Shidlaghatta News: ಕಾಂಗ್ರೆಸ್‌ನಲ್ಲಿ ಗುಂಪುಗಾರಿಕೆ ಆರೋಪ: ರಾಜೀವ್ ಗೌಡ ವಿರುದ್ಧ ಯುವ ಮುಖಂಡರ ಅಸಮಾಧಾನ
ಮಹಿಳೆಯೊಬ್ಬರ ವಿರುದ್ಧ ಅವಾಚ್ಯ ಪದಗಳನ್ನು ಬಳಸಿ ನಿಂದಿಸಿದ ಆರೋಪದ ಹಿನ್ನೆಲೆಯಲ್ಲಿ ಪಕ್ಷದಿಂದ ಅಮಾನತುಗೊಂಡಿದ್ದರೂ, ಕಾಂಗ್ರೆಸ್ ಪಕ್ಷದ ಹೆಸರನ್ನು ಬಳಸಿಕೊಂಡು ಗುಂಪುಗಾರಿಕೆ ನಡೆಸುತ್ತಿರುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಪಕ್ಷದ ಶಿಸ್ತು ಮತ್ತು ಸಂಘಟನೆ ಯನ್ನು ಕಾಪಾಡುವುದು ಪ್ರತಿಯೊಬ್ಬ ಮುಖಂಡನ ಜವಾಬ್ದಾರಿಯಾಗಿದ್ದು, ವೈಯಕ್ತಿಕ ಹಿತಾಸಕ್ತಿಗಿಂತ ಪಕ್ಷದ ಹಿತಕ್ಕೆ ಆದ್ಯತೆ ನೀಡಬೇಕು ಎಂದರು.
-
ಶಿಡ್ಲಘಟ್ಟ: ಕಾಂಗ್ರೆಸ್(Congress) ಪಕ್ಷದಲ್ಲಿ ಆಂತರಿಕ ಭಿನ್ನಾಭಿಪ್ರಾಯ ಹಾಗೂ ಗುಂಪುಗಾರಿಕೆ ಯಿಂದ ಪಕ್ಷದ ಸಂಘಟನೆಗೆ ಹಿನ್ನಡೆಯಾಗುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳ ಹಿನ್ನೆಲೆಯಲ್ಲಿ ಪಕ್ಷದ ನಿಷ್ಠಾವಂತ ಕಾರ್ಯಕರ್ತರಿಗೆ ಸೂಕ್ತ ಗೌರವ ನೀಡಿ ಸಂಘಟನೆಯನ್ನು ಬಲಪಡಿಸಲು ವರಿಷ್ಠರು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯದರ್ಶಿ ಮಧು ಗೌಡ ಒತ್ತಾಯಿಸಿದರು.
ನಗರದ ಹಂಡಿಗನಾಳ ಗ್ರಾಮದ ಮಾಜಿ ಸಚಿವ ವಿ. ಮುನಿಯಪ್ಪ(V Muniyappa) ಅವರ ಸ್ವಗೃಹ ದಲ್ಲಿ ಯುವ ಕಾಂಗ್ರೆಸ್ ಮುಖಂಡರು ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜೀವ್ ಗೌಡ ಅವರ ನಡೆಗಳಿಂದ ಪಕ್ಷಕ್ಕೆ ನಿರಂತರವಾಗಿ ಮುಜುಗರ ಉಂಟಾಗುತ್ತಿದೆ ಎಂದು ಆರೋಪಿಸಿದರು.
ಮಹಿಳೆಯೊಬ್ಬರ ವಿರುದ್ಧ ಅವಾಚ್ಯ ಪದಗಳನ್ನು ಬಳಸಿ ನಿಂದಿಸಿದ ಆರೋಪದ ಹಿನ್ನೆಲೆಯಲ್ಲಿ ಪಕ್ಷದಿಂದ ಅಮಾನತುಗೊಂಡಿದ್ದರೂ, ಕಾಂಗ್ರೆಸ್ ಪಕ್ಷದ ಹೆಸರನ್ನು ಬಳಸಿಕೊಂಡು ಗುಂಪುಗಾರಿಕೆ ನಡೆಸುತ್ತಿರುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಪಕ್ಷದ ಶಿಸ್ತು ಮತ್ತು ಸಂಘಟನೆಯನ್ನು ಕಾಪಾಡುವುದು ಪ್ರತಿಯೊಬ್ಬ ಮುಖಂಡನ ಜವಾಬ್ದಾರಿಯಾಗಿದ್ದು, ವೈಯಕ್ತಿಕ ಹಿತಾಸಕ್ತಿಗಿಂತ ಪಕ್ಷದ ಹಿತಕ್ಕೆ ಆದ್ಯತೆ ನೀಡಬೇಕು ಎಂದರು.
