ಚಿಕ್ಕಬಳ್ಳಾಪುರ: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಬಿ.ನಾಗೇಂದ್ರ ಅವರನ್ನು ಮತ್ತೆ ರಾಜ್ಯ ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿರುವುದನ್ನು ವಿರೋಧಿಸಿ ಹಾಗೂ ಅವರನ್ನು ತಕ್ಷಣ ಸಂಪುಟದಿಂದ ಕೈಬಿಡುವಂತೆ ಆಗ್ರಹಿಸಿ ಬಿಜೆಪಿ ಜಿಲ್ಲಾ ಘಟಕದ ವತಿಯಿಂದ ಸಂಸದ ಡಾ.ಕೆ.ಸುಧಾಕರ್ ನೇತೃತ್ವದಲ್ಲಿ ಸೋಮವಾರ ಜಿಲ್ಲಾಡಳಿತ ಭವನದ ಮುಂದೆ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಆರಂಭಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಸಂಸದ ಡಾ.ಕೆ.ಸುಧಾಕರ್(MP Dr K Sudhakar), ವಾಲ್ಮೀಕಿ ನಿಗಮದ ಹಣವನ್ನು ಚುನಾವಣೆಗೆ ಬಳಸಿರುವುದು ರಾಜ್ಯದ ರಾಜಕೀಯ ಇತಿಹಾಸದಲ್ಲೇ ಕಪ್ಪು ಚುಕ್ಕೆ ಎಂದು ಆರೋಪಿಸಿದರು. ಪರಿಶಿಷ್ಟ ಪಂಗಡದ ಜನರ ಕಲ್ಯಾಣಕ್ಕಾಗಿ ಮೀಸಲಿಟ್ಟಿದ್ದ ಕೋಟ್ಯಂತರ ರೂಪಾಯಿ ಹಣವನ್ನು ವಿವಿಧ ಖಾತೆಗಳಿಗೆ ವರ್ಗಾಯಿಸಿ ದುರ್ಬಳಕೆ ಮಾಡಲಾಗಿದೆ ಎಂದು ದೂರಿದರು.
ಹಗರಣದ ಹಿನ್ನೆಲೆಯಲ್ಲಿ ನಾಗೇಂದ್ರ ಅವರು ಈ ಹಿಂದೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅವರ ವಿರುದ್ಧ ತನಿಖೆ ಮುಂದುವರಿದಿರುವಾಗಲೇ ಮತ್ತೆ ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿರು ವುದು ಅಕ್ಷಮ್ಯ ಎಂದು ಸುಧಾಕರ್ ಟೀಕಿಸಿದರು. ಪ್ರಕರಣದಲ್ಲಿ ಆರೋಪಪಟ್ಟಿ ಸಲ್ಲಿಕೆಯಾಗಿರುವ ಹಿನ್ನೆಲೆಯಲ್ಲಿ ಅವರಿಗೆ ಇನ್ನೂ ಯಾವುದೇ ಕ್ಲೀನ್‌ಚಿಟ್ ಸಿಕ್ಕಿಲ್ಲ. ಆದರೂ ಸಚಿವರನ್ನಾಗಿ ಮಾಡಿರುವುದು ಪರಿಶಿಷ್ಟ ಪಂಗಡದ ಜನರಿಗೆ ಮಾಡಿರುವ ದ್ರೋಹವಾಗಿದೆ ಎಂದು ಹೇಳಿದರು.
ನಿಗಮದ ಹಣ ದುರ್ಬಳಕೆಯ ಪ್ರಕರಣದಲ್ಲಿ ಅಧಿಕಾರಿ ಚಂದ್ರಶೇಖರ್ ಅವರ ಸಾವಿನ ಸಂಗತಿ ಯೂ ಗಮನಾರ್ಹವಾಗಿದ್ದು, ಪ್ರಕರಣದ ತನಿಖೆ ಪಾರದರ್ಶಕವಾಗಿ ನಡೆಯಬೇಕು ಎಂದು ಒತ್ತಾಯಿಸಿದರು. ನಾಗೇಂದ್ರ ಅವರ ರಾಜೀನಾಮೆ ಪಡೆಯುವವರೆಗೆ ಬಿಜೆಪಿ ಸದನದ ಒಳಗೂ ಹೊರಗೂ ಜೆಡಿಎಸ್‌ನೊಂದಿಗೆ ಸೇರಿ ಹೋರಾಟ ಮುಂದುವರಿಸಲಿದೆ ಎಂದು ಎಚ್ಚರಿಸಿದರು.
ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಡುವವರೆಗೆ ಧರಣಿ ಮುಂದುವರಿಯಲಿದೆ; ಈ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ ಎಂದು ಬಿಜೆಪಿ ಮುಖಂಡರು ಸ್ಪಷ್ಟಪಡಿಸಿದರು.
ಧರಣಿಯಲ್ಲಿ ಬಿಜೆಪಿ ಜಿಲ್ಲಾ ಉಸ್ತುವಾರಿ ಬ್ಯಾಟರಂಗೇಗೌಡ, ಜಿ.ಪಂ. ಮಾಜಿ ಅಧ್ಯಕ್ಷ ಪಿ.ಎನ್.ಕೇಶವ ರೆಡ್ಡಿ, ರಾಜ್ಯ ಕಾರ್ಯದರ್ಶಿ ಸಿ.ಮುನಿರಾಜು, ಜಿಲ್ಲಾಧ್ಯಕ್ಷ ಸೀಕಲ್ ರಾಮಚಂದ್ರಗೌಡ ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಮುಖಂಡರು, ಮಹಿಳಾ ಮೋರ್ಚಾ ಪದಾಧಿಕಾರಿ ಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.