ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ʼʼಭ್ರಷ್ಟಾಚಾರ ಆರೋಪ ಹೊತ್ತ ನಾಗೇಂದ್ರ ಎಂದರೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ಗೆ ಭಯʼʼ: ಬಿಜೆಪಿ ಆರೋಪಕ್ಕೆ ಕಾರಣವೇನು?

BY Vijayendra: ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾಗ ನಾಗೇಂದ್ರ ಭ್ರಷ್ಟಾಚಾರದ ಆರೋಪ ಹೊತ್ತು ರಾಜೀನಾಮೆ ನೀಡಿದ್ದರು. ಈಗ ಮತ್ತೆ ಅವರನ್ನು ಸಚಿವ ಸಂಪುಟಕ್ಕೆ ತೆಗೆದುಕೊಳ್ಳುವ ಅನಿವಾರ್ಯತೆ ಯಾಕೆ ಬಂತು ನಿಮಗೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಪ್ರಶ್ನಿಸಿದ್ದಾರೆ.

ʼʼನಾಗೇಂದ್ರ ಎಂದರೆ ಸಿಎಂಗೆ ಭಯವೇ?ʼʼ ಬಿ.ವೈ. ವಿಜಯೇಂದ್ರ ಪ್ರಶ್ನೆ

ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ (ಸಂಗ್ರಹ ಚಿತ್ರ) -

Profile
Siddalinga Swamy Aug 17, 2026 9:54 PM

ಬೆಂಗಳೂರು, ಆ. 17: ಭ್ರಷ್ಟಾಚಾರದ ಗಂಭೀರ ಆರೋಪ ಹೊತ್ತ ನಾಗೇಂದ್ರ ಎಂದರೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರಿಗೆ ಭಯವೇ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ (BY Vijayendra) ಪ್ರಶ್ನಿಸಿದ್ದಾರೆ. ಸೋಮವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬರಗಾಲ, ಕೆಪಿಎಸ್‌ಸಿ ಹಗರಣ ಸೇರಿ ಅನೇಕ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚೆ ಆಗಬೇಕಿದೆ. ಇವೆಲ್ಲ ಚರ್ಚೆ ಮಾಡಲು ಮುಖ್ಯಮಂತ್ರಿ ಇಂಥ ಕಳಂಕಿತ ಸಚಿವರನ್ನು ಮಂತ್ರಿಮಂಡಲದಿಂದ ತಕ್ಷಣ ಕೈಬಿಡಬೇಕು ಎಂದು ಆಗ್ರಹಿಸಿದರು.

ಸರ್ಕಾರದಲ್ಲಿ ಕಳಂಕಿತರಾದ ನಾಗೇಂದ್ರ ಅವರನ್ನು ಸಚಿವ ಸಂಪುಟದಲ್ಲಿ ಸೇರಿಸಿದ್ದು, ಅವರನ್ನು ಕೈಬಿಡಬೇಕೆಂದು ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಶಾಸಕರು ಇಂದು ಸದನದಲ್ಲಿ ಒಕ್ಕೊರಲಿನಿಂದ ಆಗ್ರಹಿಸಿದ್ದೇವೆ. ರಾಜ್ಯಾದ್ಯಂತ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿ ಕಚೇರಿ ಮುಂದೆ ನಮ್ಮ ಕಾರ್ಯಕರ್ತರು ಪ್ರತಿಭಟನೆಯನ್ನು ಪ್ರಾರಂಭಿಸಿದ್ದಾರೆ. ಅನಿರ್ದಿಷ್ಟಾವಧಿ ಕಾಲದವರೆಗೆ ಪ್ರತಿಭಟನೆ ನಡೆಯಲಿದೆ ಎಂದು ತಿಳಿಸಿದರು.

ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾಗ ನಾಗೇಂದ್ರ ಭ್ರಷ್ಟಾಚಾರದ ಆರೋಪ ಹೊತ್ತು ರಾಜೀನಾಮೆ ನೀಡಿದ್ದರು. ಈಗ ಮತ್ತೆ ಅವರನ್ನು ಸಚಿವ ಸಂಪುಟಕ್ಕೆ ತೆಗೆದುಕೊಳ್ಳುವ ಅನಿವಾರ್ಯತೆ ಯಾಕೆ ಬಂತು ನಿಮಗೆ ಎಂದು ಕೇಳಿದರು. ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗೆ ಮೀಸಲಿಟ್ಟ ಹಣವನ್ನು ಲೂಟಿ ಮಾಡಿದ ವ್ಯಕ್ತಿಯನ್ನು ಮತ್ತೆ ಸಚಿವ ಸಂಪುಟಕ್ಕೆ ತೆಗೆದುಕೊಂಡಿದ್ದೀರಿ ಎಂದು ಪ್ರಶ್ನಿಸಿದರು.

ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾಗ ನಾಗೇಂದ್ರ ಅವರ ಅವ್ಯವಹಾರದ ಕುರಿತು ಈ ಹಿಂದೆ ಚರ್ಚೆ ಆಗಿದೆ. ನಂತರದಲ್ಲೇ ನಾಗೇಂದ್ರ ಅವರ ರಾಜೀನಾಮೆ ಪಡೆಯಲಾಗಿತ್ತು. ಈ ವಿಚಾರದಲ್ಲಿ ಚರ್ಚೆ ಬೇಡ. ನಾಗೇಂದ್ರ ಅವರ ವಿರುದ್ಧ ಇದೀಗ ಆರೋಪಪಟ್ಟಿ ಹಾಕಲಾಗಿದೆ. ಅವರು ನಿರಪರಾಧಿ ಎಂದು ಎಲ್ಲೂ ಸಾಬೀತಾಗಿಲ್ಲ ಎಂದು ತಿಳಿಸಿದರು.

ನಾಳೆ ನಾಗೇಂದ್ರ ನಿರಪರಾಧಿ ಎಂದು ಸಾಬೀತಾದರೆ ಅವರನ್ನು ಸಚಿವರನ್ನಾಗಿ ಮಾಡುವ ಬದಲು ಮುಖ್ಯಮಂತ್ರಿಯನ್ನಾಗಿ ಮಾಡಿ. ನಮ್ಮದೇನೂ ಅಭ್ಯಂತರವಿಲ್ಲ. ಇವತ್ತು ಕಳಂಕಿತ ಸಚಿವರನ್ನು ಸದನದಲ್ಲಿ ಕೂರಿಸಿಕೊಂಡು ನಾವು ಚರ್ಚೆ ಮಾಡಲು ತಯಾರಿಲ್ಲ. ಅವರು ನಿರ್ದೋಷಿ ಎಂದು ಸಾಬೀತಾಗುವವರೆಗೆ ಸಚಿವ ಸಂಪುಟದಲ್ಲಿ ಇಟ್ಟುಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.

ನೈಸ್ ಯೋಜನೆಯನ್ನು ಟೇಕ್ ಓವರ್ ಮಾಡಲು ಸಂಚು ನಡೆಯುತ್ತಿದೆ: ಎಚ್‌.ಡಿ. ಕುಮಾರಸ್ವಾಮಿ ವಾಗ್ದಾಳಿ

ಬರಗಾಲ, ಕೆಪಿಎಸ್‌ಸಿ ಹಗರಣ ಸೇರಿ ಅನೇಕ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚೆ ಆಗಬೇಕಿದೆ. ಇವೆಲ್ಲ ಚರ್ಚೆ ಮಾಡಲು ಮುಖ್ಯಮಂತ್ರಿ ಇಂಥ ಕಳಂಕಿತ ಸಚಿವರನ್ನು ಮಂತ್ರಿಮಂಡಲದಿಂದ ತಕ್ಷಣ ಕೈಬಿಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಆಗ್ರಹಿಸಿದರು. ವಿಪಕ್ಷ ನಾಯಕ ಆರ್. ಅಶೋಕ್ ಮತ್ತು ಶಾಸಕರು ಉಪಸ್ಥಿತರಿದ್ದರು.