ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

'Yuvanidhi' Scheme: ಯುವನಿಧಿ ಯೋಜನೆಯಡಿ 6,976 ಯುವಜನರ ನೋಂದಣಿ: 17.84 ಕೋಟಿ ಪ್ರೋತ್ಸಾಹಧನ ವಿತರಣೆ

ಗೌರಿಬಿದನೂರು ತಾಲ್ಲೂಕಿನ ಕುಡುಮಲಕುಂಟೆ ಜಿಟಿಟಿಸಿ ಕಾಲೇಜಿನಲ್ಲಿ ಗುರುವಾರ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ತಾಲ್ಲೂಕು ಪಂಚಾಯಿತಿ, ಜಿಟಿಟಿಸಿ ಕಾಲೇಜು ಹಾಗೂ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಹಯೋಗದಲ್ಲಿ ಆಯೋಜಿಸಿದ್ದ ಯುವನಿಧಿ ಯೋಜನೆಯ ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಚಿಕ್ಕಬಳ್ಳಾಪುರ: ನಿರುದ್ಯೋಗಿ ಯುವಜನರಿಗೆ ಉದ್ಯೋಗ ದೊರೆಯುವವರೆಗೆ ಆರ್ಥಿಕ ನೆರವು ಒದಗಿಸುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯುವನಿಧಿ(Yuvanidhi) ಯೋಜನೆಯಡಿ ಜಿಲ್ಲೆಯಲ್ಲಿ ಈವರೆಗೆ 6,976 ಯುವಜನರು ನೋಂದಾಯಿಸಿಕೊಂಡಿದ್ದು, ಒಟ್ಟು 17.84 ಕೋಟಿ ಪ್ರೋತ್ಸಾಹಧನ ವಿತರಿಸಲಾಗಿದೆ. ಯುವನಿಧಿ ಯೋಜನೆಯ ಅನುಷ್ಠಾನದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆ ರಾಜ್ಯದಲ್ಲಿಯೇ ಪ್ರಥಮ ಸ್ಥಾನ ಕಾಯ್ದುಕೊಂಡಿದೆ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಯಲುವಳ್ಳಿ ಎನ್. ರಮೇಶ್ ತಿಳಿಸಿದರು.

ಗೌರಿಬಿದನೂರು ತಾಲ್ಲೂಕಿನ ಕುಡುಮಲಕುಂಟೆ ಜಿಟಿಟಿಸಿ ಕಾಲೇಜಿನಲ್ಲಿ ಗುರುವಾರ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ತಾಲ್ಲೂಕು ಪಂಚಾಯಿತಿ, ಜಿಟಿಟಿಸಿ ಕಾಲೇಜು ಹಾಗೂ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಹಯೋಗದಲ್ಲಿ ಆಯೋಜಿಸಿದ್ದ ಯುವನಿಧಿ ಯೋಜನೆಯ ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಇದನ್ನೂ ಓದಿ: Chikkaballapur News: ನ.12ರಂದು ರೈತರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ

ಜಿಲ್ಲೆಯಲ್ಲಿ ಯುವನಿಧಿ ಯೋಜನೆಯಡಿ ನೋಂದಾಯಿಸಿಕೊಂಡಿರುವ 6,976 ಫಲಾನುಭವಿಗಳ ಪೈಕಿ 6,817 ಪದವೀಧರರು ಹಾಗೂ 159 ಡಿಪ್ಲೊಮಾ ಅಭ್ಯರ್ಥಿಗಳಿದ್ದಾರೆ. ಇವರಲ್ಲಿ 3,727 ಪುರುಷರು ಮತ್ತು 3,249 ಮಹಿಳೆಯರು ನೋಂದಾಯಿಸಿಕೊಂಡಿದ್ದಾರೆ. ನಿರುದ್ಯೋಗಿ ಯುವ ಜನರಿಗೆ ಆರ್ಥಿಕ ಭದ್ರತೆ ಒದಗಿಸುವ ಜತೆಗೆ ಉದ್ಯೋಗಾವಕಾಶಗಳ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಜಿಲ್ಲೆಯ ವಿವಿಧ ಶಿಕ್ಷಣ ಸಂಸ್ಥೆಗಳಲ್ಲಿ ನಿರಂತರವಾಗಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದರು.

17.84 ಕೋಟಿ ಪ್ರೋತ್ಸಾಹಧನ ವಿತರಣೆ: ಯುವನಿಧಿ ಯೋಜನೆಯಡಿ 2023-24ರಿಂದ 2026-27ನೇ ಸಾಲಿನವರೆಗೆ ಒಟ್ಟು 17,84,35,500 ಪ್ರೋತ್ಸಾಹಧನವನ್ನು ಪದವೀಧರರು ಮತ್ತು ಡಿಪ್ಲೊಮಾ ಅಭ್ಯರ್ಥಿಗಳಿಗೆ ವಿತರಿಸಲಾಗಿದೆ. 2023-24ನೇ ಸಾಲಿನಲ್ಲಿ 23.59 ಲಕ್ಷ, 2024-25ರಲ್ಲಿ 5.67 ಕೋಟಿ, 2025-26ರಲ್ಲಿ 9.26 ಕೋಟಿ ಹಾಗೂ 2026-27ನೇ ಸಾಲಿನಲ್ಲಿ 1.98 ಕೋಟಿ ಪಾವತಿಸಲಾಗಿದೆ ಎಂದು ಮಾಹಿತಿ ನೀಡಿದರು.

1556300 chi

ಯುವನಿಧಿ ಯೋಜನೆಯ ಅರ್ಹತೆ, ನೋಂದಣಿ ವಿಧಾನ ಹಾಗೂ ಸೌಲಭ್ಯಗಳ ಕುರಿತು ಯುವ ಜನರಲ್ಲಿ ಅರಿವು ಮೂಡಿಸಲು ಮಾರ್ಚ್ 24ರಂದು ಚಿಕ್ಕಬಳ್ಳಾಪುರದ ಕನ್ನಡ ಭವನದಲ್ಲಿ ಯುವಶಕ್ತಿ ಸಮಾವೇಶ ನಡೆಸಲಾಗಿದೆ. ಮೇ 16ರಂದು ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಬಾಗೇಪಲ್ಲಿ, ಮಂಚೇನಹಳ್ಳಿ, ಶಿಡ್ಲಘಟ್ಟ ಮತ್ತು ಗೌರಿಬಿದನೂರಿನ ವಿವಿಧ ಶಿಕ್ಷಣ ಸಂಸ್ಥೆಗಳಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ನವೆಂಬರ್ 7ರಂದು ಮಂಚೇನಹಳ್ಳಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿಯೂ ಕಾರ್ಯಕ್ರಮ ನಡೆಸಲಾಗಿದೆ ಎಂದರು.

ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಜಿಲ್ಲೆಯಲ್ಲಿ ಪರಿಣಾಮಕಾರಿ ಕ್ರಮ ಕೈಗೊಳ್ಳಲಾಗಿದೆ. ಅನಿವಾರ್ಯ ಕಾರಣಗಳಿಂದ ಯಾರಾದರೂ ಯೋಜನೆಗಳ ಸೌಲಭ್ಯದಿಂದ ವಂಚಿತರಾಗಿದ್ದರೆ ಸಂಬಂಧಪಟ್ಟ ಪ್ರಾಧಿಕಾರಗಳನ್ನು ಸಂಪರ್ಕಿಸಿ ಸೌಲಭ್ಯ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.

ಜನವರಿಯಿಂದ ಇಂದಿರಾ ಕಿಟ್ ವಿತರಣೆ: ಅನ್ನಭಾಗ್ಯ ಯೋಜನೆ(Annabhagya Scheme) ಯಡಿ ಪ್ರಸ್ತುತ ವಿತರಿಸ ಲಾಗುತ್ತಿರುವ 10 ಕೆ.ಜಿ. ಅಕ್ಕಿಯ ಬದಲಾಗಿ ಅಕ್ಕಿಯೊಂದಿಗೆ ಬೇಳೆ, ಅಡುಗೆ ಎಣ್ಣೆ, ಉಪ್ಪು ಸೇರಿದಂತೆ ವಿವಿಧ ಅಗತ್ಯ ದಿನಸಿ ಪದಾರ್ಥಗಳನ್ನು ಒಳಗೊಂಡ ಒಟ್ಟು 10 ಕೆ.ಜಿ. ತೂಕದ ದಿನಸಿ ಕಿಟ್ ವಿತರಿಸಲು ಸರ್ಕಾರ ಉದ್ದೇಶಿಸಿದೆ. 'ಇಂದಿರಾ ಕಿಟ್' ಎಂದು ಹೆಸರಿಸಲಾಗಿರುವ ಈ ಕಿಟ್‌ಗಳ ವಿತರಣೆಯನ್ನು ಮುಂದಿನ ಜನವರಿಯಿಂದ ಆರಂಭಿಸಲು ಯೋಜಿಸಲಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ತಾಲ್ಲೂಕು ಗ್ಯಾರಂಟಿ ಯೋಜನೆ(Guarantee Scheme)ಗಳ ಅನುಷ್ಠಾನ ಸಮಿತಿ ಅಧ್ಯಕ್ಷ ರಂಗರಾಜು, ಜಿಲ್ಲಾ ಉದ್ಯೋಗಾಧಿಕಾರಿ ಎಂ. ಪ್ರಸಾದ್, ಕುಡುಮಲಕುಂಟೆ ಜಿಟಿಟಿಸಿ ಕಾಲೇಜಿನ ಪ್ರಾಂಶುಪಾಲ ಹರೀಶ್ ಕುಮಾರ್, ಸಮಿತಿ ಸದಸ್ಯರಾದ ಸಂದೀಪ್ ಕುಮಾರ್, ವೀಣಾ, ಪುಟ್ಟಸ್ವಾಮಿ, ಉಮಾ ಶಂಕರ್ ಸೇರಿದಂತೆ ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.