ಇದನ್ನೂ ಓದಿ: Shidlaghatta News: ಮಹನೀಯರ ಆದರ್ಶಗಳನ್ನು ಮುಂದಿನ ಪೀಳಿಗೆಗೆ ತಿಳಿಸುವುದು ಕರ್ತವ್ಯ: ಶ್ರೀಕಾಂತ್
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ಕುರಿತು ಪಕ್ಷದ ವರಿಷ್ಠರ ಗಮನಕ್ಕೆ ತರಲಾಗಿದೆ. ಪಕ್ಷಕ್ಕಾಗಿ ನಿಷ್ಠೆಯಿಂದ ದುಡಿಯುವ ಕಾರ್ಯಕರ್ತರನ್ನು ಕಡೆಗಣಿಸುವ ಪ್ರವೃತ್ತಿಗೆ ಕಡಿವಾಣ ಹಾಕಬೇಕು. ಸ್ಥಳೀಯ ಮಟ್ಟದಲ್ಲಿ ಕಾರ್ಯಕರ್ತರ ನಡುವೆ ಒಗ್ಗಟ್ಟು ಮೂಡಿಸಿ, ಸಂಘಟನೆಯನ್ನು ಬಲಪಡಿ ಸುವ ನಿಟ್ಟಿನಲ್ಲಿ ವರಿಷ್ಠರು ಸೂಕ್ತ ನಿರ್ಧಾರ ಕೈಗೊಳ್ಳಬೇಕು. ಇಲ್ಲವಾದರೆ ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಪಕ್ಷದ ಸಂಘಟನೆಗೆ ತೊಂದರೆಯಾಗುವ ಸಾಧ್ಯತೆಯಿದೆ ಎಂದು ಎಚ್ಚರಿಸಿದರು.
ಕೆಎಂಎಫ್(KMF) ನಿರ್ದೇಶಕರ ಚುನಾವಣೆಗೆ ಸಂಬಂಧಿಸಿದಂತೆ ಮಾತನಾಡಿದ ಅವರು, ಶ್ರೀನಿವಾಸ್ ರಾಮಯ್ಯ ಅವರನ್ನು ತಾವೇ ಸೋಲಿಸಿದ್ದೇವೆ ಎಂದು ಕೆಲವು ಕಾಂಗ್ರೆಸ್ ಮುಖಂಡರು ಹೇಳುತ್ತಿರು ವುದು ಎಷ್ಟು ಸಮಂಜಸ ಎಂದು ಪ್ರಶ್ನಿಸಿದರು. ಕಾಂಗ್ರೆಸ್ ಭವನ ನಿರ್ಮಾಣಕ್ಕೆ ಜಾಗವನ್ನು ದೇಣಿಗೆಯಾಗಿ ನೀಡಿದ ಕುಟುಂಬದ ಸದಸ್ಯರನ್ನು ಸೋಲಿಸಲು ಪಕ್ಷ ವಿರೋಧಿ ಚಟುವಟಿಕೆ ನಡೆಸಲಾಗಿದೆ ಎಂಬ ಆರೋಪಗಳ ಬಗ್ಗೆಯೂ ಪಕ್ಷದ ವರಿಷ್ಠರು ಗಂಭೀರವಾಗಿ ಗಮನಹರಿಸಬೇಕು ಎಂದು ಒತ್ತಾಯಿಸಿದರು.
