Karnataka Politics: ಹೈಕಮಾಂಡ್ ನಿರ್ಧಾರವನ್ನು ನಾನು, ಡಿ.ಕೆ.ಶಿವಕುಮಾರ್ ಒಪ್ಪಬೇಕು: ಸಿಎಂ ಸಿದ್ದರಾಮಯ್ಯ
CM Siddaramaiah: ರಾಜ್ಯ ಕಾಂಗ್ರೆಸ್‌ನಲ್ಲಿ ಅಧಿಕಾರ ಹಂಚಿಕೆ ಬಗ್ಗೆ ಚರ್ಚೆ ಜೋರಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬೆಂಗಳೂರಿಗೆ ಆಗಮಿಸಿದ ಬಳಿಕ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ವಿವಿಧ ಸಚಿವರ ಜತೆ ಸಭೆ ನಡೆಸಿದ್ದರು. ಏನೇ ವಿಚಾರವಿದ್ದರೂ ಅಂತಿಮವಾಗಿ ಹೈಕಮಾಂಡ್ ತೀರ್ಮಾನ ಮಾಡಲಿದೆ ಎಂದು ಅವರು ತಿಳಿಸಿದ್ದರು. ಇದೀಗ ಪಕ್ಷದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.
ಶಿಡ್ಲಘಟ್ಟದಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು. -
ಚಿಕ್ಕಬಳ್ಳಾಪುರ (ಶಿಡ್ಲಘಟ್ಟ), ನ. 23: ಸರ್ಕಾರದಲ್ಲಿ ಯಾವುದೇ ಬದಲಾವಣೆ ಮಾಡುವ ಸಂಬಂಧ ನಮ್ಮಲ್ಲಿ ಪಕ್ಷದ ವರಿಷ್ಠರ ತೀರ್ಮಾನಕ್ಕೆ ನಾನು ಹಾಗೂ ಡಿ.ಕೆ.ಶಿವಕುಮಾರ್ (DK Shivakumar) ಬದ್ಧರಾಗಬೇಕು. ಹೈ ಕಮಾಂಡ್ ಅನ್ನು ಐದು ತಿಂಗಳ ಹಿಂದೆ ಭೇಟಿಯಾದಾಗ, ಸಚಿವ ಸಂಪುಟ ಪುನರ್ ರಚನೆ ಮಾಡಲು ಸೂಚನೆ ನೀಡಿದ್ದರು. ನಾನು ಎರಡೂವರೆ ವರ್ಷ ತುಂಬಿದ ನಂತರ ಮಾಡೋಣ ಎಂದು ತಿಳಿಸಿದ್ದೆ. ಈಗ ಏನು ಸೂಚನೆ ನೀಡುತ್ತಾರೋ ಅದರಂತೆ ನಡೆಯುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ತಿಳಿಸಿದರು.
ರಾಜ್ಯದಲ್ಲಿ ಅಧಿಕಾರ ಹಂಚಿಕೆ (Karnataka Politics) ಕುರಿತ ಚರ್ಚೆಗೆ ಸಂಬಂಧಿಸಿ ಮಾಧ್ಯಮಗಳ ಪ್ರಶ್ನೆಗೆ ಶಿಡ್ಲಘಟ್ಟದಲ್ಲಿ ಮುಖ್ಯಮಂತ್ರಿಗಳು ಉತ್ತರಿಸಿದ್ದಾರೆ. ಗ್ಯಾರಂಟಿ ಯೋಜನೆಗಳಿಗೆ ಒಂದು ಲಕ್ಷ ಕೋಟಿ ರೂಗಳಿಗೂ ಹೆಚ್ಚು ಹಣವನ್ನು ವೆಚ್ಚ ಮಾಡಲಾಗಿದೆ. ನಾವು ನುಡಿದಂತೆ ನಡೆದ ಸರ್ಕಾರ ಎಂದು ಹೇಳಿದ್ದೆವು. ಅದರಂತೆ ನಡೆದಿದ್ದೇವೆ ಎಂದು ಹೇಳಿದರು.
ಬಿಜೆಪಿಯವರು ಸರ್ಕಾರದ ಬಳಿ ಹಣವಿಲ್ಲ ಎನ್ನುತ್ತಾರೆ. 2000 ಕೋಟಿ ವೆಚ್ಚದ ಅಭಿವೃದ್ಧಿ ಕೆಲಸಗಳನ್ನು ಹಣವಿಲ್ಲದೆ ಮಾಡಲು ಸಾಧ್ಯವೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.
ಬಿಜೆಪಿಯಿಂದ ಅಪಪ್ರಚಾರ
ಚಿಕ್ಕಬಳ್ಳಾಪುರ ಜಿಲ್ಲೆ ಸೇರಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅಭಿವೃದ್ಧಿ ಕೆಲಸಗಳಿಗೆ ವೆಚ್ಚ ಮಾಡಲಾಗುತ್ತಿದೆ. ಚಿಕ್ಕಬಳ್ಳಾಪುರದಲ್ಲಿ ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಮಾಡುತ್ತಿದ್ದೇವೆ. ಬಿಜೆಪಿಯವರು ಅಪಪ್ರಚಾರ ಮಾಡುತ್ತಿದ್ದಾರೆ. ಸುಳ್ಳು ಬಿಟ್ಟರೆ ಬೇರೇನೂ ಹೇಳಲು ಬರುವುದಿಲ್ಲ. ಸುಳ್ಳೇ ಅವರ ಮನೆ ದೇವರು ಟೀಕಿಸಿದರು.
