Chinthamani News: ಕನ್ನಡ ಭಾಷೆಯ ಉಳಿವು, ಬೆಳವಣಿಗೆಗೆ ಪ್ರತಿಯೊಬ್ಬರೂ ಕೈಜೋಡಿಸಿ: ಶ್ರೀನಿವಾಸನ್
ಕನ್ನಡ ಭಾಷೆ, ನೆಲ, ಜಲ, ಸಂಸ್ಕೃತಿ ಮತ್ತು ಪರಂಪರೆಯ ಬಗ್ಗೆ ಪ್ರತಿಯೊಬ್ಬ ಕನ್ನಡಿಗನಲ್ಲಿಯೂ ಅಭಿಮಾನ ಹಾಗೂ ಜವಾಬ್ದಾರಿ ಮೂಡಿಸುವ ಸಂದರ್ಭವಾಗಬೇಕು. ಕನ್ನಡ ಭಾಷೆಯ ಉಳಿವು ಮತ್ತು ಬೆಳವಣಿಗೆಗೆ ಎಲ್ಲರೂ ಕೈಜೋಡಿಸಬೇಕು. ಮನೆ, ಮನ ಹಾಗೂ ದೈನಂದಿನ ಬದುಕಿನಲ್ಲಿ ಕನ್ನಡವನ್ನು ಬಳಸುವ ಮೂಲಕ ಭಾಷೆಯ ಶ್ರೀಮಂತಿಕೆಯನ್ನು ಮುಂದಿನ ಪೀಳಿಗೆಗೆ ತಲುಪಿಸ ಬೇಕು ಎಂದು ಕರೆ ನೀಡಿದರು.
-
ಚಿಂತಾಮಣಿ: ಕನ್ನಡ ನಾಡು, ನುಡಿ, ಭಾಷೆ, ಸಾಹಿತ್ಯ ಹಾಗೂ ಸಂಸ್ಕೃತಿಯ ಮಹತ್ವ ಸಾರುವ ಉದ್ದೇಶದಿಂದ ಸಿರಿಗನ್ನಡ ವೇದಿಕೆಯ ಚಿಂತಾಮಣಿ ತಾಲ್ಲೂಕು ಘಟಕದ ವತಿಯಿಂದ 71ನೇ ಕನ್ನಡ ರಾಜ್ಯೋತ್ಸವ(Kannada Rajyotsava)ವನ್ನು ಸಾಹಿತಿ ಶಿ.ಮಾ. ಮಂಜುನಾಥ್ ಅವರ ನಿವಾಸದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಸಿರಿಗನ್ನಡ ವೇದಿಕೆ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಚಿಂತಾಮಣಿ ತಾಲ್ಲೂಕು ಘಟಕದ ಅಧ್ಯಕ್ಷ ಶ್ರೀನಿವಾಸನ್ ಎನ್.ವಿ. ಉದ್ಘಾಟಿಸಿ ಮಾತನಾಡಿ, ಕನ್ನಡ ರಾಜ್ಯೋತ್ಸವ ಕೇವಲ ಒಂದು ದಿನದ ಆಚರಣೆಗೆ ಸೀಮಿತವಾಗಬಾರದು.
ಕನ್ನಡ ಭಾಷೆ, ನೆಲ, ಜಲ, ಸಂಸ್ಕೃತಿ ಮತ್ತು ಪರಂಪರೆಯ ಬಗ್ಗೆ ಪ್ರತಿಯೊಬ್ಬ ಕನ್ನಡಿಗನಲ್ಲಿಯೂ ಅಭಿಮಾನ ಹಾಗೂ ಜವಾಬ್ದಾರಿ ಮೂಡಿಸುವ ಸಂದರ್ಭವಾಗಬೇಕು. ಕನ್ನಡ ಭಾಷೆಯ ಉಳಿವು ಮತ್ತು ಬೆಳವಣಿಗೆಗೆ ಎಲ್ಲರೂ ಕೈಜೋಡಿಸಬೇಕು. ಮನೆ, ಮನ ಹಾಗೂ ದೈನಂದಿನ ಬದುಕಿನಲ್ಲಿ ಕನ್ನಡವನ್ನು ಬಳಸುವ ಮೂಲಕ ಭಾಷೆಯ ಶ್ರೀಮಂತಿಕೆಯನ್ನು ಮುಂದಿನ ಪೀಳಿಗೆಗೆ ತಲುಪಿಸ ಬೇಕು ಎಂದು ಕರೆ ನೀಡಿದರು.
