ವಿದ್ಯುತ್ ಸ್ಥಗಿತ ಖಂಡಿಸಿ ಬೆಸ್ಕಾಂ ಕಚೇರಿ ಎದುರು ರೈತರ ಧರಣಿ: ಕೃಷಿ ಪಂಪ್‌ಸೆಟ್‌ಗಳಿಗೆ ಹಿಂದಿನಂತೆ ಏಳು ಗಂಟೆ ವಿದ್ಯುತ್ ಪೂರೈಕೆಗೆ ಒತ್ತಾಯ
ಮಳೆ ಕೊರತೆಯಿಂದ ಸಂಕಷ್ಟದಲ್ಲಿರುವ ರೈತರಿಗೆ ಇದೀಗ ವಿದ್ಯುತ್ ಕಡಿತವೂ ತೀವ್ರ ಹೊರೆ ತಂದಿದ್ದು, ಕೃಷಿ ಪಂಪ್‌ಸೆಟ್‌ಗಳಿಗೆ ರಾತ್ರಿ ವೇಳೆ ನೀಡುತ್ತಿದ್ದ ವಿದ್ಯುತ್ ಪೂರೈಕೆಯನ್ನು ಸ್ಥಗಿತಗೊಳಿಸಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯ ಕರ್ತರು ಸೋಮವಾರ ನಗರದ ಬೆಸ್ಕಾಂ ಕಚೇರಿ ಎದುರು ಧರಣಿ ನಡೆಸಿದರು
-
ಚಿಕ್ಕಬಳ್ಳಾಪುರ : ಮಳೆ ಕೊರತೆಯಿಂದ ಸಂಕಷ್ಟದಲ್ಲಿರುವ ರೈತರಿಗೆ ಇದೀಗ ವಿದ್ಯುತ್ ಕಡಿತವೂ ತೀವ್ರ ಹೊರೆ ತಂದಿದ್ದು, ಕೃಷಿ ಪಂಪ್‌ಸೆಟ್‌ಗಳಿಗೆ ರಾತ್ರಿ ವೇಳೆ ನೀಡುತ್ತಿದ್ದ ವಿದ್ಯುತ್ ಪೂರೈಕೆಯನ್ನು ಸ್ಥಗಿತಗೊಳಿಸಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯ ಕರ್ತರು ಸೋಮವಾರ ನಗರದ ಬೆಸ್ಕಾಂ ಕಚೇರಿ ಎದುರು ಧರಣಿ ನಡೆಸಿದರು.
ನಗರದ ವಾಪಸಂದ್ರದಲ್ಲಿರುವ ರೈತ ಸಂಘದ ಕಚೇರಿಯಿಂದ ಬೆಸ್ಕಾಂ ಕಚೇರಿವರೆಗೆ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು, ಕಚೇರಿಗೆ ಮುತ್ತಿಗೆ ಹಾಕಿ ಸರ್ಕಾರ ಹಾಗೂ ಬೆಸ್ಕಾಂ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನಾಕಾರರು ಮಾತನಾಡಿ, ಮಳೆ ಕೊರತೆಯಿಂದ ಬೆಳೆಗಳು ಒಣಗುತ್ತಿರುವ ಹಿನ್ನೆಲೆಯಲ್ಲಿ ರೈತರು ಕೃಷಿ ಪಂಪ್‌ಸೆಟ್‌ಗಳನ್ನೇ ಅವಲಂಬಿಸಿದ್ದು, ರಾತ್ರಿ ವೇಳೆ ನೀಡುತ್ತಿದ್ದ ಮೂರು ಗಂಟೆಗಳ ವಿದ್ಯುತ್ ಪೂರೈಕೆಯನ್ನು ಸ್ಥಗಿತಗೊಳಿಸಿರುವುದರಿಂದ ಬೆಳೆಗಳಿಗೆ ಸಮರ್ಪಕವಾಗಿ ನೀರುಣಿಸಲು ಸಾಧ್ಯವಾಗುತ್ತಿಲ್ಲ ಎಂದು ದೂರಿದರು.
ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ಎನ್. ಗೋಪಾಲ್ ಮಾತನಾಡಿ, ಸರ್ಕಾರ ರೈತರಿಗೆ ಹಗಲು ಮತ್ತು ರಾತ್ರಿ ಸೇರಿ ಏಳು ಗಂಟೆಗಳ ವಿದ್ಯುತ್ ಪೂರೈಕೆ ಮಾಡುವುದಾಗಿ ಭರವಸೆ ನೀಡಿದ್ದರೂ, ಕಳೆದ ಮೂರು-ನಾಲ್ಕು ದಿನಗಳಿಂದ ರಾತ್ರಿ ವಿದ್ಯುತ್ ಪೂರೈಕೆ ಸ್ಥಗಿತಗೊಂಡಿದೆ ಎಂದು ಆರೋಪಿಸಿದರು.
ಕೃಷಿ ಚಟುವಟಿಕೆಗಳಿಗೆ ಯಾವುದೇ ತೊಂದರೆಯಾಗದಂತೆ ಸರ್ಕಾರ ತಕ್ಷಣವೇ ಹಿಂದಿನಂತೆ ಏಳು ಗಂಟೆಗಳ ಸಮರ್ಪಕ ವಿದ್ಯುತ್ ಪೂರೈಕೆ ಕಲ್ಪಿಸಬೇಕು. ಇಲ್ಲವಾದರೆ ದನಕರುಗಳು ಹಾಗೂ ಕೃಷಿ ಸಲಕರಣೆಗಳೊಂದಿಗೆ ಬೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಬಳಿಕ ಬೆಸ್ಕಾಂ ಅಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಲಾಯಿತು.
ಧರಣಿಯಲ್ಲಿ ರೈತ ಸಂಘದ ತಾಲೂಕು ಅಧ್ಯಕ್ಷ ಮರಳುಕುಂಟೆ ರಾಮಾಂಜಿನಪ್ಪ, ಜಿಲ್ಲಾ ಜಂಟಿ ಕಾರ್ಯದರ್ಶಿ ಶ್ರೀನಿವಾಸ್, ಅಶ್ವತ್ಥಪ್ಪ, ಮುನಿಕೃಷ್ಣಪ್ಪ, ನಾರಾಯಣಸ್ವಾಮಿ ಸೇರಿದಂತೆ ಹಲವು ರೈತರು ಭಾಗವಹಿಸಿದ್ದರು.