Chikkaballapur News: ಸಂವಿಧಾನದ ಮೌಲ್ಯಗಳು ಪ್ರಜಾಪ್ರಭುತ್ವದ ಬಲಿಷ್ಠ ಅಡಿಪಾಯ: ಸೀಕಲ್ ರಾಮಚಂದ್ರಗೌಡ
ಸಂವಿಧಾನವು ದೇಶದ ಏಕತೆ, ಸಮಗ್ರತೆ ಹಾಗೂ ಪ್ರಜಾಪ್ರಭುತ್ವದ ವ್ಯವಸ್ಥೆಯನ್ನು ಬಲಪಡಿಸುವ ಮಹತ್ವದ ಶಕ್ತಿಯಾಗಿದೆ. ಸಂವಿಧಾನದ ಆಶಯಗಳಿಗೆ ಬದ್ಧರಾಗಿ ಪ್ರತಿಯೊಬ್ಬರೂ ತಮ್ಮ ಜವಾಬ್ದಾರಿಗಳನ್ನು ನಿರ್ವಹಿಸುವ ಮೂಲಕ ಸದೃಢ ರಾಷ್ಟ್ರ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಕರೆ ನೀಡಿದರು.
-
ಚಿಕ್ಕಬಳ್ಳಾಪುರ: ಸಂವಿಧಾನವು ಪ್ರತಿಯೊಬ್ಬ ಭಾರತೀಯನಿಗೂ ಸಮಾನ ಹಕ್ಕು, ಸ್ವಾತಂತ್ರ್ಯ, ನ್ಯಾಯ ಹಾಗೂ ಘನತೆಯ ಬದುಕನ್ನು ಕಲ್ಪಿಸಿರುವ ಪ್ರಜಾಪ್ರಭುತ್ವದ ಬಲಿಷ್ಠ ಅಡಿಪಾಯವಾಗಿದೆ. ಸಂವಿಧಾನದ ಆಶಯಗಳನ್ನು ಗೌರವಿಸುವುದರ ಜತೆಗೆ ಅವುಗಳನ್ನು ಜೀವನದಲ್ಲಿ ಅಳವಡಿಸಿ ಕೊಳ್ಳುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸೀಕಲ್ ರಾಮಚಂದ್ರಗೌಡ ತಿಳಿಸಿದರು.
ನಗರದ ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ಕಚೇರಿಯಲ್ಲಿ ಸಂವಿಧಾನ ಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಸಂವಿಧಾನ ಗೌರವ ದಿವಸ ಆಚರಿಸಿದ ಸಂದರ್ಭದಲ್ಲಿ ಮಾತನಾಡಿದರು.
ಡಾ.ಬಿ.ಆರ್.ಅಂಬೇಡ್ಕರ್ ಅವರು ದೇಶಕ್ಕೆ ನೀಡಿದ ಮಹೋನ್ನತ ಕೊಡುಗೆಯಾದ ಭಾರತೀಯ ಸಂವಿಧಾನದ ಮೌಲ್ಯಗಳು, ಆಶಯಗಳು ಮತ್ತು ಆದರ್ಶಗಳನ್ನು ಸ್ಮರಿಸುವ ಉದ್ದೇಶದಿಂದ ಬಿಜೆಪಿ ಜಿಲ್ಲಾ ಘಟಕದ ವತಿಯಿಂದ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ ಎಂದರು.
ಸಂವಿಧಾನವು ದೇಶದ ಏಕತೆ, ಸಮಗ್ರತೆ ಹಾಗೂ ಪ್ರಜಾಪ್ರಭುತ್ವದ ವ್ಯವಸ್ಥೆಯನ್ನು ಬಲಪಡಿಸುವ ಮಹತ್ವದ ಶಕ್ತಿಯಾಗಿದೆ. ಸಂವಿಧಾನದ ಆಶಯಗಳಿಗೆ ಬದ್ಧರಾಗಿ ಪ್ರತಿಯೊಬ್ಬರೂ ತಮ್ಮ ಜವಾಬ್ದಾರಿಗಳನ್ನು ನಿರ್ವಹಿಸುವ ಮೂಲಕ ಸದೃಢ ರಾಷ್ಟ್ರ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯ ಕಾರ್ಯದರ್ಶಿ ಸಿ. ಮುನಿರಾಜು, ರಾಜ್ಯ ಎಸ್ಸಿ ಮೋರ್ಚಾ ಕಾರ್ಯದರ್ಶಿ ಮುನಿ ಹನುಮಪ್ಪ, ಮಾಜಿ ಶಾಸಕ ರಾಜಣ್ಣ, ವಿಭಾಗದ ಸಹಪ್ರಭಾರಿ ಪಿ. ವಾಸು, ರಾಜ್ಯ ಮಹಿಳಾ ಮೋರ್ಚಾ ಕಾರ್ಯದರ್ಶಿ ನಿರ್ಮಲಮ್ಮ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಎಚ್.ಕೆ. ಮುರಳಿಧರ್, ಕೆ.ಬಿ. ಮುರಳಿ, ಮಧು ಸೂರ್ಯನಾರಾಯಣ ರೆಡ್ಡಿ ಸೇರಿದಂತೆ ಪಕ್ಷದ ಹಿರಿಯ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.