Chikkaballapur News: ಅಂಬೇಡ್ಕರ್ ಕುರಿತು ಅವಹೇಳನಕಾರಿ ಹೇಳಿಕೆ: ವೇದಮೂರ್ತಿ ವಿರುದ್ಧ ಕ್ರಮಕ್ಕೆ ದೂರು
ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ಬೂಕನಕೆರೆ ಹೋಬಳಿಯ ದೊಡ್ಡಯಾಚೆನಹಳ್ಳಿ ಗ್ರಾಮದ ವೇದಮೂರ್ತಿ ಎಂಬುವವರು ಡಾ.ಬಿ.ಆರ್.ಅಂಬೇಡ್ಕರ್ ಅವರ ವ್ಯಕ್ತಿತ್ವ, ಜಾತಿ ಹಾಗೂ ದಲಿತ ಸಮುದಾಯದ ಕುರಿತು ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎನ್ನಲಾದ ವಿಡಿಯೋ ತುಣುಕು ಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿವೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
-
ಚಿಕ್ಕಬಳ್ಳಾಪುರ: ಸಂವಿಧಾನ ಶಿಲ್ಪಿ ಹಾಗೂ ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಕುರಿತು ಅವಹೇಳನಕಾರಿ ಹಾಗೂ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿ ಸಾಮಾಜಿಕ ಜಾಲತಾಣ ಗಳಲ್ಲಿ ಹರಿಬಿಟ್ಟಿರುವ ಆರೋಪದ ಹಿನ್ನೆಲೆಯಲ್ಲಿ ವೇದಮೂರ್ತಿ ಎಂಬುವವರ ವಿರುದ್ಧ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ರಾಜ್ಯಾಧ್ಯಕ್ಷ ಜಿ.ಸಿ. ವೆಂಕಟರಮಣಪ್ಪ ಅವರು ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ಬೂಕನಕೆರೆ ಹೋಬಳಿಯ ದೊಡ್ಡಯಾಚೆನಹಳ್ಳಿ ಗ್ರಾಮದ ವೇದಮೂರ್ತಿ ಎಂಬುವವರು ಡಾ.ಬಿ.ಆರ್.ಅಂಬೇಡ್ಕರ್ ಅವರ ವ್ಯಕ್ತಿತ್ವ, ಜಾತಿ ಹಾಗೂ ದಲಿತ ಸಮುದಾಯದ ಕುರಿತು ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎನ್ನಲಾದ ವಿಡಿಯೋ ತುಣುಕುಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿವೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಅಲ್ಲದೆ, ಮೀಸಲಾತಿ ಸೇರಿದಂತೆ ಸಂವಿಧಾನಾತ್ಮಕ ವಿಚಾರಗಳ ಬಗ್ಗೆಯೂ ಆಕ್ಷೇಪಾರ್ಹ ರೀತಿಯಲ್ಲಿ ಹೇಳಿಕೆ ನೀಡಿರುವುದು ಕಂಡುಬಂದಿದೆ. ಇಂತಹ ಹೇಳಿಕೆಗಳು ಸಾರ್ವಜನಿಕರ ಭಾವನೆಗಳಿಗೆ ಧಕ್ಕೆ ಉಂಟುಮಾಡುವುದಲ್ಲದೆ, ಸಮಾಜದಲ್ಲಿ ಅಶಾಂತಿ ಹಾಗೂ ಸಾಮಾಜಿಕ ಸೌಹಾರ್ದತೆಗೆ ಧಕ್ಕೆ ಯಾಗುವ ಸಾಧ್ಯತೆಯಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಇದನ್ನೂ ಓದಿ: Chikkaballapur News: ಗುಣಮಟ್ಟದ ಶಿಕ್ಷಣದ ಮೂಲಕ ವಿದ್ಯಾರ್ಥಿಗಳನ್ನು ದೇಶದ ಅಮೂಲ್ಯ ಆಸ್ತಿಯನ್ನಾಗಿ ರೂಪಿಸಿ
ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋ ಹಾಗೂ ಸಂಬಂಧಿತ ಡಿಜಿಟಲ್ ಸಾಕ್ಷ್ಯಗಳನ್ನು ಪರಿಶೀಲಿಸಿ, ಆರೋಪಿತ ವ್ಯಕ್ತಿಯ ವಿರುದ್ಧ ಅನ್ವಯಿಸುವ ಕಾನೂನುಗಳ ಅಡಿಯಲ್ಲಿ ತಕ್ಷಣ ಪ್ರಕರಣ ದಾಖಲಿಸಿ ಸೂಕ್ತ ತನಿಖೆ ನಡೆಸಬೇಕು. ಅಂಬೇಡ್ಕರ್ ಹಾಗೂ ದಲಿತ ಸಮುದಾಯದ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ವೆಂಕಟರಮಣಪ್ಪ ಒತ್ತಾಯಿಸಿದ್ದಾರೆ.
ಇಂತಹ ಹೇಳಿಕೆಗಳಿಂದ ಸಾರ್ವಜನಿಕ ಶಾಂತಿ, ಸಾಮಾಜಿಕ ಸೌಹಾರ್ದತೆ ಹಾಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ, ಆರೋಪಿತ ವ್ಯಕ್ತಿಯನ್ನು ಭಾರತ ದಿಂದ ಗಡಿಪಾರು ಮಾಡುವ ಕುರಿತು ಸಂಬಂಧಪಟ್ಟ ಸಕ್ಷಮ ಪ್ರಾಧಿಕಾರದ ಮುಂದೆ ಅಗತ್ಯ ಕ್ರಮ ಕೈಗೊಳ್ಳಬೇಕು. ಮುಂದಿನ ದಿನಗಳಲ್ಲಿ ಇಂತಹ ಹೇಳಿಕೆಗಳನ್ನು ನೀಡದಂತೆ ಕಾನೂನುಬದ್ಧ ಕ್ರಮ ಕೈಗೊಳ್ಳಬೇಕು ಎಂದು ಅವರು ಮನವಿ ಮಾಡಿದ್ದಾರೆ.
ದೂರಿನೊಂದಿಗೆ ಸಾಮಾಜಿಕ ಜಾಲತಾಣಗಳಲ್ಲಿ ಲಭ್ಯವಿರುವ ವಿಡಿಯೋ ಸೇರಿದಂತೆ ಸಂಬಂಧಿತ ಸಾಕ್ಷ್ಯಗಳನ್ನು ಪರಿಶೀಲಿಸಿ, ಆರೋಪಿತ ವ್ಯಕ್ತಿಯ ವಿರುದ್ಧ ಕಾನೂನುಬದ್ಧ ಕ್ರಮ ಕೈಗೊಳ್ಳುವಂತೆ ಗ್ರಾಮಾಂತರ ಪೊಲೀಸರಿಗೆ ಮನವಿ ಮಾಡಲಾಗಿದೆ.