Praja Seva: ಕರ್ತವ್ಯದಲ್ಲಿ ಎಚ್ಚರ ವಹಿಸಿ, ಇಲ್ಲವಾದರೆ ಕ್ರಮ: ಡಿಸಿ ಜಿ. ಪ್ರಭು
ತಾಲ್ಲೂಕಿನ ವೈ. ಹುಣಿಸೆನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಸ್‌ಆರ್‌ಐಟಿ ಪ್ರೌಢಶಾಲಾ ಆವರಣದಲ್ಲಿ ನಡೆದ ತಾಲೂಕು ಮಟ್ಟದ ಪ್ರಜಾ ಸೇವೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸರ್ಕಾರದ ಯೋಜನೆಗಳು ಹಾಗೂ ಇಲಾಖೆಗಳ ಸೇವೆಗಳು ಅರ್ಹ ಫಲಾನುಭವಿಗಳಿಗೆ ಸಮಯಕ್ಕೆ ಸರಿಯಾಗಿ ತಲುಪಬೇಕು.
-
ಶಿಡ್ಲಘಟ್ಟ: ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುವಲ್ಲಿ ಹಾಗೂ ಸರ್ಕಾರಿ ಕರ್ತವ್ಯ ನಿರ್ವಹಿಸು ವಲ್ಲಿ ನಿರ್ಲಕ್ಷ್ಯ ತೋರುವ ಅಧಿಕಾರಿಗಳು ಮತ್ತು ಸಿಬ್ಬಂದಿ ವಿರುದ್ಧ ಕಠಿಣ ಶಿಸ್ತು ಕ್ರಮ ಕೈಗೊಳ್ಳ ಲಾಗುವುದು. ಕರ್ತವ್ಯ ಲೋಪ ಕಂಡುಬಂದಲ್ಲಿ ಅಮಾನತು ಸೇರಿದಂತೆ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಪ್ರಭು ಎಚ್ಚರಿಕೆ ನೀಡಿದರು.
ತಾಲ್ಲೂಕಿನ ವೈ. ಹುಣಿಸೆನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಸ್‌ಆರ್‌ಐಟಿ ಪ್ರೌಢಶಾಲಾ ಆವರಣದಲ್ಲಿ ನಡೆದ ತಾಲೂಕು ಮಟ್ಟದ ಪ್ರಜಾ ಸೇವೆ(Praja Seva) ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸರ್ಕಾರದ ಯೋಜನೆಗಳು ಹಾಗೂ ಇಲಾಖೆಗಳ ಸೇವೆಗಳು ಅರ್ಹ ಫಲಾನುಭವಿಗಳಿಗೆ ಸಮಯಕ್ಕೆ ಸರಿಯಾಗಿ ತಲುಪಬೇಕು. ಸಾರ್ವಜನಿಕರು ಸಲ್ಲಿಸುವ ಅರ್ಜಿಗಳನ್ನು ಕೇವಲ ಸ್ವೀಕರಿಸಿ ಬಾಕಿ ಉಳಿಸದೆ, ನಿಯಮಾನುಸಾರ ತ್ವರಿತವಾಗಿ ವಿಲೇವಾರಿ ಮಾಡಬೇಕು ಎಂದು ಸೂಚಿಸಿದರು.
ಇದನ್ನೂ ಓದಿ: Praja Seva: ಅರ್ಜಿ ಸಲ್ಲಿಸುವ ವಿಧಾನ ತಿಳಿದು, ಅಗತ್ಯ ದಾಖಲೆಗಳೊಂದಿಗೆ ಅರ್ಜಿ ನೀಡಿ ಶೇ.100ರಷ್ಟು ವಿಲೇವಾರಿಗೆ ಕ್ರಮ
ಸರ್ಕಾರಿ ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದ ಅಧಿಕಾರಿಯೊಬ್ಬರನ್ನು ಈಗಾಗಲೇ ಎರಡು ದಿನಗಳ ಹಿಂದೆ ಅಮಾನತು ಮಾಡಲಾಗಿದೆ. ಯಾವುದೇ ಅಧಿಕಾರಿ ಅಥವಾ ಸಿಬ್ಬಂದಿ ಕರ್ತವ್ಯ ಲೋಪ ಎಸಗಿದರೂ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು ಎಂದು ಖಡಕ್ ಎಚ್ಚರಿಕೆ ನೀಡಿದರು.
ಗ್ರಾಮೀಣ ಜನರು ಸಮಸ್ಯೆಗಳ ಪರಿಹಾರಕ್ಕಾಗಿ ಕಚೇರಿಗಳಿಗೆ ಅಲೆದಾಡುವ ಪರಿಸ್ಥಿತಿ ನಿರ್ಮಾಣ ವಾಗಬಾರದು. ಅಧಿಕಾರಿಗಳು ಜನರ ಬಳಿಗೆ ತೆರಳಿ ಸಮಸ್ಯೆ ಆಲಿಸಿ, ಸಾಧ್ಯವಾದಷ್ಟು ಸ್ಥಳದಲ್ಲಿಯೇ ಪರಿಹಾರ ಕಲ್ಪಿಸಬೇಕು ಎಂದರು.
ಕಂದಾಯ ಗ್ರಾಮಗಳಲ್ಲಿ 50–60 ವರ್ಷಗಳಿಂದ ವಾಸವಿರುವ ಅರ್ಹ ನಿವಾಸಿಗಳನ್ನು ಗುರುತಿಸಿ ಹಕ್ಕುಪತ್ರ ನೀಡಲು ಕ್ರಮ ಕೈಗೊಳ್ಳಲಾಗುವುದು. ಡಿಸೆಂಬರ್ ಅಥವಾ ಜನವರಿ ವೇಳೆಗೆ ಜಿಲ್ಲಾ ಮಟ್ಟದಲ್ಲಿ ಕಾರ್ಯಕ್ರಮ ಆಯೋಜಿಸಿ ಹಕ್ಕುಪತ್ರ ವಿತರಿಸುವ ಉದ್ದೇಶವಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿಪಂ ಸಿಇಒ ಡಾ.ನವೀನ್ ಭಟ್ ವೈ., ಹೇಮಾವತಿ ಆರ್., ತಹಶೀಲ್ದಾರ್ ಗಗನ ಸಿಂಧು, ಪೌರಾಯುಕ್ತೆ ಅಮೃತಾ ಗೌಡ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.