ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

11th Kannada Sahitya Sammelana: ನ.19ರಿಂದ ಚಿಂತಾಮಣಿಯಲ್ಲಿ 11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ: ಗೊಲ್ಲಹಳ್ಳಿ ಶಿವಪ್ರಸಾದ್ ಸಮ್ಮೇಳನಾಧ್ಯಕ್ಷ

ಚಿಂತಾಮಣಿಯ ನೂತನ ಅಂಬೇಡ್ಕರ್ ಭವನದಲ್ಲಿ ನಾಳೆಯಿಂದ ಎರಡು ದಿನಗಳ ಕಾಲ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಸಾಹಿತಿ ಗೊಲ್ಲಹಳ್ಳಿ ಶಿವಪ್ರಸಾದ್ ಅವರನ್ನು ಆಯ್ಕೆ ಮಾಡಲಾಗಿದ್ದು ವಿಜೃಂಭಣೆಯಿಂದ ನುಡಿಹಬ್ಬ ಆಯೋಜಿಸಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳ ಲಾಗಿದೆ.

ನ.19ರಿಂದ ಚಿಂತಾಮಣಿಯಲ್ಲಿ 11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ

ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಕಸಾಪ ಜಿಲ್ಲಾಧ್ಯಕ್ಷ ಕೋಡಿರಂಗಪ್ಪ ಮಾತನಾಡಿದರು. -

Profile
Ashok Nayak Nov 18, 2026 11:36 PM

ಚಿಕ್ಕಬಳ್ಳಾಪುರ: ಜಿಲ್ಲೆಯ ಕನ್ನಡ ಸಾಹಿತ್ಯಾಸಕ್ತರು, ಕನ್ನಡಾಭಿಮಾನಿಗಳು ಹಾಗೂ ಸಾರ್ವಜನಿಕರು ಯಾವುದೇ ಭಿನ್ನಾಭಿಪ್ರಾಯಗಳಿಗೆ ಅವಕಾಶ ನೀಡದೆ, ಚಿಂತಾಮಣಿಯಲ್ಲಿ ನಡೆಯಲಿರುವ 11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ(Kannada Sahitya Sammelana)ದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ನುಡಿಜಾತ್ರೆಯನ್ನು ಯಶಸ್ವಿಗೊಳಿಸಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಡಾ. ಕೊಡಿರಂಗಪ್ಪ ಮನವಿ ಮಾಡಿದರು.

ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚಿಂತಾಮಣಿಯ ನೂತನ ಅಂಬೇಡ್ಕರ್ ಭವನದಲ್ಲಿ ನ.19ರಿಂದ ಎರಡು ದಿನಗಳ ಕಾಲ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಸಾಹಿತಿ ಗೊಲ್ಲಹಳ್ಳಿ ಶಿವಪ್ರಸಾದ್ ಅವರನ್ನು ಆಯ್ಕೆ ಮಾಡ ಲಾಗಿದ್ದು ವಿಜೃಂಭಣೆಯಿಂದ ನುಡಿಹಬ್ಬ ಆಯೋಜಿಸಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳ ಲಾಗಿದೆ.

ಆಹ್ವಾನ ಪತ್ರಿಕೆ ಮುದ್ರಣ ವಿಳಂಬವಾದ ಕಾರಣ ಜಿಲ್ಲೆಯ ಎಲ್ಲ ಸಾಹಿತ್ಯ ಪರಿಷತ್ ಸದಸ್ಯರನ್ನು ಖುದ್ದಾಗಿ ಭೇಟಿ ಮಾಡಿ ಆಹ್ವಾನಿಸಲು ಸಾಧ್ಯವಾಗಿಲ್ಲ. ಹೀಗಾಗಿ ಮಾಧ್ಯಮಗಳ ಮೂಲಕ ಜಿಲ್ಲೆಯ ಎಲ್ಲರಿಗೂ ಆಹ್ವಾನ ನೀಡುತ್ತಿದ್ದೇವೆ. ಇದನ್ನೇ ಆಹ್ವಾನವೆಂದು ಭಾವಿಸಿ ಕಾರ್ಯಕ್ರಮ ಯಶಸ್ವಿ ಗೊಳಿಸಲು ಕೈಜೋಡಿಸಿ ಎಂದರು.

ಇದನ್ನೂ ಓದಿ: Chinthamani News: ಕಾಸಾಪ ಏಕಪಕ್ಷೀಯ ನಿರ್ಧಾರಕ್ಕೆ ಆಕ್ರೋಶ; ಹೋರಾಟಗಾರರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಸಮ್ಮೇಳನ ಆಯೋಜನೆ ಆರೋಪ

ಜಿಲ್ಲೆಯಲ್ಲಿ ಸುಮಾರು ಆರು ಸಾವಿರ ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯರಿದ್ದು, ಎಲ್ಲರಿಗೂ ಆಹ್ವಾನ ಪತ್ರಿಕೆ ತಲುಪಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಈ ಮನವಿ ಮಾಡಲಾಗಿದೆ. ಸಾಹಿತ್ಯ ಪರಿಷತ್ತಿನ ಸದಸ್ಯರು, ಕನ್ನಡ ಪ್ರೇಮಿಗಳು ಹಾಗೂ ಸಾಹಿತ್ಯಾಸಕ್ತರು ಕುಟುಂಬ ಸಮೇತರಾಗಿ ಆಗಮಿಸಿ ಸಮ್ಮೇಳನದ ಎಲ್ಲ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಬೇಕು ಎಂದು ಕೋರಿದರು.

