Caste Census: ಜಾತಿ ಗಣತಿ ಪ್ರಶ್ನಿಸಿ ಅರ್ಜಿ: ಕೇಂದ್ರ, ರಾಜ್ಯ ಸರಕಾರಗಳಿಗೆ ಹೈಕೋರ್ಟ್ ನೋಟೀಸ್
ಸಮೀಕ್ಷೆ ನಡೆಸಲು ಆ.13ರಂದು ಸರ್ಕಾರ ಹೊರಡಿಸಿರುವ ಆದೇಶ ಪ್ರಶ್ನಿಸಿ ರಾಜ್ಯ ಒಕ್ಕಲಿಗರ ಸಂಘ, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ, ಮಾಜಿ ಶಾಸಕರೂ ಆದ ಹಿರಿಯ ವಕೀಲ ಕೆ.ಎನ್.ಸುಬ್ಬಾರೆಡ್ಡಿ ಮತ್ತಿತರರು ಸಲ್ಲಿಸಿರುವ ಪ್ರತ್ಯೇಕ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ನ್ಯಾಯಮೂರ್ತಿ ಅನು ಶಿವರಾಮನ್ ನೇತೃತ್ವದ ವಿಭಾಗೀಯ ಪೀಠ ಶುಕ್ರವಾರ ವಿಚಾರಣೆ ನಡೆಸಿತು.

-

ಬೆಂಗಳೂರು: ರಾಜ್ಯದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಸಮೀಕ್ಷೆ (ಜಾತಿ ಗಣತಿ, Caste Census) ನಡೆಸಲು ಹಿಂದುಳಿದ ವರ್ಗಗಳ ಶಾಶ್ವತ ಆಯೋಗಕ್ಕೆ ಸೂಚಿಸಿ ಹೊರಡಿಸಿರುವ ಆದೇಶ ಪ್ರಶ್ನಿಸಿರುವ ಅರ್ಜಿಗಳ ಸಂಬಂಧ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಕರ್ನಾಟಕ ಹೈಕೋರ್ಟ್ (Karnataka high court) ನೋಟಿಸ್ ಜಾರಿಗೊಳಿಸಿದೆ. ಸಮೀಕ್ಷೆ ನಡೆಸಲು ಆ.13ರಂದು ಸರ್ಕಾರ ಹೊರಡಿಸಿರುವ ಆದೇಶ ಪ್ರಶ್ನಿಸಿ ರಾಜ್ಯ ಒಕ್ಕಲಿಗರ ಸಂಘ, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ, ಮಾಜಿ ಶಾಸಕರೂ ಆದ ಹಿರಿಯ ವಕೀಲ ಕೆ.ಎನ್.ಸುಬ್ಬಾರೆಡ್ಡಿ ಮತ್ತಿತರರು ಸಲ್ಲಿಸಿರುವ ಪ್ರತ್ಯೇಕ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ನ್ಯಾಯಮೂರ್ತಿ ಅನು ಶಿವರಾಮನ್ ನೇತೃತ್ವದ ವಿಭಾಗೀಯ ಪೀಠ ಶುಕ್ರವಾರ ವಿಚಾರಣೆ ನಡೆಸಿತು.
ಅರ್ಜಿ ಕುರಿತು ಕೆಲಕಾಲ ವಾದ ಆಲಿಸಿದ ನ್ಯಾಯಪೀಠ, ಕೇಂದ್ರ ಹಾಗೂ ರಾಜ್ಯ ಸರ್ಕಾರ, ರಾಜ್ಯ ಹಿಂದುಳಿದ ವರ್ಗಗಳ ಆಯೋಗ, ಕೇಂದ್ರ ಸರ್ಕಾರ ಜಾತಿ ಗಣತಿ ಪ್ರಾಧಿಕಾರ, ಗಣತಿ ರಿಜಿಸ್ಟ್ರಾರ್ ಸೇರಿ ಎಲ್ಲಾ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿತು.
ಮತ್ತೊಂದು ಅರ್ಜಿ
ರಾಜ್ಯದ ಜನರ ಶೈಕ್ಷಣಿಕ ಮತ್ತು ಸಾಮಾಜಿಕ ಸಮೀಕ್ಷೆ ನಡೆಸುವ ಸರ್ಕಾರದ ನಿರ್ಧಾರ ಪ್ರಶ್ನಿಸಿ ಹಾವೇರಿ ಜಿಲ್ಲೆಯ ಹಿರೇಕೆರೂರಿನ ಲಿಂಗರಾಜ ಚಪ್ಪರದಳ್ಳಿ ಅವರು ತಕರಾರು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯೂ ಶುಕ್ರವಾರವೇ ನ್ಯಾಯಮೂರ್ತಿ ಬಿ.ಎಂ.ಶ್ಯಾಮ್ ಪ್ರಸಾದ್ ಅವರ ಪೀಠದ ಮುಂದೆ ವಿಚಾರಣೆಗೆ ಬಂದಿತ್ತು. ಕೆಲ ಕಾಲ ಅರ್ಜಿದಾರರ ಪರ ಹಿರಿಯ ವಕೀಲ ಗಂಗಾಧರ ಗುರುಮಠ ಅವರ ವಾದ ಆಲಿಸಿದ ನ್ಯಾಯಪೀಠವು ಪ್ರತಿವಾದಿಗಳಾಗಿರುವ ಕೇಂದ್ರ ಹಾಗೂ ರಾಜ್ಯ ಸರ್ಕಾರ ಮತ್ತು ಹಿಂದುಳಿದ ವರ್ಗಗಳ ಆಯೋಗಕ್ಕೆ ನೋಟಿಸ್ ಜಾರಿಗೊಳಿಸಿ ವಿಚಾರಣೆ ಮುಂದೂಡಿತು.
