ಚಿಕ್ಕಬಳ್ಳಾಪುರ: ಜಿಲ್ಲೆಯ ಎಂಟೂ ತಾಲೂಕುಗಳಲ್ಲಿ ತೀವ್ರ ಬರ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಹಾಗೂ ರೈತರ ಹಿತ ರಕ್ಷಣೆಗೆ ಸಮರೋಪಾದಿಯಲ್ಲಿ ಪರಿಹಾರ ಕ್ರಮ ಕೈಗೊಳ್ಳುವಂತೆ ಸಾರಿಗೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎಸ್.ಸುರೇಶ್(B S Suresh) ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ನಗರ ಹೊರವಲಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಪ್ರಕೃತಿ ವಿಕೋಪ ಹಾಗೂ ಬರ ಪರಿಸ್ಥಿತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಾ ದ್ಯಂತ ಮಳೆ ಕೊರತೆ ತೀವ್ರವಾಗಿದ್ದು, ಅಗತ್ಯವಿರುವ ಕಡೆ ಖಾಸಗಿ ಟ್ಯಾಂಕರ್‌ಗಳ ಮೂಲಕ ಕುಡಿಯುವ ನೀರು ಪೂರೈಸಲು ಈಗಾಗಲೇ ಸೂಚನೆ ನೀಡಲಾಗಿದೆ ಎಂದರು.
ಕಳೆದ ಮಾರ್ಚ್ನಿಂದ ಈವರೆಗೆ ಆಗಬೇಕಿದ್ದ ಮಳೆಯ ಪೈಕಿ ಕೇವಲ ಶೇ.4.5ರಷ್ಟು ಮಾತ್ರ ಮಳೆಯಾ ಗಿದ್ದು, ಕೃಷಿ ಚಟುವಟಿಕೆಗಳ ಮೇಲೆ ಗಂಭೀರ ಪರಿಣಾಮ ಬೀರಿದೆ. ಸಾಮಾನ್ಯವಾಗಿ ಈ ವೇಳೆಗೆ 1.26 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಪೂರ್ಣಗೊಳ್ಳಬೇಕಿದ್ದರೆ, ಕೇವಲ 5650 ಹೆಕ್ಟೇರ್ ಪ್ರದೇಶದಲ್ಲಿ ಮಾತ್ರ ಬಿತ್ತನೆ ನಡೆದಿದೆ ಎಂದು ಮಾಹಿತಿ ನೀಡಿದರು.
ಜಿಲ್ಲೆಯಲ್ಲಿ ಸುಮಾರು 1.25 ಲಕ್ಷ ರೈತರು ಬೆಳೆ ವಿಮೆ ಮಾಡಿಸಿಕೊಂಡಿದ್ದು, ಬೆಳೆ ಹಾನಿಗೊಳಗಾದ ಪ್ರದೇಶಗಳ ಸಮೀಕ್ಷೆ ಪೂರ್ಣಗೊಳಿಸಿ ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ಜಿಲ್ಲಾಡಳಿತಕ್ಕೆ ಸೂಚಿಸ ಲಾಗಿದೆ. ವರದಿ ಆಧರಿಸಿ ಬರಪೀಡಿತ ಪ್ರದೇಶ ಘೋಷಣೆ ಕುರಿತು ಸರ್ಕಾರ ತೀರ್ಮಾನ ಕೈಗೊಳ್ಳಲಿದೆ ಎಂದು ತಿಳಿಸಿದರು.
ಕುಡಿಯುವ ನೀರಿನ ವ್ಯವಸ್ಥೆಗಾಗಿ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ತಲಾ ರೂ.1 ಕೋಟಿ ಮೀಸಲಿಡ ಲಾಗಿದ್ದು, ಯಾವುದೇ ಅನುದಾನದ ಕೊರತೆ ಉಂಟಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದರು. ರೈತರ ಪಂಪ್‌ಸೆಟ್‌ಗಳಿಗೆ ಹಗಲಿನಲ್ಲಿ ನಾಲ್ಕು ಗಂಟೆ ಹಾಗೂ ರಾತ್ರಿ ಮೂರು ಗಂಟೆ ವಿದ್ಯುತ್ ಪೂರೈಸುವಂತೆ ಸಂಬಂಧಪಟ್ಟ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.
ಸಭೆಯ ಬಳಿಕ ಸಚಿವರು ಮಂಡಿಕಲ್ ಗ್ರಾಮಕ್ಕೆ ಭೇಟಿ ನೀಡಿ ಒಣಗಿಹೋಗಿರುವ ಬೆಳೆಗಳನ್ನು ಪರಿಶೀಲಿಸಿ ರೈತರೊಂದಿಗೆ ಸಂವಾದ ನಡೆಸಿದರು. ರೈತರಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು. ನಿರ್ಲಕ್ಷ್ಯ ಅಥವಾ ಕಿರುಕುಳ ನೀಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಎನ್ ಸಂಪಂಗಿ, ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮದ ಅಧ್ಯಕ್ಷ ಡಾ. ಬಿ.ಸಿ. ಮುದ್ದು ಗಂಗಾಧರ್, ಕರ್ನಾಟಕ ರಾಜ್ಯ ಬೀಜ ನಿಗಮ ಅಧ್ಯಕ್ಷ ಆಂಜಿನಪ್ಪ, ಶಾಸಕರುಗಳಾದ ಎಸ್.ಎನ್.ಸುಬ್ಬಾರೆಡ್ಡಿ, ಬಿ.ಎನ್. ರವಿಕುಮಾರ್, ಕೆ. ಹೆಚ್. ಪುಟ್ಟಸ್ವಾಮಿಗೌಡ, ಪ್ರದೀಪ್ ಈಶ್ವರ್, ಚಿಕ್ಕಬಳ್ಳಾಪುರ ನಗರಾಭಿ ವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ಎನ್. ಕೇಶವರೆಡ್ಡಿ, ಜಿಲ್ಲಾ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎನ್. ರಮೇಶ್, ಜಿಲ್ಲಾಧಿಕಾರಿ ಜಿ.ಪ್ರಭು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ವೈ.ನವೀನ್ ಭಟ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಲ್ ಚೌಕ್ಸೆ, ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಗಿರೀಶ್, ಅಪರ ಜಿಲ್ಲಾಧಿಕಾರಿ ಡಾ.ಎನ್.ಭಾಸ್ಕರ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.