ಚಿಕ್ಕಬಳ್ಳಾಪುರ : ಶ್ರೀ ಗೌರಿ-ಗಣೇಶ ಹಬ್ಬ(Sri Gauri-Ganesha Festival)ದ ಅಂಗವಾಗಿ ಜಿಲ್ಲೆಯಾ ದ್ಯಂತ ನಡೆಯುವ ಗಣೇಶ ಮೂರ್ತಿ ಪ್ರತಿಷ್ಠಾಪನೆ, ಮೆರವಣಿಗೆ ಹಾಗೂ ವಿಸರ್ಜನಾ ಕಾರ್ಯಕ್ರಮ ಗಳಲ್ಲಿ ಡಿಜೆ ಹಾಗೂ ಹೆಚ್ಚಿನ ಡೆಸಿಬೆಲ್ ಶಬ್ದ ಉಂಟುಮಾಡುವ ಶಬ್ದವರ್ಧಕ ಸಾಧನಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಜಿ.ಪ್ರಭು ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯಾದ್ಯಂತ ಸೆ.13 ಮತ್ತು 14ರಂದು ಗಣೇಶೋತ್ಸವ ಆಚರಿಸಲಾಗುತ್ತಿದ್ದು, ಈ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ, ಸಾರ್ವಜನಿಕ ಶಾಂತಿ, ಆರೋಗ್ಯ ಹಾಗೂ ಸುರಕ್ಷತೆ ಕಾಪಾಡುವ ಉದ್ದೇಶ ದಿಂದ ಮುಂಜಾಗ್ರತಾ ಕ್ರಮವಾಗಿ ಈ ನಿಷೇಧ ಜಾರಿಗೊಳಿಸಲಾಗಿದೆ. ಹೆಚ್ಚಿನ ಶಬ್ದದಿಂದ ಹೃದಯ ಸಂಬಂಧಿ ಕಾಯಿಲೆಗಳಿಂದ ಬಳಲುತ್ತಿರುವವರು, ವಯೋವೃದ್ಧರು ಹಾಗೂ ಮಕ್ಕಳಿಗೆ ತೊಂದರೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಇದನ್ನೂ ಓದಿ: Ganesh Chaturthi 2026: ಸಾರ್ವಜನಿಕ ಗಣೇಶೋತ್ಸವ: ತಾತ್ಕಾಲಿಕ ವಿದ್ಯುತ್ ಸಂಪರ್ಕ ಪಡೆಯಲು ಬೆಸ್ಕಾಂನಿಂದ ಮಾರ್ಗಸೂಚಿ ಬಿಡುಗಡೆ
ಗೌರವಾನ್ವಿತ ಉಚ್ಚ ನ್ಯಾಯಾಲಯದ W.P. No.23349/2025 (GM-RES-PIL) ಪ್ರಕರಣದಲ್ಲಿ 2025ರ ಆಗಸ್ಟ್ 23ರಂದು ನೀಡಿರುವ ಆದೇಶದಂತೆ Noise Pollution (Regulation and Control) Rules, 2000 ಹಾಗೂ Environmental Protection Act, 1986ರ ನಿಯಮಗಳನ್ನು ಪಾಲಿಸಿ ಮೆರವಣಿಗೆ ನಡೆಸಬೇಕು. ಡಿಜೆಗಳಿಗೆ ಯಾವುದೇ ಅನುಮತಿ ನೀಡಬಾರದು ಎಂದು ನ್ಯಾಯಾಲಯ ಸ್ಪಷ್ಟಪಡಿಸಿ ರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ನಿಷೇಧ ಆದೇಶ ಜಾರಿಗೊಳಿಸಲಾಗಿದೆ.
ಗಣೇಶ ಮೂರ್ತಿ ಪ್ರತಿಷ್ಠಾಪನಾ ಸ್ಥಳಗಳು ಹಾಗೂ ವಿಸರ್ಜನಾ ಮೆರವಣಿಗೆಗಳಲ್ಲಿ ಡಿಜೆ ಬಳಕೆ ಅಥವಾ ಹೆಚ್ಚಿನ ಡೆಸಿಬೆಲ್ ಶಬ್ದ ಉಂಟುಮಾಡುವ ಸಾಧನಗಳ ಬಳಕೆ ಕಂಡುಬಂದರೆ, ಸಂಬಂಧ ಪಟ್ಟ ಪೊಲೀಸ್ ಠಾಣೆಯ ಅಧಿಕಾರಿಗಳು ಕಾರ್ಯಕ್ರಮ ಅಥವಾ ಮೆರವಣಿಗೆಯನ್ನು ತಕ್ಷಣವೇ ಸ್ಥಗಿತಗೊಳಿಸಬೇಕು. ಡಿಜೆ ಉಪಕರಣಗಳನ್ನು ಜಪ್ತಿ ಮಾಡುವುದರ ಜೊತೆಗೆ ಅಗತ್ಯವಿದ್ದಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಳಿಸಿ, ಗುಂಪನ್ನು ಚದುರಿಸುವ ಕ್ರಮ ಕೈಗೊಳ್ಳಬೇಕು. ನಿಯಮ ಉಲ್ಲಂಘಿಸಿದವರ ವಿರುದ್ಧ ಕಾನೂನು ರೀತ್ಯಾ ಪ್ರಕರಣ ದಾಖಲಿಸಬೇಕು ಎಂದು ಆದೇಶದಲ್ಲಿ ಸೂಚಿಸಲಾಗಿದೆ.
ಜಿಲ್ಲಾ ಪೊಲೀಸ್ ಅಧೀಕ್ಷಕರ ಮನವಿಯನ್ನು ಪರಿಗಣಿಸಿ ಜಿಲ್ಲಾಧಿಕಾರಿಗಳಿಗೆ ಪ್ರದತ್ತವಾಗಿರುವ ಅಧಿಕಾರದನ್ವಯ ಈ ಆದೇಶ ಹೊರಡಿಸಲಾಗಿದ್ದು, ಆದೇಶ ಕ್ರಮಾಂಕ ಎಂ.ಎ.ಜಿ.(1)/ಸಿ.ಆರ್/30/2026-27, ದಿನಾಂಕ 11.09.2026ರಂತೆ ನಿಷೇಧ ತಕ್ಷಣದಿಂದ ಜಾರಿಗೆ ಬಂದಿದೆ. ಆದೇಶ ವನ್ನು ಜಿಲ್ಲೆಯಾದ್ಯಂತ ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವಂತೆ ಪೊಲೀಸ್ ಅಧೀಕ್ಷಕರಿಗೆ ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಪ್ರಭು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.