ಯುವ ಕಾಂಗ್ರೆಸ್ ಮುಖಂಡ ಸುನಿಲ್ ಮಾತನಾಡಿ, ಕಾಂಗ್ರೆಸ್ ಪಕ್ಷದಲ್ಲಿ ನಿಷ್ಠೆಯಿಂದ ದುಡಿಯುವ ಕಾರ್ಯಕರ್ತರಿಗೆ ಸೂಕ್ತ ಗೌರವ ಹಾಗೂ ಮನ್ನಣೆ ದೊರೆಯಬೇಕು. ವೈಯಕ್ತಿಕ ರಾಜಕೀಯ ಲಾಭಕ್ಕಾಗಿ ಪಕ್ಷದ ಹೆಸರನ್ನು ಬಳಸಿಕೊಂಡು ಗುಂಪುಗಾರಿಕೆ ನಡೆಸುವುದು ಹಾಗೂ ಸಂಘಟನೆಗೆ ಧಕ್ಕೆ ತರುವಂತಹ ಚಟುವಟಿಕೆಗಳಲ್ಲಿ ತೊಡಗುವುದು ಸರಿಯಲ್ಲ ಎಂದು ಹೇಳಿದರು.
ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಕಾಂಗ್ರೆಸ್ ಉತ್ತಮ ಫಲಿತಾಂಶ ಪಡೆಯ ಬೇಕಾದರೆ ಮುಖಂಡರು ಮತ್ತು ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡಬೇಕು. ಸ್ಥಳೀಯ ಮಟ್ಟದಲ್ಲಿ ಪಕ್ಷದ ಕಾರ್ಯಕರ್ತರು ಎದುರಿಸುತ್ತಿರುವ ಸಮಸ್ಯೆಗಳನ್ನು ವರಿಷ್ಠರು ಗಂಭೀರವಾಗಿ ಪರಿಗಣಿಸಬೇಕು. ಕಾರ್ಯಕರ್ತರ ಅಭಿಪ್ರಾಯಗಳಿಗೆ ಮನ್ನಣೆ ನೀಡಿ, ಪಕ್ಷದಲ್ಲಿ ಒಗ್ಗಟ್ಟು ಮೂಡಿಸುವ ಮೂಲಕ ಸಂಘಟನೆಯನ್ನು ಮತ್ತಷ್ಟು ಬಲಪಡಿಸಬೇಕು ಎಂದು ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಭಕ್ತರಹಳ್ಳಿ ಮಧು, ಚೌಡಸಂದ್ರ ಮಹೇಶ್, ದೊಡ್ಡದಾಸೇನಹಳ್ಳಿ ಆಂಜನೇಯ ರೆಡ್ಡಿ, ಗೆಜ್ಜೆಗನಹಳ್ಳಿ ಅಭಿಲಾಷ್, ಉಲ್ಲೂರುಪೇಟೆ ಮದನ್, ಪ್ರದೀಪ್, ಅಬೀದ್, ಅಂಬರೀಶ್, ನಿಖಿಲ್, ರಂಜಿತ್, ವರದರಾಜು ಸೇರಿದಂತೆ ಯುವ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.
![]()
ಪುಟ್ಟು ಅಂಜಿನಪ್ಪ ಅವರು ಪಕ್ಷದ ವರಿಷ್ಠರ ಸೂಚನೆಯಂತೆ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ. ಆದರೆ, ವಿ. ಮುನಿಯಪ್ಪ ಮತ್ತು ಶಶಿಧರ್ ಮುನಿಯಪ್ಪ ಅವರನ್ನು ತಾವು ಪಕ್ಷಕ್ಕೆ ಸೇರ್ಪಡೆ ಮಾಡಿಸಿಕೊಂಡಿಲ್ಲ ಎಂದು ಯುವ ಕಾಂಗ್ರೆಸ್ ಉಪಾಧ್ಯಕ್ಷ ರಾಕೇಶ್ ಸ್ಪಷ್ಟಪಡಿಸಿದರು.ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ಪಕ್ಷದ ಮುಖಂಡರು ಒಗ್ಗಟ್ಟಿ ನಿಂದ ಕಾರ್ಯನಿರ್ವಹಿಸಬೇಕು. ಪಕ್ಷಕ್ಕಾಗಿ ನಿಷ್ಠೆಯಿಂದ ದುಡಿಯುವ ಕಾರ್ಯಕರ್ತರಿಗೆ ಯಾವುದೇ ಅನ್ಯಾಯವಾಗದಂತೆ ವರಿಷ್ಠರು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.
ರಾಕೇಶ್, ಉಪಾಧ್ಯಕ್ಷರು, ಶಿಡ್ಲಘಟ್ಟ ಬ್ಲಾಕ್ ಯುವ ಕಾಂಗ್ರೆಸ್