ಚಾಮರಾಜನಗರ ಅ.15: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಶಾಗ್ಯ ವ್ಯಾಪ್ತಿಯ ದಟ್ಟ ಅರಣ್ಯ ಪ್ರದೇಶದಲ್ಲಿ ಅರಣ್ಯ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಯಲ್ಲಿ ಮೂವರು ಶಂಕಿತ ಬೇಟೆಗಾರರು ಮೃತಪಟ್ಟಿರುವ ಘಟನೆ ನಡೆದಿದೆ. ಕಾಡಿಗೆ ಅಕ್ರಮವಾಗಿ ಪ್ರವೇಶಿಸಿದ್ದ ಕೆಲವರು ಕಾಡುಪ್ರಾಣಿಯನ್ನು ಬೇಟೆಯಾಡಿ, ಮಾಂಸ ಬೇರ್ಪಡಿಸುತ್ತಿದ್ದ ವೇಳೆ ಗಸ್ತಿನಲ್ಲಿದ್ದ ಕಾವೇರಿ ವನ್ಯಜೀವಿಧಾಮದ ಅರಣ್ಯ ಸಿಬ್ಬಂದಿ ಸ್ಥಳಕ್ಕೆ ತೆರಳಿದ್ದಾರೆ.
ಈ ವೇಳೆ ಶಸ್ತ್ರಾಸ್ತ್ರಗಳನ್ನು ಕೆಳಗಿಟ್ಟು ಶರಣಾಗುವಂತೆ ಸಿಬ್ಬಂದಿ ಸೂಚಿಸಿದ್ದಾರೆ. ಆದರೆ ಬೇಟೆಗಾರರು ಅರಣ್ಯ ಸಿಬ್ಬಂದಿ ಮೇಲೆ ಗುಂಡು ಹಾರಿಸಿದ ಹಿನ್ನೆಲೆಯಲ್ಲಿ ಸಿಬ್ಬಂದಿ ಪ್ರತಿದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಈ ವೇಳೆ ಮೂವರು ಮೃತಪಟ್ಟಿದ್ದಾರೆ. ಬಲಿಯಾದವರನ್ನು ಹನೂರು ತಾಲೂಕಿನ ತೋಮಿಯರ್ ಪಾಳ್ಯದ ನಿವಾಸಿಗಳಾದ ಅಂತೋನಿಸ್ವಾಮಿ, ಕುಮಾರ್ ಹಾಗೂ ಪೀಟರ್ ಎಂದು ಗುರುತಿಸಲಾಗಿದೆ. ಅರಣ್ಯ ಇಲಾಖೆಯ ಓರ್ವ ಸಿಬ್ಬಂದಿ ಗಾಯಗೊಂಡಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಓರ್ವ ಬೇಟೆಗಾರನನ್ನು ಕೊಳ್ಳೇಗಾಲದ ಉಪವಿಭಾಗ ಆಸ್ಪತ್ರೆಗೆ ಕರೆತರುವ ಮಾರ್ಗಮಧ್ಯೆ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.
ಗುಂಡಿನ ಚಕಮಕಿ ಬಳಿಕ ಒಬ್ಬ ಬೇಟೆಗಾರ ಪರಾರಿಯಾಗಿದ್ದಾನೆ. ಘಟನಾ ಸ್ಥಳದಿಂದ ಒಂದು ನಾಡ ಬಂದೂಕು, ಒಂದು ಜಿಂಕೆ ಮೃತದೇಹವನ್ನ ಅರಣ್ಯ ಸಿಬ್ಬಂದಿ ವಶಕ್ಕೆ ಪಡೆದುಕೊಂಡಿದ್ದಾರೆ. ಇನ್ನು ಮೃತಪಟ್ಟ ಮೂವರು ಬೇಟೆಗಾರರ ಶವವನ್ನ ಮರಣೋತ್ತರ ಪರೀಕ್ಷೆಗೆ ಮೈಸೂರು ಕೆಆರ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಗ್ರಾಮಸ್ಥರ ಆಕ್ರೋಶ
ಮೂರು ಬೇಟೆಗಾರರ ಹಿನ್ನೆಲೆ ಅರಣ್ಯ ಇಲಾಖೆ ವಿರುದ್ಧ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ. ಅರಣ್ಯ ಇಲಾಖೆ ಪೀಠೋಪಕರಣಗಳನ್ನ ಧ್ವಂಸ ಮಾಡಿದ್ದಾರೆ. ಬೇಟೆಗಾರರನ್ನು ಸೆರೆಹಿಡಿದು ನಂತರ ಅವರನ್ನು ಕೊಂದಿದ್ದಾರೆಂಬ ಆರೋಪ ಸಹ ಕೇಳಿ ಬಂದಿದೆ. ಅರಣ್ಯ ಇಲಾಖೆ ವಿರುದ್ಧ ಸ್ಥಳೀಯರು ರೊಚ್ಚಿಗೆದ್ದಿದ್ದು, ಉಪವಲಯ ಅರಣ್ಯಾಧಿಕಾರಿಗಳ ಕಚೇರಿ ಮೇಲೆ ದಾಳಿ ನಡೆಸಿದ್ದಾರೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಶಾಗ್ಯ ಗ್ರಾಮದಲ್ಲಿನ ಅರಣ್ಯ ಇಲಾಖೆ ಕಚೇರಿಯನ್ನ ದ್ವಂಸ ಮಾಡಿದ್ದಾರೆ ಎಂದು ತಿಳಿದು ಬಂದಿದೆ.