ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಬಿ.ಕೆ. ಹರಿಪ್ರಸಾದ್‌ಗೆ ಒಲಿದ ಕೆಪಿಸಿಸಿ ಅಧ್ಯಕ್ಷ ಸ್ಥಾನ; ಡಿ.ಕೆ. ಶಿವಕುಮಾರ್‌ ಉತ್ತರಾಧಿಕಾರಿಯಾಗಿ ಆಯ್ಕೆ

BK Hariprasad: ಡಿ.ಕೆ. ಶಿವಕುಮಾರ್‌ ಅವರಿಂದ ತೆರವಾಗಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಆಯ್ಕೆಯಾಗಿದ್ದಾರೆ. ಈ ಕುರಿತು ಅಖಿಲ ಭಾರತ ಕಾಂಗ್ರೆಸ್ ಸಮಿತಿ ಅಧಿಕೃತ ಆದೇಶ ಹೊರಡಿಸಿದೆ.

ಬಿ.ಕೆ. ಹರಿಪ್ರಸಾದ್‌

ಬೆಂಗಳೂರು, ಜೂ. 3: ಕರ್ನಾಟಕ ಕಾಂಗ್ರೆಸ್ ರಾಜಕೀಯದಲ್ಲಿ ನಡೆದ ಮಹತ್ವದ ಬೆಳವಣಿಗೆಯೊಂದರಲ್ಲಿ ಡಿ.ಕೆ. ಶಿವಕುಮಾರ್‌ (DK Shivakumar) ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇದರ ಬೆನ್ನಲ್ಲೇ ಅವರಿಂದ ತೆರವಾದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ಅಧ್ಯಕ್ಷರಾಗಿ ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ (BK Hariprasad) ಆಯ್ಕೆಯಾಗಿದ್ದಾರೆ. ಈ ಕುರಿತು ಅಖಿಲ ಭಾರತ ಕಾಂಗ್ರೆಸ್ ಸಮಿತಿ (AICC) ಬುಧವಾರ (ಜೂನ್‌ 3) ಅಧಿಕೃತ ಆದೇಶ ಹೊರಡಿಸಿದೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಸಹಿ ಮಾಡಿರುವ ಪ್ರಕಟಣೆಯಲ್ಲಿ, ಕಾಂಗ್ರೆಸ್ ಅಧ್ಯಕ್ಷರ ನಿರ್ದೇಶನದಂತೆ ಬಿ.ಕೆ. ಹರಿಪ್ರಸಾದ್ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಕೆಪಿಸಿಸಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ತಿಳಿಸಲಾಗಿದೆ.

ಡಿಕೆಶಿಗೆ ಮೆಚ್ಚುಗೆ

ನಿರ್ಗಮಿತ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪಕ್ಷದ ಸಂಘಟನೆಗೆ ನೀಡಿದ ಕೊಡುಗೆಯನ್ನು ಕಾಂಗ್ರೆಸ್ ಪ್ರಶಂಸಿಸಿದೆ. ಕಳೆದ ಹಲವು ವರ್ಷಗಳಿಂದ ರಾಜ್ಯ ಕಾಂಗ್ರೆಸ್ ಸಂಘಟನೆಯನ್ನು ಬಲಪಡಿಸುವಲ್ಲಿ ಡಿ.ಕೆ. ಶಿವಕುಮಾರ್ ಪ್ರಮುಖ ಪಾತ್ರ ವಹಿಸಿದ್ದರು ಎಂದು ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ.

ಬಿ.ಕೆ. ಹರಿಪ್ರಸಾದ್ ಕಾಂಗ್ರೆಸ್‌ನ ಹಿರಿಯ ನಾಯಕರಾಗಿದ್ದು, ಸಂಘಟನಾ ಅನುಭವ ಹಾಗೂ ರಾಷ್ಟ್ರೀಯ ಮಟ್ಟದ ರಾಜಕೀಯ ಹಿನ್ನೆಲೆಯನ್ನು ಹೊಂದಿದ್ದಾರೆ. ಮುಂಬರುವ ಚುನಾವಣೆಗಳು ಮತ್ತು ಪಕ್ಷದ ಸಂಘಟನೆ ಬಲವರ್ಧನೆ ದೃಷ್ಟಿಯಿಂದ ಈ ನೇಮಕಾತಿಗೆ ವಿಶೇಷ ಮಹತ್ವ ದೊರೆತಿದೆ. ಈ ಬೆಳವಣಿಗೆಯೊಂದಿಗೆ ರಾಜ್ಯ ಕಾಂಗ್ರೆಸ್‌ನಲ್ಲಿ ಹೊಸ ಸಂಘಟನಾ ಅಧ್ಯಾಯ ಆರಂಭವಾಗಿದ್ದು, ಪಕ್ಷದ ಆಂತರಿಕ ಸಮೀಕರಣಗಳ ಮೇಲೂ ಇದರ ಪರಿಣಾಮ ಬೀರುವ ಸಾಧ್ಯತೆ ಇದೆ.

