ಯುಗಾದಿ ಹಬ್ಬ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Basanagouda Patil Yatnal: ಬಿಜೆಪಿಯಿಂದ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಉಚ್ಚಾಟನೆ

Basanagouda Patil Yatnal: ಬಿಜೆಪಿಯ ಕೇಂದ್ರ ಶಿಸ್ತು ಸಮಿತಿ ನೀಡಿದ್ದ ಶೋಕಾಸ್‌ ನೋಟಿಸ್‌ಗೆ ಯಾವುದೇ ಉತ್ತರ ನೀಡದ ಕಾರಣ ಬಿಜೆಪಿ ಹೈಕಮಾಂಡ್‌ ಯತ್ನಾಳ್‌ ಅವರನ್ನು ಉಚ್ಚಾಟನೆ ಮಾಡಿದೆ. ತಕ್ಷಣದಿಂದ ಜಾರಿಗೆ ಬರುವಂತೆ 6 ವರ್ಷಗಳ ಕಾಲ ಯತ್ನಾಳ್‌ ಅವರನ್ನು ಉಚ್ಚಾಟನೆ ಮಾಡಲಾಗಿದೆ.

ಬಿಜೆಪಿಯಿಂದ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಉಚ್ಚಾಟನೆ

Profile Prabhakara R Mar 26, 2025 5:41 PM

ಬೆಂಗಳೂರು: ಪಕ್ಷದ ಶಿಸ್ತು ಉಲ್ಲಂಘನೆ ಹಾಗೂ ರಾಜ್ಯ ನಾಯಕರ ವಿರುದ್ಧ ಬಹಿರಂಗವಾಗಿ ಹೇಳಿಕೆ ನೀಡಿದ್ದ ಶಾಸಕರಾದ ಎಸ್‌.ಟಿ.ಸೋಮಶೇಖರ್‌, ಶಿವರಾಮ್‌ ಹೆಬ್ಬಾರ್‌ ಸೇರಿ ಐವರು ನಾಯಕರಿಗೆ ಬಿಜೆಪಿಯ ಕೇಂದ್ರ ಶಿಸ್ತು ಸಮಿತಿ ನೋಟಿಸ್‌ ನೀಡಿದ್ದ ಬೆನ್ನಲ್ಲೇ ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ (Basanagouda Patil Yatnal) ಅವರಿಗೆ ಹೈಕಮಾಂಡ್‌ ಶಾಕ್‌ ನೀಡಿದೆ. ಈ ಹಿಂದೆ ಶಿಸ್ತು ಸಮಿತಿ ನೀಡಿದ್ದ ಶೋಕಾಸ್‌ ನೋಟಿಸ್‌ಗೆ ಯಾವುದೇ ಉತ್ತರ ನೀಡದ ಕಾರಣ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರನ್ನು 6 ವರ್ಷಗಳ ಕಾಲ ಬಿಜೆಪಿಯಿಂದ ಉಚ್ಚಾಟನೆ ಮಾಡಲಾಗಿದೆ.

ರಾಜ್ಯ ನಾಯಕರ ವಿರುದ್ಧ ಪದೇಪದೇ ಬಹಿರಂಗ ಹೇಳಿಕೆಗಳನ್ನು ನೀಡಿರುವುದು ಯತ್ನಾಳ್‌ ಉಚ್ಚಾಟನೆಗೆ ಪ್ರಮುಖ ಕಾರಣವಾಗಿದೆ. ಈ ಹಿಂದೆ ಬಿಜೆಪಿ ಶಿಸ್ತು ಸಮಿತಿ ಎರಡು ಬಾರಿ ನೋಟಿಸ್‌ ನೀಡಿತ್ತು. ನೋಟಿಸ್‌ ನೀಡಿದ್ದರೂ ಪದೇ ಪದೇ ಪಕ್ಷದ ಶಿಸ್ತು ಉಲ್ಲಂಘನೆ ಮಾಡುತ್ತಿದ್ದರು. ಕೊನೆಗೆ ಫೆ.10 ರಂದು ಶೋಕಾಸ್‌ ನೋಟಿಸ್‌ಗೆ ಯತ್ನಾಳ್‌ ಉತ್ತರ ನೀಡಿದ್ದರು. ಯತ್ನಾಳ್ ಉತ್ತರ, ಸ್ಪಷ್ಟನೆ ಒಪ್ಪದ ಕೇಂದ್ರ ಶಿಸ್ತು ಸಮಿತಿ ಈ ನಿರ್ಧಾರ ಇಂದು ಕೈಗೊಂಡಿದೆ.

ಉಚ್ಚಾಟನೆ ಆದೇಶ ಪ್ರತಿಯಲ್ಲಿ ಏನಿದೆ?

