ಚಿಕ್ಕಬಳ್ಳಾಪುರ: ಭಾರತ ರತ್ನ, ವಿಶ್ವವಿಖ್ಯಾತ ಅಭಿಯಂತರ ಸರ್.ಎಂ.ವಿಶ್ವೇಶ್ವರಯ್ಯ ಅವರು ಚಿಕ್ಕಬಳ್ಳಾಪುರ ಜಿಲ್ಲೆಯ ಹೆಮ್ಮೆಯ ಪುತ್ರರಾಗಿದ್ದು, ಅವರ ಸ್ಮರಣೆಯನ್ನು ಚಿರಸ್ಥಾಯಿಗೊಳಿಸುವ ನಿಟ್ಟಿನಲ್ಲಿ ನಗರದ ರೈಲು ನಿಲ್ದಾಣಕ್ಕೆ ಅವರ ಹೆಸರಿಡಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ನಾಗರಿಕ ಹಿತರಕ್ಷಣಾ ಸಮಿತಿ ಜಿಲ್ಲಾಡಳಿತವನ್ನು ಒತ್ತಾಯಿಸಿದೆ.
ಈ ಸಂಬಂಧ ಸಮಿತಿಯ ಪದಾಧಿಕಾರಿಗಳು ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ, ಜಿಲ್ಲೆಯ ಅಭಿವೃದ್ಧಿಗೆ ಸರ್.ಎಂ.ವಿ. ಅವರು ನೀಡಿರುವ ಕೊಡುಗೆಗಳನ್ನು ಸ್ಮರಿಸಿ ಗೌರವ ಸಲ್ಲಿಸುವುದು ಜಿಲ್ಲೆಯ ನಾಗರಿಕರ ಕರ್ತವ್ಯವಾಗಿದೆ ಎಂದು ಮನವರಿಕೆ ಮಾಡಿಕೊಟ್ಟರು.
ಸರ್.ಎಂ.ವಿಶ್ವೇಶ್ವರಯ್ಯ ಅವರು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಜನಿಸಿ, ತಮ್ಮ ಅದ್ವಿತೀಯ ತಾಂತ್ರಿಕ ಜ್ಞಾನ, ದೂರದೃಷ್ಟಿ ಹಾಗೂ ಆಡಳಿತದಕ್ಷತೆಯಿಂದ ರಾಜ್ಯ, ದೇಶ ಮಾತ್ರವಲ್ಲದೆ ಅಂತಾ ರಾಷ್ಟ್ರೀಯ ಮಟ್ಟದಲ್ಲಿಯೂ ಖ್ಯಾತಿ ಗಳಿಸಿದ್ದಾರೆ.
ಮೈಸೂರು ಸಂಸ್ಥಾನದ ದಿವಾನರಾಗಿ ಸಲ್ಲಿಸಿದ ಸೇವೆ ಹಾಗೂ ನಾಡಿನ ಅಭಿವೃದ್ಧಿಗೆ ನೀಡಿದ ಕೊಡುಗೆಗಳು ಸ್ಮರಣೀಯವಾಗಿವೆ. ಚಿಕ್ಕಬಳ್ಳಾಪುರ ನಗರಕ್ಕೆ ಜಕ್ಕಲಮಡುಗು ಜಲಾಶಯದ ಮೂಲಕ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸುವುದರ ಜತೆಗೆ, 1915ರಲ್ಲಿ ಬೆಂಗಳೂರು-ಚಿಕ್ಕಬಳ್ಳಾ ಪುರ ರೈಲು ಮಾರ್ಗ ನಿರ್ಮಾಣಕ್ಕೂ ಮಹತ್ವದ ಕೊಡುಗೆ ನೀಡಿದ್ದಾರೆ ಎಂದು ಮನವಿಯಲ್ಲಿ ವಿವರಿಸಲಾಗಿದೆ.
