ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Tahsildar makes surprise visit: ಅಲ್ಲಿಪುರ ಸರ್ಕಾರಿ ಆರೋಗ್ಯ ಕೇಂದ್ರದಲ್ಲಿ ಅವ್ಯವಸ್ಥೆ ಆರೋಪ: ತಹಶೀಲ್ದಾರ್ ಅನಿರೀಕ್ಷಿತ ಭೇಟಿ; ವೈದ್ಯರು, ಸಿಬ್ಬಂದಿ ವಿರುದ್ಧ ಸಾರ್ವಜನಿಕರ ದೂರು

ತುರ್ತು ಸಂದರ್ಭದಲ್ಲಿ ರೋಗಿಗಳನ್ನು ಬೇರೆ ಆಸ್ಪತ್ರೆಗಳಿಗೆ ಕಳುಹಿಸಲಾಗುತ್ತಿದೆ. ಆರೋಗ್ಯ ಕೇಂದ್ರ 24 ಗಂಟೆ ಕಾರ್ಯನಿರ್ವಹಿಸಬೇಕೆಂಬ ನಿಯಮವಿದ್ದರೂ ವೈದ್ಯಾಧಿಕಾರಿಗಳು ಬೆಳಗ್ಗೆ 9ರಿಂದ ಸಂಜೆ 4.30ರವರೆಗೆ ಮಾತ್ರ ಕರ್ತವ್ಯ ನಿರ್ವಹಿಸುತ್ತಿದ್ದು, ನಂತರ ಆಸ್ಪತ್ರೆಗೆ ಬರುವ ರೋಗಿಗಳಿಗೆ ನರ್ಸ್‌ಗಳೇ ಚಿಕಿತ್ಸೆ ನೀಡುವ ಪರಿಸ್ಥಿತಿ ಇದೆ ಎಂದು ಆರೋಪಿಸಿದರು.

ಗೌರಿಬಿದನೂರು: ತಾಲೂಕಿನ ತೊಂಡೇಬಾವಿ ಹೋಬಳಿಯ ಅಲ್ಲಿಪುರ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತಹಶೀಲ್ದಾರ್ ಕೆ.ಎಂ.ಅರವಿಂದ್ ಅವರು ಅನಿರೀಕ್ಷಿತ ಭೇಟಿ ನೀಡಿ ಆಸ್ಪತ್ರೆಯಲ್ಲಿನ ವ್ಯವಸ್ಥೆ ಹಾಗೂ ಸಾರ್ವಜನಿಕರಿಗೆ ದೊರೆಯುತ್ತಿರುವ ಆರೋಗ್ಯ ಸೇವೆಗಳ ಕುರಿತು ಪರಿಶೀಲನೆ ನಡೆಸಿದರು.

ತಹಶೀಲ್ದಾರ್ ಭೇಟಿ ವೇಳೆ ಸ್ಥಳೀಯರು ಆರೋಗ್ಯ ಕೇಂದ್ರದ ವೈದ್ಯರು ಹಾಗೂ ಸಿಬ್ಬಂದಿ ಸಮರ್ಪಕ ವಾಗಿ ಕರ್ತವ್ಯ ನಿರ್ವಹಿಸುತ್ತಿಲ್ಲ ಎಂದು ದೂರಿದರು. ತುರ್ತು ಸಂದರ್ಭದಲ್ಲಿ ರೋಗಿಗಳನ್ನು ಬೇರೆ ಆಸ್ಪತ್ರೆಗಳಿಗೆ ಕಳುಹಿಸಲಾಗುತ್ತಿದೆ. ಆರೋಗ್ಯ ಕೇಂದ್ರ 24 ಗಂಟೆ ಕಾರ್ಯನಿರ್ವಹಿಸಬೇಕೆಂಬ ನಿಯಮವಿದ್ದರೂ ವೈದ್ಯಾಧಿಕಾರಿಗಳು ಬೆಳಗ್ಗೆ 9ರಿಂದ ಸಂಜೆ 4.30ರವರೆಗೆ ಮಾತ್ರ ಕರ್ತವ್ಯ ನಿರ್ವಹಿಸುತ್ತಿದ್ದು, ನಂತರ ಆಸ್ಪತ್ರೆಗೆ ಬರುವ ರೋಗಿಗಳಿಗೆ ನರ್ಸ್‌ಗಳೇ ಚಿಕಿತ್ಸೆ ನೀಡುವ ಪರಿಸ್ಥಿತಿ ಇದೆ ಎಂದು ಆರೋಪಿಸಿದರು.

ಇದನ್ನೂ ಓದಿ:Gauribidanur News: ಸ್ವಯಂ ತೆರವುಗೊಳಿಸದಿದ್ದರೆ ಮುನ್ಸೂಚನೆ ಇಲ್ಲದೆ ನಗರಸಭೆಯಿಂದ ಕಾರ್ಯಾಚರಣೆ: ಪೌರಾಯುಕ್ತ ರಮೇಶ್

ಹೆರಿಗೆ ಸಂದರ್ಭದಲ್ಲಿಯೂ ಸೂಕ್ತ ವೈದ್ಯಕೀಯ ಸೇವೆ ದೊರೆಯುತ್ತಿಲ್ಲ ಹಾಗೂ ಹಣ ವಸೂಲಿ ಮಾಡಲಾಗುತ್ತಿದೆ ಎಂಬ ಆರೋಪವನ್ನು ಸಾರ್ವಜನಿಕರು ತಹಶೀಲ್ದಾರ್ ಗಮನಕ್ಕೆ ತಂದರು. ಅಗತ್ಯ ಔಷಧಿ ಹಾಗೂ ಮೂಲಸೌಕರ್ಯಗಳ ಕೊರತೆಯೂ ಇದೆ ಎಂದು ದೂರಿದರು.

ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಿದ ಬಳಿಕವೂ ಅಲ್ಲಿಪುರದಲ್ಲಿ ಮೂಲ ಸಮಸ್ಯೆಗಳು ಮುಂದುವರಿದಿದ್ದು, ಆರೋಗ್ಯ ಕೇಂದ್ರದ ಸೇವೆಗಳನ್ನು ಬಲಪಡಿಸಿ ರಾತ್ರಿ ವೇಳೆಯೂ ಸಮರ್ಪಕ ವೈದ್ಯಕೀಯ ಸೇವೆ ದೊರೆಯುವಂತೆ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದರು.

ಸಿಬ್ಬಂದಿ ಕೊರತೆ: ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ ಇದೆ. ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಯನ್ನೂ ನಿಯೋಜನೆ ಮೇರೆಗೆ ಬೇರೆಡೆಗೆ ಕಳುಹಿಸಲಾಗಿದೆ. ಕೆಲವು ಅಗತ್ಯ ಔಷಧಿಗಳ ಕೊರತೆಯಿದ್ದು, ಈ ಕುರಿತು ಜಿಲ್ಲಾ ಆರೋಗ್ಯಾಧಿಕಾರಿಗಳ ಗಮನಕ್ಕೆ ತರಲಾಗಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಹೇಮಾ ತಿಳಿಸಿದ್ದಾರೆ.