ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಅಕ್ರಮ ದಂಧೆಗಳ ವಿರುದ್ಧ ಹೋರಾಡಿದ್ದ ಭೂಮಾನಂದ ಬರ್ಬರ ಹತ್ಯೆ ಖಂಡನೆ

ಗಂಗಾಧರ್ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕು ಮತ್ತು ಜಿಲ್ಲೆಯಲ್ಲಿ, ಮರಳು ದಂಧೆ, ಜೂಜಾಟ, ಇಸ್ಪೀಟು ಸೇರಿದಂತೆ ವಿವಿಧ ಅಕ್ರಮ ಚಟುವಟಿಕೆಗಳ ವಿರುದ್ಧ ಭೂಮಾನಂದ ಅವರು ಬಿಎಸ್ಪಿ ಜಿಲ್ಲಾಧ್ಯಕ್ಷರಾಗಿ ಸಂಘಟಿತ ಹೋರಾಟ ನಡೆಸುತ್ತಿದ್ದರು. ಇದೇ ಕಾರಣಕ್ಕೆ ದಂದೆಕೋರ ಮೇಲ್ಜಾತಿ ಮಂದಿ ಅವರನ್ನು ಗುರಿಯಾಗಿಸಿ ಹಾಡಹಗಲೇ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಬರ್ಬರವಾಗಿ ಹತ್ಯೆಗೈದಿದ್ದಾರೆ ಎಂದು ಆರೋಪಿಸಿದರು.

ಚಿಕ್ಕಬಳ್ಳಾಪುರ : ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಸಾಮಾಜಿಕ ಹೋರಾಟಗಾರ ಹಾಗೂ ದಲಿತ ಮುಖಂಡ ಭೂಮಾನಂದ ಅವರ ಬರ್ಬರ ಹತ್ಯೆ ರಾಜ್ಯಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದು, ಪ್ರಕರಣದ ಎಲ್ಲಾ ಆರೋಪಿಗಳನ್ನು ತಕ್ಷಣ ಬಂಧಿಸಿ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ದಸಂಸ ಮತ್ತು ಮಾದಾರ ಮಹಾಸಭೆ ಒತ್ತಾಯಿಸಿದೆ.

ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದಸಂಸ ಮುಖಂಡ ಬಾಲಕುಂಟಹಳ್ಳಿ ಗಂಗಾಧರ್ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕು ಮತ್ತು ಜಿಲ್ಲೆಯಲ್ಲಿ, ಮರಳು ದಂಧೆ, ಜೂಜಾಟ, ಇಸ್ಪೀಟು ಸೇರಿದಂತೆ ವಿವಿಧ ಅಕ್ರಮ ಚಟುವಟಿಕೆಗಳ ವಿರುದ್ಧ ಭೂಮಾನಂದ ಅವರು ಬಿಎಸ್ಪಿ ಜಿಲ್ಲಾಧ್ಯಕ್ಷರಾಗಿ ಸಂಘಟಿತ ಹೋರಾಟ ನಡೆಸುತ್ತಿದ್ದರು. ಇದೇ ಕಾರಣಕ್ಕೆ ದಂದೆಕೋರ ಮೇಲ್ಜಾತಿ ಮಂದಿ ಅವರನ್ನು ಗುರಿಯಾಗಿಸಿ ಹಾಡಹಗಲೇ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಬರ್ಬರವಾಗಿ ಹತ್ಯೆಗೈದಿದ್ದಾರೆ ಎಂದು ಆರೋಪಿಸಿದರು.

ಈ ಪ್ರಕರಣದ ಹಿಂದೆ ಪ್ರಭಾವಿ ವ್ಯಕ್ತಿಗಳ ಕೈವಾಡವಿದ್ದು, ಆರೋಪಿಗಳ ವಿರುದ್ಧ ಯಾವುದೇ ರಾಜಕೀಯ ಅಥವಾ ಇತರೆ ಒತ್ತಡಗಳಿಗೆ ಮಣಿಯದೆ ಪೊಲೀಸರು ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.