ಗುರುವಾರ ಬೆಳಿಗ್ಗೆ ಕನ್ನಡ ಧ್ವಜಾರೋಹಣದೊಂದಿಗೆ ಸಮ್ಮೇಳನಕ್ಕೆ ವಿದ್ಯುಕ್ತ ಚಾಲನೆ ದೊರೆಯ ಲಿದೆ. ಸಮ್ಮೇಳನಾಧ್ಯಕ್ಷ ಗೊಲ್ಲಹಳ್ಳಿ ಶಿವಪ್ರಸಾದ್ ಅವರ ಜಾನಪದ ಕಲೆಗಳ ವೈಭವದೊಂದಿಗೆ ಅವರನ್ನು ವೇದಿಕೆಗೆ ಮೆರವಣಿಗೆಯಲ್ಲಿ ಕರೆತರಲಾಗುವುದು. ಜಿಲ್ಲಾ ಉಸ್ತುವಾರಿ ಸಚಿವರು, ಸ್ಥಳೀಯ ಶಾಸಕರು, ಜಿಲ್ಲಾಧಿಕಾರಿಗಳು, ಜಿಲ್ಲೆಯ ಕಲಾವಿದರು, ಅಧಿಕಾರಿಗಳು ಹಾಗೂ ಕನ್ನಡಪರ ಸಂಘಟನೆಗಳ ಮುಖಂಡರು ಸೇರಿದಂತೆ ನೂರಾರು ಮಂದಿ ಭಾಗವಹಿಸುವ ನಿರೀಕ್ಷೆಯಿದೆ ಎಂದು ತಿಳಿಸಿದರು.

ಸಮ್ಮೇಳನದ ಅಂಗವಾಗಿ ಕವಿಗೋಷ್ಠಿ, ಕೃಷಿ ಸಂಬಂಧಿತ ಸಂವಾದ, ಜಿಲ್ಲೆಯ ಸಂಗೀತಗಾರರು ಹಾಗೂ ಜಾನಪದ ಮತ್ತು ಪ್ರಗತಿಪರ ಕಲಾವಿದರಿಂದ ಗೀತಗಾಯನ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಜಿಲ್ಲೆಯ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನ, ರಾಜ್ಯ ಮಟ್ಟದ ಕಲಾವಿದರಿಂದ ಸಂಗೀತೋತ್ಸವ ಹಾಗೂ ಸಂಜೆ ಸಮಾರೋಪ ಸಮಾರಂಭ ನಡೆಯಲಿದೆ.

ಇದರ ಜತೆಗೆ ಪುಸ್ತಕ ಮಳಿಗೆಗಳು, ಮಹಿಳಾ ಸ್ವಸಹಾಯ ಸಂಘಗಳು ತಯಾರಿಸಿದ ಕರಕುಶಲ ವಸ್ತುಗಳ ಪ್ರದರ್ಶನ, ಪತ್ರಿಕೆಗಳ ಪ್ರದರ್ಶನ ಹಾಗೂ ಕನ್ನಡ ನಾಡು-ನುಡಿಗಾಗಿ ಜೀವನ ಸವೆಸಿದ ಮಹನೀಯರ ಭಾವಚಿತ್ರಗಳ ಪ್ರದರ್ಶನವೂ ಇರಲಿದೆ. ಸಮ್ಮೇಳನದ ಎಲ್ಲ ಕಾರ್ಯಕ್ರಮಗಳಲ್ಲಿ ಸಾಹಿತ್ಯಾಸಕ್ತರು ಭಾಗವಹಿಸಬೇಕು. ಆಗಮಿಸುವವರಿಗೆ ಊಟದ ವ್ಯವಸ್ಥೆ ಮಾಡಲಾಗಿದೆ. ಸರ್ಕಾರಿ ನೌಕರರಿಗೆ ಒಒಡಿ ಸೌಲಭ್ಯವಿದ್ದು, ಅದನ್ನು ಸದುಪಯೋಗಪಡಿಸಿಕೊಂಡು ಸಮ್ಮೇಳನದಲ್ಲಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪದಾಧಿಕಾರಿಗಳಾದ ಅಮೃತ್ ಕುಮಾರ್, ಟಿ.ವಿ. ಚಂದ್ರಶೇಖರ್ ಪಟೇಲ್, ನಾರಾಯಣಸ್ವಾಮಿ, ತಾಲೂಕು ಅಧ್ಯಕ್ಷ ಯಲುವಳ್ಳಿ ಸೋಣ್ಣೇಗೌಡ, ಕನ್ನಡ ಸೇನೆ ಜಿಲ್ಲಾಧ್ಯಕ್ಷ ರವಿಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.