ಚಿಕ್ಕಬಳ್ಳಾಪುರ: ಜೂನ್.28ಕ್ಕೆ ಪ್ರತಿ ವರ್ಷದಂತೆ ಭಗತ್ ಸಿಂಗ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಎಸ್‌ಸಿ/ಎಸ್‌ಟಿ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಭಗತ್ಸಿಂಗ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಸಂದೀಪ್ ಬಿ ರೆಡ್ಡಿ ತಿಳಿಸಿದರು.
ನಗರದ ಪತ್ರಕರ್ತರ ಭವನದಲ್ಲಿ ಗುರುವಾರ ಭಗತ್ ಸಿಂಗ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಸುಪ್ರೀಂ ಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಗೋಪಾಲ್ ಗೌಡ ಸೇರಿದಂತೆ ಹಲವು ಗಣ್ಯರು ಭಾಗವಹಿಸಿ ವಿದ್ಯಾರ್ಥಿ ಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದರು.
ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸರ್ಕಾರಿ ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡಿರುವ 2026ರ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಶೇ.60ಕ್ಕಿಂತ ಹೆಚ್ಚು ಅಂಕ ಪಡೆದ ಎಸ್‌ಸಿ/ಎಸ್‌ಟಿ ಸಮುದಾಯದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಹಾಗೂ ಪ್ರತಿಭಾ ಪುರಸ್ಕಾರ ನೀಡುವ ಮೂಲಕ ಅಂಬೇಡ್ಕರ್ ಆಶಯ ಈಡೇರಿಸುವ ಸಂಕಲ್ಪ ಮಾಡಲಾಗಿದೆ ಎಂದರು.
ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪ್ರಧಾನ ವೇದಿಕೆಗೆ ತಂದು ಅವರನ್ನು ಗೌರವಿಸಿ ಅವರಲ್ಲಿ ಆತ್ಮವಿಶ್ವಾಸ ಹೆಚ್ಚಿಸುವ ಮೂಲಕ ಸಾಧನೆಗೆ ನೀರೆಯುವ ಕೆಲಸವನ್ನು ಭಗತ್ಸಿಂಗ್ ಚಾರಿಟೇಬಲ್ ಟ್ರಸ್ಟ್ ಕಳೆದ 3 ವರ್ಷಗಳಿಂದ ನಿರ್ವಂಚನೆಯಿಂದ ಮಾಡಿಕೊಂಡು ಬಂದಿರುವ ಸಲುವಾಗಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಅರ್ಹ ವಿದ್ಯಾರ್ಥಿಗಳು ಭಗತ್ ಸಿಂಗ್ ಚಾರಿಟೇಬಲ್ ಟ್ರಸ್ಟ್ ಕಚೇರಿಯಿಂದ ಅರ್ಜಿ ಪಡೆದು ಸಲ್ಲಿಸ ಬಹುದು. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸಾಮಾಜಿಕ ಜಾಲತಾಣಗಳ ಮೂಲಕವೂ ಅರ್ಜಿ ನಮೂನೆಗಳನ್ನು ತಲುಪಿಸಲಾಗುವುದು. ಅರ್ಜಿಯೊಂದಿಗೆ ವಿದ್ಯಾರ್ಥಿಯ ಆಧಾರ್ ಕಾರ್ಡ್,ಪೋಷಕರ ಆಧಾರ್ ಕಾರ್ಡ್, ಜಾತಿ ಪ್ರಮಾಣ ಪತ್ರ,ಅಂಕಪಟ್ಟಿಯ ಪ್ರತಿ ಹಾಗೂ ಶಿಕ್ಷಣ ಸಂಸ್ಥೆಯ ಮುಖ್ಯೋಪಾಧ್ಯಾಯರಿಂದ ದೃಢೀಕರಣ ಪತ್ರವನ್ನು ಸಲ್ಲಿಸಬೇಕು ಎಂದು ಹೇಳಿದರು.
ಪ್ರತಿ ವರ್ಷ ಸುಮಾರು 800 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುತ್ತಿದ್ದು, ಈ ಬಾರಿ ಚಿಕ್ಕಬಳ್ಳಾಪುರದಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಉತ್ತಮ ಫಲಿತಾಂಶ ಬಂದಿರುವ ಹಿನ್ನೆಲೆಯಲ್ಲಿ 1600ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ತಲಾ 5000 ನಗದು ಪ್ರೋತ್ಸಾಹಧನ ಹಾಗೂ ಪ್ರಮಾಣಪತ್ರ ವಿತರಿಸಲಾಗುವುದು ಎಂದು ತಿಳಿಸಿದರು.
ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ದಿನ ಭಗತ್ ಸಿಂಗ್ ಚಾರಿಟೇಬಲ್ ಟ್ರಸ್ಟ್ ನೀಡುವ ಕೂಪನ್ ಕಡ್ಡಾಯವಾಗಿ ತರಬೇಕು. ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ವಿದ್ಯಾರ್ಥಿಗಳು ರಾಜ್ಯದ ಯಾವುದೇ ಭಾಗದಲ್ಲಿ ಪರೀಕ್ಷೆ ಬರೆದಿದ್ದರೂ ವಿದ್ಯಾರ್ಥಿವೇತನಕ್ಕೆ ಅರ್ಹರಾಗಿರುತ್ತಾರೆ. ಆದರೆ ಬೇರೆ ವಿಧಾನಸಭಾ ಕ್ಷೇತ್ರದ ವಿದ್ಯಾರ್ಥಿಗಳು ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಪರೀಕ್ಷೆ ಬರೆದಿದ್ದರೂ ಈ ಯೋಜನೆಯ ಸೌಲಭ್ಯ ಪಡೆಯಲು ಅರ್ಹರಾಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಈ ಸಂದರ್ಭದಲ್ಲಿ ಪಟ್ರೇನಹಳ್ಳಿ ಗ್ರಾ.ಪಂ ಮಾಜಿ ಅಧ್ಯಕ್ಷ ವೆಂಕಟೇಶ್, ಮಂಚೇನಹಳ್ಳಿಯ ರಿಯಾಜ್, ಅಣಕನೂರು ಸುನೀಲ್, ಬಾಲಕೃಷ್ಣ ಬಾಲು, ಶಿವಕುಮಾರ್, ನಾಗೇಶ್, ಸಂದೀಪ್ ಸ್ಯಾಂಡಿ ಇತರರು ಹಾಜರಿದ್ದರು.