ಇದನ್ನೂ ಓದಿ: Chikkamagaluru Car Accident: ಧರ್ಮಸ್ಥಳಕ್ಕೆ ತೆರಳುತ್ತಿದ್ದವರ ಕಾರು ಭೀಕರ ಅಪಘಾತ; ಮೂವರ ದುರ್ಮರಣ, ಇಬ್ಬರ ಸ್ಥಿತಿ ಗಂಭೀರ

ದೇವಪ್ಪ ನಾಯಕ ಹಾಗೂ ಅಮರೇಗೌಡ ಪ್ರಮುಖ ಸೂತ್ರಧಾರರು ಎಂದು ಆರೋಪಿಸಿದ ಅವರು, ಪ್ರಕರಣದಲ್ಲಿ 8 ಮಂದಿಯಿದ್ದು ಎಲ್ಲ ಆಯಾಮಗಳನ್ನು ತನಿಖೆ ನಡೆಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿದರು.

ಭೂಮಾನಂದ ಅವರ ಹತ್ಯೆಯಿಂದ ಕುಟುಂಬ ಅನಾಥವಾಗಿದ್ದು, ಮೃತರ ಪತ್ನಿಗೆ ಸಮಾಜ ಕಲ್ಯಾಣ ಇಲಾಖೆಯಲ್ಲಿ ಉದ್ಯೋಗ ನೀಡಬೇಕು ಹಾಗೂ ಕುಟುಂಬಕ್ಕೆ ಸರ್ಕಾರದಿಂದ 25 ಲಕ್ಷ ಪರಿಹಾರ ಘೋಷಿಸಿ ಶಾಶ್ವತ ಭದ್ರತೆ ಒದಗಿಸಬೇಕು ಎಂದು ಒತ್ತಾಯಿಸಿದರು.

ರಾಜ್ಯದಲ್ಲಿ ದಲಿತರ ಮೇಲಿನ ದೌರ್ಜನ್ಯಗಳು ಹೆಚ್ಚುತ್ತಿದ್ದು, ಹೋರಾಟಗಾರರನ್ನು ಬೆದರಿಸುವ ವಾತಾವರಣ ನಿರ್ಮಾಣವಾಗಿದೆ ಎಂದು ಆರೋಪಿಸಿದ ಮುಖಂಡರು, ಹೋರಾಟಗಾರರ ವಿರುದ್ಧ ಸುಳ್ಳು ಪ್ರಕರಣಗಳನ್ನು ದಾಖಲಿಸಿ ಧ್ವನಿ ಹತ್ತಿಕ್ಕುವ ಪ್ರಯತ್ನಗಳು ನಡೆಯುತ್ತಿವೆ. ಜನರ ಜೀವ ಮತ್ತು ಹಕ್ಕುಗಳನ್ನು ರಕ್ಷಿಸುವ ಹೊಣೆ ಸರ್ಕಾರದ ಮೇಲಿದೆ ಎಂದು ಹೇಳಿದರು.

ಹೋರಾಟಗಾರರ ಧ್ವನಿಯನ್ನು ಅಡಗಿಸುವ ಪ್ರಯತ್ನ: ಕೃಷ್ಣ
ಮಾದಾರ ಮಹಾಸಭೆಯ ಮುಖಂಡ ಪಟ್ರೇನಹಳ್ಳಿ ಕೃಷ್ಣ ಮಾತನಾಡಿ, ಭೂಮಾನಂದ ಅವರ ಹತ್ಯೆ ಕೇವಲ ಒಬ್ಬ ವ್ಯಕ್ತಿಯ ಕೊಲೆಯಲ್ಲ, ಸಮಾಜದ ಪರವಾಗಿ ಧ್ವನಿ ಎತ್ತಿದ ಹೋರಾಟಗಾರ ನನ್ನು ಮೌನಗೊಳಿಸುವ ಪ್ರಯತ್ನವಾಗಿದೆ. ಈ ಪ್ರಕರಣದಲ್ಲಿ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಂಡು ನಿಜವಾದ ಆರೋಪಿಗಳಿಗೆ ಶಿಕ್ಷೆ ನೀಡಬೇಕು. ನ್ಯಾಯ ದೊರೆಯದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಗಂಗಾಧರ್ ಬಾಲಕುಂಟಹಳ್ಳಿ, ಮಾದಾರ ಮಹಾಸಭೆಯ ಕೃಷ್ಣ, ಬಾಗೇಪಳ್ಳಿ ಆದಿ, ನರಸಿಂಹಪ್ಪ ಹಾಗೂ ಮುನಿರಾಜು ಉಪಸ್ಥಿತರಿದ್ದರು.