ಚಿಕ್ಕಬಳ್ಳಾಪುರ: ವನಮಹೋತ್ಸವ ಅಂಗವಾಗಿ ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಪರಿಸರ ಸಂರಕ್ಷಣೆಗೆ ವಿದ್ಯಾರ್ಥಿಗಳನ್ನು ಸಕ್ರಿಯವಾಗಿ ತೊಡಗಿಸಿಕೊಳ್ಳುವ ಉದ್ದೇಶದಿಂದ ಈಶ ಔಟ್ ರೀಚ್‌ನ ‘ಹಸಿರು ಶಾಲೆ’ ಯೋಜನೆಗೆ ಸೋಮವಾರ ಚಾಲನೆ ನೀಡಲಾಯಿತು. ಜಿಲ್ಲೆಯ 1800ಕ್ಕೂ ಹೆಚ್ಚು ಶಾಲೆ ಮತ್ತು ಕಾಲೇಜುಗಳಲ್ಲಿ 35 ಸಾವಿರಕ್ಕೂ ಅಧಿಕ ಸಸಿಗಳನ್ನು ನೆಡುವ ಮಹತ್ವಾಕಾಂಕ್ಷಿ ಗುರಿಯನ್ನು ಯೋಜನೆ ಹೊಂದಿದೆ.
ಚಿಕ್ಕಬಳ್ಳಾಪುರ ತಾಲ್ಲೂಕಿನ ಗುಂಟಪ್ಪನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಟಿ.ಪಿ. ರಾಮಲಿಂಗೇಗೌಡ ಸಸಿ ನೆಡುವ ಮೂಲಕ ಯೋಜನೆಗೆ ಚಾಲನೆ ನೀಡಿದರು.
ಇದನ್ನೂ ಓದಿ: Chikkaballapur News: ಪೈಪ್‌ಲೈನ್ ದುರಸ್ತಿಯಿಂದ ಜು.8ರಿಂದ 13ರವರೆಗೆ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕಡಿಮೆ ಮಳೆಯಾಗುವ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಪರಿಸರ ಸಮತೋಲನ ಕಾಪಾಡಲು ಹಾಗೂ ಮಣ್ಣಿನ ಸಂರಕ್ಷಣೆಗೆ ವ್ಯಾಪಕ ಪ್ರಮಾಣದಲ್ಲಿ ಗಿಡಗಳನ್ನು ಬೆಳೆಸುವುದು ಅತ್ಯಗತ್ಯ ಎಂದು ಹೇಳಿದರು. ಪರಿಸರ ಜಾಗೃತಿ ಮೂಡಿಸುವಲ್ಲಿ ಈಶ ಔಟ್‌ರೀಚ್ ಕೈಗೊಂಡಿರುವ ಪ್ರಯತ್ನವನ್ನು ಶ್ಲಾಘಿಸಿದರು.
ಈಶ ಔಟ್‌ರೀಚ್ ಸಂಯೋಜಕ ಸ್ವಾಮಿ ಲವಣ, ಆರೋಗ್ಯಕರ ಮಣ್ಣಿನ ಮಹತ್ವ, ಜೀವವೈವಿಧ್ಯ ಮತ್ತು ಪರಿಸರ ಸಂರಕ್ಷಣೆಯ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು. ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ(Saalu Marada Thimmakka) ಅವರ ಸೇವೆಯನ್ನು ಸ್ಮರಿಸಿ, ನೆಟ್ಟ ಸಸಿಗಳನ್ನು ಹೆಮ್ಮರಗಳನ್ನಾಗಿ ಬೆಳೆಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಶಿಕ್ಷಣ ಇಲಾಖೆ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು, ಶಿಕ್ಷಕರು ಮತ್ತು ಈಶ ಫೌಂಡೇಶನ್ ಸ್ವಯಂಸೇವಕರು ಭಾಗವಹಿಸಿದ್ದರು.
‘ಹಸಿರು ಶಾಲೆ’ ಯೋಜನೆಯ ಮೂಲಕ ವಿದ್ಯಾರ್ಥಿಗಳಲ್ಲಿ ಪರಿಸರ ಜಾಗೃತಿ ಮೂಡಿಸುವುದರ ಜೊತೆಗೆ ಶಾಲಾ ಆವರಣ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಹಸಿರು ವಾತಾವರಣ ನಿರ್ಮಿಸುವ ಗುರಿಯನ್ನು ಈಶ ಔಟ್‌ರೀಚ್ ಹೊಂದಿದೆ.