ಇದನ್ನೂ ಓದಿ : ಸಿದ್ದರಾಮಯ್ಯ ಅವರೇ 5 ವರ್ಷ ಸಿಎಂ: ಯತೀಂದ್ರ
ಖರ್ಗೆ ಬಳಿಕ ಸಿಎಂ ಹೇಳಿದ್ದೇನು?
ಬೆಂಗಳೂರು: ರಾಜ್ಯದಲ್ಲಿ ಸಿಎಂ ಕುರ್ಚಿಗಾಗಿ ಭಾರೀ ಕಸರತ್ತು ನಡೆಯುತ್ತಿರುವಾಗಲೇ ಸಿಎಂ ಸಿದ್ದರಾಮಯ್ಯ (CM Siddaramaiah) ಹಾಗೂ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಶನಿವಾರ ಭೇಟಿಯಾಗಿದ್ದರು. ಖರ್ಗೆ ನಿವಾಸದಿಂದ ಹೊರಬಂದ ಬಳಿಕ ಮಾಧ್ಯಮಗಳ ಜತೆ ಮಾತನಾಡಿದ್ದ ಸಿಎಂ ಸಿದ್ದರಾಮಯ್ಯ, ಹೈಕಮಾಂಡ್ ನಿರ್ಧಾರವನ್ನು ನಾನೂ ಒಪ್ಪಬೇಕು ಹಾಗೂ ಡಿಕೆ ಶಿವಕುಮಾರ್ ಇಬ್ಬರೂ ಒಪ್ಪಿಕೊಳ್ಳಬೇಕು ಎಂದು ಹೇಳಿದ್ದರು.
ಇದು ಕೇವಲ ಸೌಹಾರ್ದಯುತ ಭೇಟಿ ಅಷ್ಟೇ ನಾಯಕತ್ವ ಬದಲಾವಣೆ ಬರೀ ಊಹಾಪೋಹ. ಮಲ್ಲಿಕಾರ್ಜುನ ಖರ್ಗೆಯವರ ಜೊತೆ ಪಕ್ಷ ಸಂಘಟನೆ ಬಗ್ಗೆ ಮಾತಾಡಿದೆ. ಮುಂದಿನ ಚುನಾವಣೆ ತಯಾರಿ ಬಗ್ಗೆ ಚರ್ಚೆಯೂ ನಡೆಯಿತು ಎಂದು ಸಿಎಂ ಹೇಳಿದ್ದಾರೆ.
ಇನ್ನು ಖರ್ಗೆ ಅವರ ಬಳಿ ಡಿ.ಕೆ. ಶಿ ಅವರ ಬೆಂಬಲಿತ ಶಾಸಕರು ನಾಯಕತ್ವ ಬದಲಾವಣೆ ವಿಚಾರವನ್ನು ಬಹಿರಂಗವಾಗಿ ಚರ್ಚಿಸುತ್ತಿರುವುದು ಹಾಗೂ ದೆಹಲಿಗೆ ತೆರಳುತ್ತಿರುವುದನ್ನು ಪ್ರಸ್ತಾಪಿಸಿದ ಬಗ್ಗೆ ಸಿದ್ದರಾಮಯ್ಯ ಅವರು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ : ಸಿಎಂ ಆಗಿ ನಾನೇ ಮುಂದುವರಿಯುವೆ: ಸಿದ್ದರಾಮಯ್ಯ
ರಾಜ್ಯ ಸರ್ಕಾರ ಈಗಾಗಲೇ ಎರಡೂವರೆ ವರ್ಷ ಪೂರ್ಣಗೊಳಿಸಿದ್ದು, ಸಂಪುಟ ಪುನರ್ ರಚನೆಗೆ ಸಿಎಂ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ. ಹಿರಿಯ ಶಾಸಕರು, ಹೆಚ್ಚು ಬಾರಿ ಶಾಸಕರಾಗಿ ಆಯ್ಕೆಯಾಗಿರುವವರು ಸೇರಿದಂತೆ ಪಕ್ಷಕ್ಕಾಗಿ ದುಡಿದವರಿಗೆ ಅಧಿಕಾರ ಕೊಡಬೇಕು ಎಂದು ಸಿಎಂ ಹೇಳಿದ್ದಾರೆ. ಸದ್ಯ ವಿದೇಶ ಪ್ರವಾಸದಲ್ಲಿರುವ ರಾಹುಲ್ ಗಾಂಧಿ ಭಾರತಕ್ಕೆ ಮರಳಿದ ಬಳಿಕ ಸಿಎಂ ಹಾಗೂ ಡಿಸಿಎಂ ಜೊತೆ ಪ್ರತ್ಯೇಕ ಚರ್ಚೆ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ.