ಚಿಕ್ಕಬಳ್ಳಾಪುರ: ಬರ ಘೋಷಣೆ ಮಾಡಿರುವ ಸರ್ಕಾರವು ರೈತರ ಸಂಕಷ್ಟಕ್ಕೆ ಕೂಡಲೇ ಸ್ಪಂದಿಸಿ, ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಕನಿಷ್ಠ ₹10 ಕೋಟಿ ಬರ ಪರಿಹಾರ ಅನುದಾನ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿ ಚಿಕ್ಕಬಳ್ಳಾಪುರ ತಾಲ್ಲೂಕು ಪ್ರದೇಶ ಕೃಷಿಕ ಸಮಾಜದ ವತಿಯಿಂದ ತಹಶೀಲ್ದಾರ್ ಕಚೇರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಮಳೆ ಕೊರತೆಯಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಕೃಷಿ ಚಟುವಟಿಕೆಗಳಿಗೆ ಮಾಡಿದ ಖರ್ಚು ಸಹ ವಾಪಸ್ ಪಡೆಯಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ರೈತರ ಸಂಪೂರ್ಣ ಸಾಲ ಮನ್ನಾ ಮಾಡುವುದರ ಜೊತೆಗೆ, ಬರದಿಂದ ಉಂಟಾಗಿರುವ ನಷ್ಟಕ್ಕೆ ಸೂಕ್ತ ಪರಿಹಾರ ಒದಗಿಸಬೇಕು. ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ₹10 ಕೋಟಿ ಬರ ಅನುದಾನ ಬಿಡುಗಡೆ ಮಾಡಿ, ಸಂಕಷ್ಟದಲ್ಲಿರುವ ರೈತರಿಗೆ ತುರ್ತು ನೆರವು ನೀಡಬೇಕು ಎಂದು ಕೃಷಿಕ ಸಮಾಜ ಆಗ್ರಹಿಸಿತು.
ರಾಜ್ಯದ ಎಲ್ಲಾ ತಾಲ್ಲೂಕುಗಳ ತಹಶೀಲ್ದಾರರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸುವ ರಾಜ್ಯ ಮಟ್ಟದ ಒತ್ತಾಯದ ಭಾಗವಾಗಿ ಚಿಕ್ಕಬಳ್ಳಾಪುರದಲ್ಲಿಯೂ ಮನವಿ ಸಲ್ಲಿಸಲಾಯಿತು. ತಹಶೀ ಲ್ದಾರ್ ಅನುಪಸ್ಥಿತಿಯಲ್ಲಿ ಶಿರಸ್ತೇದಾರ್ ಮಲ್ಲಿಕಾ ಅವರು ಮನವಿ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ತಾಲ್ಲೂಕು ಕೃಷಿಕ ಸಮಾಜದ ಅಧ್ಯಕ್ಷ ಯಲುವಹಳ್ಳಿ ಸೊಣ್ಣೇಗೌಡ, ಜಿಲ್ಲಾ ನಿರ್ದೇಶಕ ಕೆ.ವಿ.ಚಂದ್ರಪ್ಪ, ಉಪಾಧ್ಯಕ್ಷ ವೆಂಕಟೇಶ್, ಖಜಾಂಚಿ ಆದಿನಾರಾಯಣಪ್ಪ, ನಿರ್ದೇಶಕ ರಾದ ರಾಮಾಂಜಿನಪ್ಪ, ವೆಂಕಟೇಶಪ್ಪ, ಅಶ್ವಥಪ್ಪ, ವೆಂಕಟರಾಮು, ಸುಜೇಶ್, ಸಿ.ಮುನಿಕೃಷ್ಣಪ್ಪ ಹಾಗೂ ಕೆ.ವಿ.ದೇವರಾಜು ಉಪಸ್ಥಿತರಿದ್ದರು.