ಸರ್ಕಾರದ ಪರ ವಾದ ಮಂಡಿಸಲು ರಾಜ್ಯ ಅಡ್ವೋಕೇಟ್ ಜನರಲ್ ಲಭ್ಯವಿಲ್ಲದ ಕಾರಣ ಪರಿಗಣಿಸಿ, ವಿಚಾರಣೆಯನ್ನು ಸೋಮವಾರಕ್ಕೆ (ಸೆ.22ಕ್ಕೆ) ಮುಂದೂಡಿತು. ಅಲ್ಲದೆ, ಸಮೀಕ್ಷೆ ನಡೆಸುವುದಕ್ಕೆ ತಡೆಯಾಜ್ಞೆ ನೀಡಬೇಕು ಎಂಬ ಅರ್ಜಿದಾರರ ಮಧ್ಯಂತರ ಮನವಿ ಕುರಿತು ಸೋಮವಾರ ವಿಚಾರಣೆ ನಡೆಸುವುದಾಗಿ ಇದೇ ವೇಳೆ ತಿಳಿಸಿದೆ. ಇದಕ್ಕೂ ಮುನ್ನ ಅರ್ಜಿದಾರರ ಪೈಕಿ ಒಬ್ಬರಾದ ಉದಯ್‌ಶಂಕರ್ ಪರ ಹಿರಿಯ ವಕೀಲ ಪ್ರಭುಲಿಂಗ ನಾವದಗಿ, ಈಗಾಗಲೇ ಸಮೀಕ್ಷೆ ಆರಂಭಿಸಲಾಗಿದೆ ಎಂದು ಆಯೋಗ ಹೇಳಬಾರದು. ಆಗ ಸಮೀಕ್ಷೆ ನಡೆಸದಂತೆ ಆಯೋಗವನ್ನು ಹಿಂದೆ ಸರಿಯುವಂತೆ ಮಾಡಲಾಗದು ಎಂದು ವಾದಿಸಿದರು.
ಹಿಂದುಳಿದ ವರ್ಗಗಳ ಆಯೋಗದ ಪರ ಹಾಜರಿದ್ದ ಹಿರಿಯ ವಕೀಲ ಪ್ರೊ. ರವಿವರ್ಮ ಕುಮಾರ್, ಈಗಾಗಲೇ ಎರಡು ಕೋಟಿ ಕುಟುಂಬಗಳಿಗೆ ಸಮೀಕ್ಷೆಯ ಪ್ರತಿ ಪೂರೈಸಲಾಗಿದೆ ಎಂದು ಮಾಹಿತಿ ನೀಡಿದರು. ಮತ್ತೊಬ್ಬ ಅರ್ಜಿದಾರರಾದ ಸುಬ್ಬಾರೆಡ್ಡಿ ಅವರ ಪರ ವಕೀಲರು, ಸಮೀಕ್ಷೆ ಸೆ.22ರಿಂದ ಆರಂಭವಾಗುತ್ತದೆ ಎಂದು ಹೇಳಲಾಗಿದೆ. ಇದರಿಂದ ನ್ಯಾಯಾಲಯವು ಅರ್ಜಿ ವಿಚಾರಣೆ ನಡೆಸುವವರೆಗೆ ಸಮೀಕ್ಷೆ ಮುಂದುವರಿಸುವುದರಿಂದ ಆಯೋಗ ಸರಿಯಬೇಕು ಎಂದು ಒತ್ತಾಯಿಸಿದರು.
ಅದಕ್ಕೆ ಹಿಂದುಳಿದ ವರ್ಗಗಳ ಆಯೋಗದ ಪರ ವಕೀಲರು, ಮುಂದುವರಿದ ಜಾತಿಯವರು ಎನಿಸಿಕೊಂಡಿರುವವರು ಅರ್ಜಿದಾರರ ರೂಪದಲ್ಲಿ ಸಮೀಕ್ಷೆ ತಡೆಯಲು ಮುಂದಾಗಿದ್ದಾರೆ ಎಂದು ಆರೋಪಿಸಿದರು. ಹಿರಿಯ ವಕೀಲ ಶ್ರೀರಂಗ ಅವರು, ಸಮೀಕ್ಷೆಯಲ್ಲಿ ದತ್ತಾಂಶ ಸಂಗ್ರಹಿಸಲು ಪಡೆಯಲು ಇಂಧನ ಇಲಾಖೆಯಲ್ಲಿ ಮೀಟರ್ ರೀಡರ್‌ಗಳಾಗಿರುವವರ ಸೇವೆ ಮುಂದಾಗಲಾಗಿದೆ. ಖಾಸಗಿ ಕಂಪನಿಗಳು ಮೀಟರ್ ರೀಡಿಂಗ್ ಕೆಲಸ ಮಾಡುತ್ತಿವೆ. ದತ್ತಾಂಶವು ಖಾಸಗಿ ಸಂಸ್ಥೆಗಳ ಕೈ ಸೇರಲಿವೆ. ಆಗ ಅದಕ್ಕೆ ಯಾವುದೇ ಭದ್ರತೆ ಇರುವುದಿಲ್ಲ ಎಂದು ಆಕ್ಷೇಪಿಸಿದರು.
ಇದನ್ನೂ ಓದಿ: Caste census: ಸೆ.22 ರಿಂದ ರಾಜ್ಯದಲ್ಲಿ ಜಾತಿ ಸಮೀಕ್ಷೆ; ಜಾತಿ-ಉಪಜಾತಿಗಳ ಪಟ್ಟಿ ಇಲ್ಲಿದೆ