'ಪಕ್ಷದ ಕೇಂದ್ರ ಶಿಸ್ತು ಸಮಿತಿಯು 2025 ಫೆಬ್ರುವರಿ 10 ರಂದು ನೀಡಲಾದ ಶೋಕಾಸ್ ನೋಟಿಸ್‌ಗೆ ನಿಮ್ಮ ಪ್ರತಿಕ್ರಿಯೆಯನ್ನು ಪರಿಗಣಿಸಿದ್ದೇವೆ. ಹಿಂದಿನ ಶೋಕಾಸ್ ನೋಟಿಸ್‌ಗಳಿಗೆ ಉತ್ತರಿಸುವಾಗ ಉತ್ತಮ ನಡವಳಿಕೆಯ ಭರವಸೆ ನೀಡಿದ್ದರೂ ಕೂಡ, ನೀವು ಪಕ್ಷದ ಶಿಸ್ತನ್ನು ಪದೇ ಪದೇ ಉಲ್ಲಂಘಿಸುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಹೀಗಾಗಿ ನಿಮ್ಮನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ತಕ್ಷಣ ಜಾರಿಗೆ ಬರುವಂತೆ ನಿಮ್ಮನ್ನು 6 ವರ್ಷಗಳ ಅವಧಿಗೆ ಉಚ್ಚಾಟಿಸಲು ನಿರ್ಧರಿಸಲಾಗಿದೆ. ನೀವು ಇಲ್ಲಿಯವರೆಗೆ ಹೊಂದಿದ್ದ ಪಕ್ಷದ ಯಾವುದೇ ಹುದ್ದೆಯಿಂದ ನಿಮ್ಮನ್ನು ತೆಗೆದುಹಾಕಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಬಿಜೆಪಿಯಿಂದ ಮೂರನೇ ಬಾರಿ ಉಚ್ಚಾಟನೆ

2009 ಮತ್ತು 2016ರಲ್ಲಿ ಬಿಜೆಪಿಯಿಂದ ಉಚ್ಚಾಟನೆಗೊಂಡಿದ್ದ ಯತ್ನಾಳ್‌ ಇದೀಗ ಮೂರನೇ ಬಾರಿ ಉಚ್ಚಾಟನೆಯಾಗಿದ್ದಾರೆ. ಯತ್ನಾಳ್‌ ಅವರು 1994 ರಲ್ಲೇ ರಾಜಕೀಯ ಬದುಕನ್ನು ಆರಂಭಿಸಿದರು. ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದರು. ಈ ಚುನಾವಣೆಯಲ್ಲಿ ಬಿಜಾಪುರ ಕ್ಷೇತ್ರದಿಂದ ಆಯ್ಕೆಯಾದರು. 1999 ರ ಲೋಕಸಭಾ ಚುನಾವಣೆಯಲ್ಲಿ ಬಿಜಾಪುರ ಕ್ಷೇತ್ರದಿಂದ ಸ್ಪರ್ಧಿಸಿ ಆಯ್ಕೆಯಾದರು. ಅವರು 2004 ರಲ್ಲಿ ಲೋಕಸಭೆಗೆ ಮರು ಆಯ್ಕೆಯಾದರು. ಅವರು 8 ಸೆಪ್ಟೆಂಬರ್ 2003 ರಿಂದ 16 ಮೇ 2004 ರ ವರೆಗೆ ಕೇಂದ್ರದಲ್ಲಿ ರೈಲ್ವೆ ರಾಜ್ಯ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ.

2010 ರಲ್ಲಿ ಅವರು ಜನತಾದಳಕ್ಕೆ (ಜೆಡಿಎಸ್‌) ಸೇರ್ಪಡೆಗೊಂಡರು. 2013 ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಅವರು ಜೆಡಿಎಸ್‌ ಅಭ್ಯರ್ಥಿಯಾಗಿ ವಿಜಯಪುರ ಕ್ಷೇತ್ರದಿಂದ ಸ್ಪರ್ಧಿಸಿದರು. ಈ ಚುನಾವಣೆಯಲ್ಲಿ ಸೋಲು ಅನುಭವಿಸಿದರು. ಅದೇ ವರ್ಷದಲ್ಲಿ ಜೆಡಿಎಸ್‌ ತೊರೆದು ಮತ್ತೆ ಬಿಜೆಪಿಗೆ ಸೇರ್ಪಡೆಯಾದರು.

ಈ ಸುದ್ದಿಯನ್ನೂ ಓದಿ | BJP Karnataka: ಪಕ್ಷದ ಶಿಸ್ತು ಉಲ್ಲಂಘನೆ; ರಾಜ್ಯದ ಐವರು ಬಿಜೆಪಿ ನಾಯಕರಿಗೆ ಹೈಕಮಾಂಡ್‌ ನೋಟಿಸ್‌

2015 ರಲ್ಲಿ, ಕರ್ನಾಟಕ ವಿಧಾನ ಪರಿಷತ್ತಿನ ಬಿಜಾಪುರ ಸ್ಥಳೀಯ ಪ್ರಾಧಿಕಾರಗಳ ಅವಳಿ ಕ್ಷೇತ್ರಗಳಿಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. ಇದು ಬಿಜೆಪಿ ನಾಯಕರ ಅಸಮಾಧಾನಕ್ಕೆ ಕಾರಣವಾಯಿತು. ಈ ಹಿನ್ನೆಲೆಯಲ್ಲಿ ಅವರನ್ನು 6 ವರ್ಷಗಳ ಕಾಲ ಭಾರತೀಯ ಜನತಾ ಪಕ್ಷದಿಂದ ಹೊರಹಾಕಲಾಗಿತ್ತು. 2018 ರಲ್ಲಿ ಮತ್ತೆ ಬಿಜೆಪಿ ಗೆ ಸೇರ್ಪಡೆಯಾದರು. 2018 ರಲ್ಲಿ ವಿಜಯಪುರ ಜಿಲ್ಲೆಯಿಂದ ಬಿಜೆಪಿ ಯಿಂದ ಸ್ಪರ್ಧೆ ಮಾಡಿದ್ದರು. 2023 ಚುನಾವಣೆಯಲ್ಲಿ ಮತ್ತೆ ಗೆದ್ದು ಶಾಸಕರಾಗಿದ್ದರು.