ಚಿಕ್ಕಬಳ್ಳಾಪುರ : ಎತ್ತಿನಹೊಳೆ(Ettinahole) ಯೋಜನೆಯನ್ನು ಶೀಘ್ರ ಪೂರ್ಣಗೊಳಿಸಿ ಚಿಕ್ಕಬಳ್ಳಾಪುರ ಮತ್ತು ಕೋಲಾರ ಅವಳಿ ಜಿಲ್ಲೆಗಳಿಗೆ ನೀರು ಹರಿಸುವುದು, ಕೆ.ಸಿ. ಮತ್ತು ಎಚ್.ಎನ್. ವ್ಯಾಲಿ(H N Valley) ನೀರನ್ನು ಮೂರನೇ ಹಂತದಲ್ಲಿ ಶುದ್ಧೀಕರಿಸಿ ಕೆರೆಗಳಿಗೆ ಹರಿಸುವುದು ಸೇರಿದಂತೆ ರೈತರ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಭಾರತೀಯ ಕಿಸಾನ್ ಸಂಘ (ಕರ್ನಾಟಕ ಪ್ರದೇಶ) ವತಿಯಿಂದ ಗುರುವಾರ ಜಿಲ್ಲಾಧಿಕಾರಿ ಕಚೇರಿ ಎದುರು ಬೃಹತ್ ಪ್ರತಿಭಟನೆ ಹಾಗೂ ಧರಣಿ ನಡೆಸಲಾಯಿತು.
ಬರದಿಂದ ತತ್ತರಿಸಿರುವ ಜಿಲ್ಲೆಯ ರೈತರಿಗೆ ಎಕರೆಗೆ 30 ಸಾವಿರ ಪರಿಹಾರ ನೀಡಲೇಬೇಕು. ರೈತರು ಕೃಷಿ ಗೆ ಮಾಡಿರುವ ಸಂಪೂರ್ಣ ಸಾಲ ಮನ್ನಾ ಮಾಡಬೇಕು. ಕೃಷಿ ಉತ್ಪನ್ನಗಳಿಗೆ ನ್ಯಾಯಯುತ ಬೆಲೆ ದೊರಕಿಸಬೇಕು ಹಾಗೂ ಕೃಷಿ ಆಧಾರಿತ ಕೈಗಾರಿಕೆಗಳನ್ನು ಸ್ಥಾಪಿಸುವ ಮೂಲಕ ರೈತರ ಆರ್ಥಿಕ ಸ್ಥಿತಿ ಸುಧಾರಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಜಿಲ್ಲಾ ಕೇಂದ್ರಜ ಎಪಿಎಂಸಿ ಮಾರುಕಟ್ಟೆಗಳಲ್ಲಿ ದಲ್ಲಾಳಿಗಳ ಹಾವಳಿ ಹೆಚ್ಚಾಗಿದ್ದು, ರೈತರಿಂದ ಶೇ.10ರಷ್ಟು ಕಮಿಷನ್ ಪಡೆಯಲಾಗುತ್ತಿದೆ. ಇದರಿಂದ ಕೃಷಿ ಉತ್ಪನ್ನಗಳನ್ನು ಮಾರಾಟ ಮಾಡುವ ರೈತರಿಗೆ ಅನ್ಯಾಯವಾಗುತ್ತಿದೆ. ಜಿಲ್ಲಾಡಳಿತ ಕೂಡಲೇ ಮಧ್ಯಪ್ರವೇಶಿಸಿ ಕಮಿಷನ್ ಪದ್ಧತಿಗೆ ಕಡಿವಾಣ ಹಾಕಬೇಕು. ಬಗರ್ ಹುಕುಂ ಸಾಗುವಳಿಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ತಡೆದು, ನೈಜ ಸಾಗುವಳಿದಾರರಿಗೆ ಸಾಗುವಳಿ ಚೀಟಿ ವಿತರಿಸಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷ ವೆಂಕಟರೆಡ್ಡಿ, ಎಪಿಎಂಸಿ ಮಾರುಕಟ್ಟೆ ಗಳಲ್ಲಿ ರೈತರಿಂದ ಅನಧಿಕೃತವಾಗಿ ಕಮಿಷನ್ ವಸೂಲಿ ಮಾಡುತ್ತಿರುವುದನ್ನು ತಡೆಯಲು ಜಿಲ್ಲಾಧಿಕಾರಿಗಳು ತಕ್ಷಣ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ತೀವ್ರ ಸ್ವರೂಪದ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.
ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ರೈತರು ಬೆಳೆದ ಬೆಳೆಗಳು ನಷ್ಟವಾಗಿದ್ದು, ಕೃಷಿಗೆ ಮಾಡಿದ ಬಂಡವಾಳವೂ ಕೈಗೆ ಸಿಗದಂತಾಗಿದೆ. ಸರ್ಕಾರ ಬರ ಪರಿಹಾರ ಘೋಷಿಸಿದ್ದರೂ ಅರ್ಹ ರೈತರಿಗೆ ಸಮರ್ಪಕವಾಗಿ ತಲುಪಿಲ್ಲ. ಇದರಿಂದ ರೈತರು ಸಾಲದ ಸುಳಿಯಲ್ಲಿ ಸಿಲುಕಿದ್ದಾರೆ. ಆದ್ದರಿಂದ ರೈತರ ಸಂಕಷ್ಟಕ್ಕೆ ಸ್ಪಂದಿಸಿ ಎಕರೆಗೆ 30 ಸಾವಿರ ಪರಿಹಾರ ನೀಡಬೇಕು.ರೈತರ ಹೊಲಗಳಿಗೆ ಹೋಗಲು ಬಂಡಿ ದಾರಿ ತೆರವು ಮಾಡಬೇಕು.ವಿಮೆ ಹಣ ಕೂಡಲೇ ಕೊಡಿಸಬೇಕು ಎಂದು ಒತ್ತಾಯಿಸಿದರು.
ಸಂಘದ ಜಿಲ್ಲಾ ಯುವ ಮುಖಂಡ ಮುರಳಿ ಮಾತನಾಡಿ, ಬರಪೀಡಿತ ಪ್ರದೇಶಗಳಿಗೆ ನೀರಾವರಿ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ಆರಂಭಿಸಲಾದ ಎತ್ತಿನಹೊಳೆ ಯೋಜನೆ 12 ವರ್ಷ ಕಳೆದರೂ ಪೂರ್ಣಗೊಂಡಿಲ್ಲ. ಚುನಾವಣೆ ಸಂದರ್ಭದಲ್ಲಿ ನೀರು ಹರಿಸುವ ಭರವಸೆ ನೀಡುವ ರಾಜಕಾರಣಿಗಳು, ಚುನಾವಣೆ ಮುಗಿದ ಬಳಿಕ ರೈತರ ಸಮಸ್ಯೆಗಳನ್ನು ನಿರ್ಲಕ್ಷಿಸುತ್ತಿದ್ದಾರೆ ಎಂದು ಆರೋಪಿಸಿದರು.
ಅವಳಿ ಜಿಲ್ಲೆಗಳ ರೈತರು ಹಾಗೂ ಜನಸಾಮಾನ್ಯರು ಕುಡಿಯುವ ನೀರು ಮತ್ತು ಕೃಷಿ ನೀರಿನ ಸಮಸ್ಯೆಯಿಂದ ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಸರ್ಕಾರ ಭರವಸೆಗಳಿಗೆ ಸೀಮಿತವಾಗದೆ ಎತ್ತಿನಹೊಳೆ ಯೋಜನೆಯನ್ನು ತ್ವರಿತವಾಗಿ ಪೂರ್ಣಗೊಳಿಸಿ ನೀರು ಹರಿಸಬೇಕು. ಆಂಧ್ರಪ್ರದೇಶದ ಗಡಿ ಭಾಗಕ್ಕೆ ತಲುಪಿರುವ ಕೃಷ್ಣಾ ನದಿ ನೀರನ್ನು ಈ ಭಾಗಕ್ಕೂ ಒದಗಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಸಂಘದ ವತಿಯಿಂದ ಅಹೋರಾತ್ರಿ ಧರಣಿ ನಡೆಸಲಾಗುವುದು ಎಂದು ಎಚ್ಚರಿಸಿದರು.
ಪ್ರತಿಭಟನೆಯ ಬಳಿಕ ರೈತರ ವಿವಿಧ ಬೇಡಿಕೆಗಳ ಮನವಿ ಪತ್ರವನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಲಾಯಿತು.
ಸಂಘದ ಪ್ರಧಾನ ಕಾರ್ಯದರ್ಶಿ ಆನಂದ್, ಸಂಘಟನಾ ಕಾರ್ಯದರ್ಶಿ ನಾರಾಯಣಸ್ವಾಮಿ, ದಕ್ಷಿಣ ಪ್ರಾಂತ್ಯದ ಕಾರ್ಯಕಾರಿಣಿ ಸದಸ್ಯ ರಾಮಾಂಜಿ, ರೈತ ಮುಖಂಡರಾದ ಗೋವಿಂದರೆಡ್ಡಿ, ಸಿದ್ದರಾಮಯ್ಯ, ಶಿವಮೂರ್ತಿ, ಚಿಕ್ಕರೆಡ್ಡಿ, ಆಂಜನೇಯ ರೆಡ್ಡಿ, ಜೀಯಪ್ಪ, ಬಯಪ್ಪ, ಅಶ್ವತ್ಥಪ್ಪ, ಮುನಿಶಾಮಿರೆಡ್ಡಿ, ಮುನಿಕೃಷ್ಣಪ್ಪ, ಶ್ರೀನಿವಾಸ್, ಕೃಷ್ಣಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.