ಚಿಕ್ಕಬಳ್ಳಾಪುರ : ಮಾದಕ ವಸ್ತುಗಳ ಬಳಕೆ ವ್ಯಕ್ತಿಯ ಜೀವನವನ್ನು ಮಾತ್ರವಲ್ಲದೆ ಕುಟುಂಬ ಮತ್ತು ಸಮಾಜದ ನೆಮ್ಮದಿಯನ್ನೂ ಹಾಳು ಮಾಡುತ್ತದೆ. ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಜಿಲ್ಲಾಧಿಕಾರಿ ಜಿ. ಪ್ರಭು ಹೇಳಿದರು.
ನಗರದ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ನಡೆದ ಅಂತರರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಇಂದಿನ ಯುವ ಪೀಳಿಗೆ ದೇಶದ ಭವಿಷ್ಯವಾಗಿದ್ದು, ಅವರು ಮಾದಕ ವಸ್ತುಗಳ ಚಟಕ್ಕೆ ಬಲಿಯಾಗ ದಂತೆ ಪೋಷಕರು, ಶಿಕ್ಷಕರು ಮತ್ತು ಸಮಾಜ ಹೆಚ್ಚಿನ ಜಾಗೃತಿಯಿಂದ ಕಾರ್ಯನಿರ್ವಹಿಸಬೇಕಿದೆ. ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಬೆಳೆಸುವ ಮೂಲಕ ಉತ್ತಮ ಶಿಕ್ಷಣ, ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಸಬೇಕು ಎಂದು ಹೇಳಿದರು.
ಜಿಲ್ಲೆಯಲ್ಲಿ ಮಾದಕ ವಸ್ತುಗಳ ಮಾರಾಟ ಮತ್ತು ಸಾಗಾಟ ತಡೆಗಟ್ಟಲು ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಸಮನ್ವಯದೊಂದಿಗೆ ನಿರಂತರ ಕ್ರಮಗಳನ್ನು ಕೈಗೊಳ್ಳುತ್ತಿದೆ. ಸಾರ್ವಜನಿಕರು ಕೂಡ ಮಾದಕ ವಸ್ತುಗಳ ವಿರುದ್ಧದ ಹೋರಾಟದಲ್ಲಿ ಭಾಗಿಯಾಗಬೇಕು ಎಂದು ಮನವಿ ಮಾಡಿದರು.
ಡ್ರಗ್ಸ್ʼಗೆ ನೋ ಹೇಳಿ - ಜೀವನಕ್ಕೆ ಯೆಸ್ ಹೇಳಿ" ಹಾಗೂ "ಮಾದಕ ವಸ್ತು ಮುಕ್ತ ಚಿಕ್ಕಬಳ್ಳಾಪುರ ಜಿಲ್ಲೆಯ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸೋಣ" ಎಂಬ ಸಂದೇಶವನ್ನು ಜನರಿಗೆ ತಲುಪಿಸುವ ಉದ್ದೇಶದಿಂದ ವಿವಿಧ ವಿನೂತನ ಕಾರ್ಯಕ್ರಮಗಳನ್ನು ರೂಪಿಸಲಾಗಿದ್ದು ಜಿಲ್ಲೆಯಾದ್ಯಂತ ಜೂ.25 ಮತ್ತು 26ರಂದು ಅಂತರರಾಷ್ಟ್ರೀಯ ಮಾದಕ ವಸ್ತು ದುರುಪಯೋಗ ಮತ್ತು ಅಕ್ರಮ ಸಾಗಣೆ ವಿರೋಧಿ ದಿನಾಚರಣೆಯ ಅಂಗವಾಗಿ ವಿಶೇಷ ಮಾದಕ ವಸ್ತು ವಿರೋಧಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಜಿ. ಪ್ರಭು ತಿಳಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸೆ, ಮಾದಕ ವಸ್ತುಗಳ ಸೇವನೆಯಿಂದ ಯುವಕರು ತಮ್ಮ ಭವಿಷ್ಯವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ. ಸುಲಭವಾಗಿ ಹಣ ಗಳಿಸುವ ಉದ್ದೇಶದಿಂದ ಕೆಲವರು ಮಾದಕ ವಸ್ತುಗಳ ಜಾಲದಲ್ಲಿ ಸಿಲುಕು ತ್ತಿದ್ದು, ಇದು ಸಮಾಜಕ್ಕೆ ಅಪಾಯಕಾರಿಯಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಜಿಲ್ಲೆಯಲ್ಲಿ ಮಾದಕ ವಸ್ತುಗಳ ಮಾರಾಟ ಮತ್ತು ಬಳಕೆ ತಡೆಗಟ್ಟಲು ಪೊಲೀಸ್ ಇಲಾಖೆ ವಿಶೇಷ ಕಾರ್ಯಾಚರಣೆಗಳನ್ನು ನಡೆಸುತ್ತಿದೆ.ಮಾದಕ ವಸ್ತುಗಳ ವಿರುದ್ಧ ಕಠಿಣ ಕ್ರಮದ ಸಂದೇಶವಾಗಿ, ಕಾನೂನುಬದ್ಧ ಪ್ರಕ್ರಿಯೆಯಂತೆ 60 ಕೆ.ಜಿ.ಗೂ ಅಧಿಕ ಗಾಂಜಾವನ್ನು ನಾಶಪಡಿಸುವ ಕಾರ್ಯಕ್ರಮ ವನ್ನೂ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಶಾಲಾ-ಕಾಲೇಜುಗಳಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದ್ದು, ಮಾದಕ ವಸ್ತುಗಳ ಕುರಿತು ಯಾವುದೇ ಮಾಹಿತಿ ದೊರೆತಲ್ಲಿ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಬೇಕು ಎಂದು ಮನವಿ ಮಾಡಿದರು.
