ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (ಕೆಪಿಸಿಸಿ) ನೂತನ ಖಜಾಂಚಿಯಾಗಿ ನೇಮಕಗೊಂಡಿರುವ ಹಿರಿಯ ಕಾಂಗ್ರೆಸ್ ಮುಖಂಡ ಜಿ.ಎಚ್. ನಾಗರಾಜ್(G H Nagaraj)ಅಧಿಕಾರ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜಿ.ಎಚ್. ನಾಗರಾಜ್ ಅವರು, ಪಕ್ಷದ ವರಿಷ್ಠರು ತಮ್ಮ ಮೇಲೆ ವಿಶ್ವಾಸವಿಟ್ಟು ಮಹತ್ವದ ಜವಾಬ್ದಾರಿ ನೀಡಿರುವುದಕ್ಕೆ ಕೃತಜ್ಞತೆ ಸಲ್ಲಿಸಿದರು. ಪಕ್ಷದ ಸಂಘಟನೆ ಮತ್ತು ಬಲವರ್ಧನೆಗೆ ಪ್ರಾಮಾಣಿಕವಾಗಿ ಶ್ರಮಿಸುವುದಾಗಿ ತಿಳಿಸಿದರು. ಖಜಾಂಚಿಯಾಗಿ ಪಕ್ಷದ ಆರ್ಥಿಕ ನಿರ್ವಹಣೆಯಲ್ಲಿ ಪಾರದರ್ಶಕತೆ ಹಾಗೂ ಜವಾಬ್ದಾರಿಯುತ ಕಾರ್ಯನಿರ್ವಹಣೆಗೆ ಆದ್ಯತೆ ನೀಡುವುದಾಗಿ ಹೇಳಿದರು.
ಇದನ್ನೂ ಓದಿ: KPCC: ಎಸ್ ಐ ಆರ್ ಪ್ರಕ್ರಿಯೆ, ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ: ಕೆಪಿಸಿಸಿ ಸದಸ್ಯ ಸೈಯದ್ ಎಜಾಜ್ ಸ್ಪಷ್ಟನೆ
ಮಾಜಿ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ನಾಯಕರಾದ ಎನ್.ಎಚ್. ಶಿವಶಂಕರರೆಡ್ಡಿ(N H Shivashankar Reddy) ಅವರು ಸಮಾರಂಭದಲ್ಲಿ ಭಾಗವಹಿಸಿ ನೂತನ ಖಜಾಂಚಿ ಜಿ.ಎಚ್. ನಾಗರಾಜ್ ಅವರಿಗೆ ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದರು. ಪಕ್ಷದ ಸಂಘಟನೆಯಲ್ಲಿ ಅಪಾರ ಅನುಭವ ಹೊಂದಿರುವ ನಾಗರಾಜ್ ಅವರು ತಮ್ಮ ನೂತನ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸುವ ಮೂಲಕ ಕಾಂಗ್ರೆಸ್ ಪಕ್ಷದ ಬಲವರ್ಧನೆಗೆ ಮಹತ್ವದ ಕೊಡುಗೆ ನೀಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಸಚಿವ ಬಿ.ಝಡ್. ಜಮೀರ್ ಅಹಮದ್ ಖಾನ್(B Z Zameer Ahmed Khan), ಶಾಸಕ ಹಾಗೂ ಮಾಜಿ ಸಚಿವ ಕೆ.ಎನ್. ರಾಜಣ್ಣ(K N Rajanna), ಹಿರಿಯ ಕಾಂಗ್ರೆಸ್ ನಾಯಕ ನಾಸೀರ್ ಅಹಮದ್, ಕೆಪಿಸಿಸಿ ಮಾಧ್ಯಮ ವಿಭಾಗದ ರಮೇಶ್ ಬಾಬು ಸೇರಿದಂತೆ ಪಕ್ಷದ ಪ್ರಮುಖ ನಾಯಕರು, ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದು ನೂತನ ಖಜಾಂಚಿಗೆ ಅಭಿನಂದನೆ ಸಲ್ಲಿಸಿದರು.
ನೂತನ ಖಜಾಂಚಿಯ ಅಧಿಕಾರ ಸ್ವೀಕಾರ ಸಮಾರಂಭವು ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಉಪಸ್ಥಿತಿಯಲ್ಲಿ ನಡೆಯಿತು.