ಕಾಂಗ್ರೆಸ್‌ ಶಾಸಕರ ಖರೀದಿಗೆ ಕಾಂಗ್ರೆಸ್‌ನಲ್ಲೇ ಪೈಪೋಟಿ: ಪ್ರಲ್ಹಾದ್‌ ಜೋಶಿ

ಸತೀಶ್ ಜಾರಕಿಹೊಳಿ ಕೈ ತಪ್ಪಿದ ಹುದ್ದೆ

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ಆಕಾಂಕ್ಷಿಯಾಗಿದ್ದರು. ಆದರೆ ಕೊನೆ ಕ್ಷಣದಲ್ಲಿ ಅವರ ಅದೃಷ್ಟ ಕೈಕೊಟ್ಟಿದ್ದು, ಬಿ.ಕೆ. ಹರಿಪ್ರಸಾದ್‌ ಪಾಲಾಗಿದೆ. ಸತೀಶ್ ಜಾರಕಿಹೊಳಿ ಮೊದಲಿನಿಂದಲೂ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದರು. ಸಿದ್ದರಾಮಯ್ಯ ರಾಜೀನಾಮೆ ನೀಡಿದಾಗ ಕೆಪಿಸಿಸಿ ಗಾದಿಗಾಗಿ ಹೈಕಮಾಂಡ್ ಮಟ್ಟದಲ್ಲಿ ಲಾಬಿ ನಡೆಸಿದ್ದರು.

ಹರಿಪ್ರಸಾದ್ ಹಿನ್ನೆಲೆ

ಬಿ.ಕೆ. ಹರಿಪ್ರಸಾದ್ ಪೂರ್ಣ ಹೆಸರು ಬೈಚನಹಳ್ಳಿ ಕೆಂಪಯ್ಯ ಹರಿಪ್ರಸಾದ್. ಅವರು ಕಾಂಗ್ರೆಸ್‌ನ ಪ್ರಭಾವಿ ನಾಯಕರು. ಇವರು ಅಖಿಲ ಭಾರತ ಕಾಂಗ್ರೆಸ್ ಸಮಿತಿಯ (AICC) ಪ್ರಮುಖ ಹುದ್ದೆಗಳನ್ನು ನಿರ್ವಹಿಸಿರುವ ಅನುಭವ ಹೊಂದಿದ್ದು, ಪ್ರಸ್ತುತ ವಿಧಾನ ಪರಿಷತ್ ಕಾಂಗ್ರೆಸ್ ಸದಸ್ಯರಾಗಿ ಕಾರ್ಯ ನಿರ್ವಹಿಸುತ್ತಿದಾರೆ. ಬೆಂಗಳೂರಿನಲ್ಲಿ 1954ರ ಜುಲೈ 29ರಂದು ಜನಿಸಿದ ಹರಿಪ್ರಸಾದ್, ಎನ್‌ಎಸ್‌ಯುಐ (NSUI) ಸಂಘಟನೆಯ ಮೂಲಕ ರಾಜಕೀಯ ಪ್ರವೇಶಿಸಿದರು. 1989-1990ರಲ್ಲಿ ಅಖಿಲ ಭಾರತ ಯುವ ಕಾಂಗ್ರೆಸ್‌ನ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದರು. 1990, 2004, 2013 ಹಾಗೂ 2014ರಲ್ಲಿ ರಾಜ್ಯಸಭೆ ಸದಸ್ಯರಾಗಿದ್ದರು.

ಸಾಷ್ಟಾಂಗ ನಮಸ್ಕಾರ ಮಾಡಿ ಶಕ್ತಿಸೌಧಕ್ಕೆ ಡಿಕೆಶಿ ಎಂಟ್ರಿ; ನೂತನ ಸಿಎಂ ಆಗಿ ಅಧಿಕಾರ ಸ್ವೀಕಾರ

ಹರಿಪ್ರಸಾದ್ ಅವರ ಆಯ್ಕೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಮತ್ತು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಆಸಕ್ತಿ ವಹಿಸಿದ್ದರು ಎಂದು ಮೂಲಗಳು ತಿಳಿಸಿವೆ.

ರಾಜ್ಯದ ಇನ್ನಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ.

ʼಪ್ರವಾಸಿ ಪ್ರಪಂಚʼ ವೆಬ್‌ಸೈಟ್‌ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್‌ ಮಾಡಿ.

Ramesh Ballamoole

View all posts by this author