ಯುವಜನರು ಜೀವನದಲ್ಲಿ ಉತ್ತಮ ಗುರಿ ಹೊಂದಿ ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿ ಕೊಳ್ಳಬೇಕು. ಮಾದಕ ವ್ಯಸನದಿಂದ ದೂರವಿದ್ದು ಸಮಾಜದ ಅಭಿವೃದ್ಧಿಗೆ ತಮ್ಮ ಕೊಡುಗೆ ನೀಡಬೇಕು ಎಂದು ಕರೆ ನೀಡಿದರು.
ಜೂನ್ 26ರಿಂದ ವಿದ್ಯಾರ್ಥಿಗಳು, ಯುವಜನರು, ಸಾರ್ವಜನಿಕರು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಪೊಲೀಸ್ ಸಿಬ್ಬಂದಿಯ ಭಾಗವಹಿಸುವಿಕೆಯಲ್ಲಿ ಮಾದಕ ವಸ್ತು ವಿರೋಧಿ ವಾಕಥಾನ್ ಆಯೋಜಿಸಲಾಗುತ್ತಿದೆ. ಇದೇ ವೇಳೆ ಜಿಲ್ಲಾ ಪೊಲೀಸ್ ಇಲಾಖೆಯ ಸಿಬ್ಬಂದಿ ಯೊಬ್ಬರು ರಚಿಸಿ ಹಾಡಿರುವ ಸೆ ನೋ ಟು ಡ್ರಗ್ಸ್ ಎಂಬ ಕನ್ನಡ ರ‍್ಯಾಪ್ ಗೀತೆಯನ್ನು ಬಿಡುಗಡೆ ಮಾಡಿ ಜಾಗೃತಿ ಮೂಡಿಸಲಾಗುವುದು. ಸಮಾಜದಲ್ಲಿ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ವ್ಯಾಪಕ ಅರಿವು ಮೂಡಿಸಿ, ಆರೋಗ್ಯಕರ ಜೀವನಶೈಲಿಯತ್ತ ಜನರನ್ನು ಪ್ರೇರೇಪಿಸುವುದೇ ಈ ಅಭಿಯಾನದ ಮುಖ್ಯ ಉದ್ದೇಶವಾಗಿದೆ ಎಂದರು.
ಇದೇ ವೇಳೆ, ಜಾಗೃತಿ ಜಾಥಾ ಕಾರ್ಯಕ್ರಮವು ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಿಂದ ಜಿಲ್ಲಾ ಕನ್ನಡ ಭವನದವರೆಗೆ ಯಶಸ್ವಿಯಾಗಿ ಜರುಗಿತು ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಜಾಗೃತಿ ಫಲಕಗಳನ್ನು ಹಿಡಿದು ಸಾರ್ವಜನಿಕರಿಗೆ ಜಾಗೃತಿ ಮೂಡಿಸಿದರು. ಇದೇ ವೇಳೆ, ಮಾದಕ ವಸ್ತುಗಳ ಬಳಕೆ ತಡೆಗಟ್ಟುವ ಕುರಿತು ಪ್ರತಿಜ್ಞಾ ವಿಧಿ ಬೋಧಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ವೈ.ನವೀನ್ ಭಟ್, ಪೊಲೀಸ್ ಇಲಾಖೆಯ ಅಧಿಕಾರಿಗಳು, ಜಿಲ್ಲಾ ಕ್ರೀಡಾಪಟು ಮಂಚನಬಲೆ ಶ್ರೀನಿವಾಸ್, ವಿವಿಧ ಇಲಾಖೆಗಳ ಅಧಿಕಾರಿಗಳು, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.