶಿವಕುಮಾರ ಶೆಟಗಾರ ಮನೋಜ್ ಮಾಶೆಟ್ಟೆ, ಪಪ್ಪು ಉದಾನೆ ಪಿಂಟು ಕಾಂಬ್ಳೆ ಸಿಕಂದರ ಸಿಂಧೆ ಸೂರಜ್ ಪಾಟೀಲ್ ಸದಾನಂದ ಬಿರಾದಾರ್ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು. ಪಕ್ಷದ ಧ್ವಜ ಹಾಗೂ ಕಾಂಗ್ರೆಸ್ ಶಾಲು ಧರಿಸಿದ ಕಾರ್ಯ ಕರ್ತರು ಅಜಯ್ ಸಿಂಗ್ ಅವರಿಗೆ ಅಭಿನಂದನೆ ಸಲ್ಲಿಸಿ, ಅವರ ಮುಂದಿನ ಕಾರ್ಯ ಚಟುವಟಿಕೆ ಗಳಿಗೆ ಶುಭ ಹಾರೈಸಿದರು.
ಅಂಬೇಡ್ಕರ್ ವೃತ್ತದಲ್ಲಿ ಕೆಲಕಾಲ ಹಬ್ಬದ ವಾತಾವರಣ ನಿರ್ಮಾಣವಾಗಿದ್ದು, ಕಾರ್ಯಕರ್ತರು ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು. ಸಾರ್ವಜನಿಕರೂ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡು ಸಚಿವ ಸ್ಥಾನ ಲಭಿಸಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು.
ಅಜಯ್ ಸಿಂಗ್ ಅವರಿಗೆ ಸಚಿವ ಸ್ಥಾನ ದೊರೆತ ಹಿನ್ನೆಲೆಯಲ್ಲಿ ಬಸವಕಲ್ಯಾಣ ಕಾಂಗ್ರೆಸ್ ಕಾರ್ಯ ಕರ್ತರು ಸಂಭ್ರಮಾಚರಣೆ ನಡೆಸಿ, ರಾಜ್ಯ ಸರ್ಕಾರದ ಈ ನಿರ್ಧಾರವನ್ನು ಹರ್ಷದಿಂದ ಸ್ವಾಗತಿಸಿ ದರು.