ಸಮಿತಿಯ ಪ್ರಮುಖ ನಾಲ್ಕು ಬೇಡಿಕೆಗಳು:
- ಜಿಲ್ಲಾಡಳಿತ ಭವನದ ಆವರಣದಲ್ಲಿ ಭಾರತರತ್ನ ಸರ್.ಎಂ. ವಿಶ್ವೇಶ್ವರಯ್ಯ ಅವರ ಪುತ್ಥಳಿ ಸ್ಥಾಪಿಸಬೇಕು.
- ಜಿಲ್ಲೆಯನ್ನು ಪ್ರವೇಶಿಸುವ ಗಡಿ ಭಾಗಗಳ ಹೆದ್ದಾರಿಗಳಲ್ಲಿ 'ಭಾರತರತ್ನ ಸರ್.ಎಂ. ವಿಶ್ವೇಶ್ವರಯ್ಯ ಹುಟ್ಟಿದ ಜಿಲ್ಲೆಗೆ ಸ್ವಾಗತ' ಎಂಬ ಸಂದೇಶವುಳ್ಳ ಸ್ವಾಗತ ಕಮಾನುಗಳನ್ನು ನಿರ್ಮಿಸಬೇಕು.
- 1915ರಲ್ಲಿ ಬೆಂಗಳೂರು-ಚಿಕ್ಕಬಳ್ಳಾಪುರ ರೈಲು ಮಾರ್ಗ ನಿರ್ಮಾಣದ ಐತಿಹಾಸಿಕ ಹಿನ್ನೆಲೆಯನ್ನು ಪರಿಗಣಿಸಿ, ಚಿಕ್ಕಬಳ್ಳಾಪುರ ರೈಲು ನಿಲ್ದಾಣಕ್ಕೆ ಸರ್.ಎಂ. ವಿಶ್ವೇಶ್ವರಯ್ಯ ಅವರ ಹೆಸರಿಡಲು ಸಂಬಂಧಪಟ್ಟ ರೈಲ್ವೆ ಇಲಾಖೆಗೆ ಶಿಫಾರಸು ಮಾಡಬೇಕು.
- ಜಕ್ಕಲಮಡುಗು ಅಣೆಕಟ್ಟೆ ಬಳಿಯ ಶಿಲಾನ್ಯಾಸ ಸ್ಮಾರಕವನ್ನು ಗಾಳಿ, ಮಳೆ ಹಾಗೂ ಬಿಸಿಲಿ ನಿಂದ ರಕ್ಷಿಸಬೇಕು. ಜತೆಗೆ ಅವರ ಹೆಸರಿನಲ್ಲಿ ಉದ್ಯಾನವನ ನಿರ್ಮಿಸಿ, ಪ್ರವಾಸಿ ತಾಣವಾಗಿ ಅಭಿವೃದ್ಧಿಪಡಿಸಬೇಕು.
ಜಿಲ್ಲೆಯ ಇತಿಹಾಸ, ಪರಂಪರೆ ಹಾಗೂ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿರುವ ಸರ್.ಎಂ.ವಿ. ಅವರ ಸ್ಮರಣೆಯನ್ನು ಮುಂದಿನ ಪೀಳಿಗೆಗೂ ಪರಿಚಯಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಹಾಗೂ ಸಂಬಂಧಪಟ್ಟ ಇಲಾಖೆಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸಮಿತಿ ಮನವಿ ಮಾಡಿದೆ.
ಈ ಸಂದರ್ಭದಲ್ಲಿ ಸಮಿತಿಯ ಸಂಚಾಲಕ ಯಲುವಹಳ್ಳಿ ಸೊಣ್ಣೇಗೌಡ, ರಾಜ್ಯ ಪ್ರಶಸ್ತಿ ಪುರಸ್ಕೃತ ನಿವೃತ್ತ ಶಿಕ್ಷಕ ಕೆ.ಎಂ. ರೆಡ್ಡಪ್ಪ, ಪೈಯೂರು ವೇಣು, ಆದಿನಾರಾಯಣಪ್ಪ ಉಪಸ್ಥಿತರಿದ್ದರು.