ಗುಡಿಬಂಡೆ: ಸಾರ್ವಜನಿಕರು ವಿವಿಧ ಸರ್ಕಾರಿ ಕಚೇರಿಗಳಿಗೆ ಪದೇಪದೇ ಅಲೆದಾಡುವುದನ್ನು ತಪ್ಪಿಸಿ, ಒಂದೇ ಸ್ಥಳದಲ್ಲಿ ತಮ್ಮ ಸಮಸ್ಯೆಗಳಿಗೆ ಪರಿಹಾರ ಪಡೆಯುವ ಉದ್ದೇಶದಿಂದ ಪ್ರಜಾಸೇವೆ ಆಂದೋಲನ ಆರಂಭಿಸಲಾಗಿದೆ ಎಂದು ತಹಶೀಲ್ದಾರ್ ಸಿಗ್ಬತ್ ಉಲ್ಲಾ ಹೇಳಿದರು.
ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ತಾಲೂಕು ಆಡಳಿತ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಆಯೋಜಿಸಿದ್ದ ತಾಲೂಕು ಮಟ್ಟದ ಪ್ರಜಾಸೇವೆ ಆಂದೋಲನಕ್ಕೆ ಚಾಲನೆ ನೀಡಿ ಮಾತನಾಡಿದರು.
ಇದನ್ನೂ ಓದಿ: Gudibande News: ಧಾರ್ಮಿಕ, ಸಾಮಾಜಿಕ ಚಟುವಟಿಕೆಗಳಿಂದ ಸ್ವಾವಲಂಬನೆಗೆ ಪ್ರೋತ್ಸಾಹ: ವಿನಾಯಕ ಪೈ
ಆಂದೋಲನದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಒಂದೇ ಸ್ಥಳದಲ್ಲಿ ಲಭ್ಯವಿದ್ದು, ಸಾರ್ವಜನಿಕರಿಂದ ನೇರವಾಗಿ ಅರ್ಜಿಗಳನ್ನು ಸ್ವೀಕರಿಸಲಾಗುತ್ತಿದೆ. ಭೂಮಿ, ಆಧಾರ್ ಕಾರ್ಡ್, ಪಡಿತರ ಚೀಟಿ, ಪಟ್ಟಣ ಹಾಗೂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಮಸ್ಯೆಗಳು ಮತ್ತು ವಿವಿಧ ಸರ್ಕಾರಿ ಯೋಜನೆಗಳ ಸೌಲಭ್ಯಗಳಿಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸಬಹುದಾಗಿದೆ ಎಂದರು.
ಸ್ವೀಕರಿಸಿದ ಅರ್ಜಿಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲಿಸಿ, ಅರ್ಹತೆ ಹಾಗೂ ದಾಖಲೆಗಳ ಆಧಾರದ ಮೇಲೆ ಕ್ರಮ ಕೈಗೊಳ್ಳಲಿದ್ದು, ಸಾಧ್ಯವಾದಷ್ಟು 21 ದಿನಗಳೊಳಗೆ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಲು ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.
ಪಡಿತರ ಚೀಟಿಯ ಇ-ಕೆವೈಸಿ, ಬಯೋಮೆಟ್ರಿಕ್ ಹಾಗೂ ಸ್ಕ್ಯಾನಿಂಗ್ ಸಮಸ್ಯೆಗಳಿಗೂ ಆಂದೋಲನ ದಲ್ಲಿ ಪರಿಹಾರ ಕಲ್ಪಿಸಲಾಗುತ್ತಿದೆ. ಮೊದಲ ದಿನವೇ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, 50ಕ್ಕೂ ಹೆಚ್ಚು ಅರ್ಜಿಗಳನ್ನು ಸ್ವೀಕರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.