ಇದನ್ನೂ ಓದಿ: Chinthamani News: ಧರ್ಮ, ಜಾತಿ ಭೇದ ಮರೆತು ಎಲ್ಲರೂ ಒಗ್ಗಟ್ಟಿನಿಂದ ಪಾಲ್ಗೊಳ್ಳುವುದು ಮಾದರಿ: ವೇಣುಗೋಪಾಲ್
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಚಿಂತಾಮಣಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಕೇಂದ್ರದ ಕನ್ನಡ ವಿಭಾಗದ ಮುಖ್ಯಸ್ಥ ಅಶ್ವತ್ಥ ಎಸ್. ಮಾತನಾಡಿ, ಕನ್ನಡ ಭಾಷೆಯ ಇತಿಹಾಸ, ಸಾಹಿತ್ಯದ ಶ್ರೀಮಂತಿಕೆ, ಕನ್ನಡಿಗರ ಸಾಂಸ್ಕೃತಿಕ ಪರಂಪರೆ ಹಾಗೂ ರಾಜ್ಯೋತ್ಸವದ ಮಹತ್ವವನ್ನು ವಿವರಿಸಿದರು. ಕನ್ನಡ ನಾಡಿನ ಏಕೀಕರಣಕ್ಕಾಗಿ ಶ್ರಮಿಸಿದ ಮಹನೀಯರ ತ್ಯಾಗ ಮತ್ತು ಹೋರಾಟವನ್ನು ಸ್ಮರಿಸುವುದು ನಮ್ಮ ಕರ್ತವ್ಯ. ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯ ಗೌರವ ಮತ್ತು ಘನತೆ ಕಾಪಾಡುವುದು ಪ್ರತಿಯೊಬ್ಬ ಕನ್ನಡಿಗನ ಹೊಣೆಗಾರಿಕೆಯಾಗಿದೆ ಎಂದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಆರ್. ನಾಗರಾಜ್ ಅವರನ್ನು ಶಾಲು ಹೊದಿಸಿ, ಹಾರ ಹಾಕಿ, ಮೈಸೂರು ಪೇಟ ತೊಡಿಸಿ ಆತ್ಮೀಯವಾಗಿ ಸನ್ಮಾನಿಸ ಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ನಾಗರಾಜ್, ಈ ಗೌರವದಿಂದ ತುಂಬಾ ಸಂತೋಷ ವಾಗಿದೆ. ಇನ್ನಷ್ಟು ಉತ್ಸಾಹದಿಂದ ಕನ್ನಡ ಸೇವೆ ಸಲ್ಲಿಸಬೇಕೆಂಬ ಆಸೆ ಮತ್ತು ಪ್ರೇರಣೆ ದೊರೆತಿದೆ ಎಂದು ಹರ್ಷ ವ್ಯಕ್ತಪಡಿಸಿದರು.
ಕೆ.ಎಸ್. ನೂರುಲ್ಲಾ ಅವರು ಕನ್ನಡ ಗೀತೆ ಹಾಡಿ ಕಾರ್ಯಕ್ರಮಕ್ಕೆ ಮೆರುಗು ನೀಡಿದರು. ಕನ್ನಡ ರಾಜ್ಯೋತ್ಸವದ ಸಂಭ್ರಮದೊಂದಿಗೆ ಕನ್ನಡದ ಸಾಧಕರನ್ನು ಗುರುತಿಸಿ ಗೌರವಿಸುವ ಮೂಲಕ ಕಾರ್ಯಕ್ರಮ ವಿಶೇಷ ಮಹತ್ವ ಪಡೆದುಕೊಂಡಿತು. ಕನ್ನಡದ ಅಭಿಮಾನ ಬೆಳೆಸುವ ಹಾಗೂ ಕನ್ನಡ ಸೇವಕರನ್ನು ಪ್ರೋತ್ಸಾಹಿಸುವ ಇಂತಹ ಕಾರ್ಯಕ್ರಮಗಳು ನಾಡು-ನುಡಿಯ ಜಾಗೃತಿ ಮತ್ತು ಸಾಂಸ್ಕೃತಿಕ ಮೌಲ್ಯಗಳನ್ನು ಬಲಪಡಿಸುತ್ತವೆ ಎಂಬ ಆಶಯವನ್ನು ಸಾಹಿತಿ ಶಿ.ಮಾ. ಮಂಜುನಾಥ್ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಶಿ.ಮಾ. ಮಂಜುನಾಥ್ ಅವರ ಕುಟುಂಬದವರು ಹಾಗೂ ಕನ್ನಡ ಅಭಿಮಾನಿಗಳು ಉಪಸ್ಥಿತರಿದ್ದರು.