Asha Worker: ಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಸಲು ಸರ್ಕಾರ ನಿರ್ಲಕ್ಷ್ಯ: ಮಾದಮಂಗಲ ಆಂಜಿ ಆರೋಪ
ರಾಜ್ಯದಲ್ಲಿ ಸುಮಾರು 42 ಸಾವಿರಕ್ಕೂ ಹೆಚ್ಚು ಆಶಾ ಕಾರ್ಯಕರ್ತೆಯರು ಆರೋಗ್ಯ ಸೇವೆಯಲ್ಲಿ ತೊಡಗಿಸಿಕೊಂಡಿದ್ದು, ಗ್ರಾಮೀಣ ಪ್ರದೇಶಗಳಲ್ಲಿ ಮನೆಮನೆಗೆ ತೆರಳಿ ಜನರಿಗೆ ಆರೋಗ್ಯ ಸೇವೆ ಒದಗಿಸುತ್ತಿದ್ದಾರೆ. ತಾಯಿ ಮತ್ತು ಮಕ್ಕಳ ಆರೋಗ್ಯ, ಲಸಿಕಾ ಕಾರ್ಯಕ್ರಮ, ಆರೋಗ್ಯ ಜಾಗೃತಿ ಸೇರಿದಂತೆ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸು ತ್ತಿದ್ದಾರೆ.
-
ಚಿಂತಾಮಣಿ: ರಾಜ್ಯದ ಆರೋಗ್ಯ ವ್ಯವಸ್ಥೆಯಲ್ಲಿ ಆಶಾ ಕಾರ್ಯಕರ್ತೆ(Asha Worker)ಯರ ಪಾತ್ರ ಮಹತ್ವದ್ದಾ ಗಿದ್ದು, ಹಗಲಿರುಳು ಸೇವೆ ಸಲ್ಲಿಸುತ್ತಿರುವ ಸಾವಿರಾರು ಕಾರ್ಯಕರ್ತೆಯರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಲ್ಲಿ ರಾಜ್ಯ ಸರ್ಕಾರ ನಿರ್ಲಕ್ಷ್ಯ ವಹಿಸುತ್ತಿದೆ ಎಂದು ಜೆಡಿಎಸ್ ಜಿಲ್ಲಾ ಪರಿಶಿಷ್ಟ ಜಾತಿ ವಿಭಾಗದ ಚಿಕ್ಕಬಳ್ಳಾಪುರ ಜಿಲ್ಲಾಧ್ಯಕ್ಷ ಮಾದಮಂಗಲ ಆಂಜಿ ಆರೋಪಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ರಾಜ್ಯದಲ್ಲಿ ಸುಮಾರು 42 ಸಾವಿರಕ್ಕೂ ಹೆಚ್ಚು ಆಶಾ ಕಾರ್ಯಕರ್ತೆಯರು ಆರೋಗ್ಯ ಸೇವೆಯಲ್ಲಿ ತೊಡಗಿಸಿಕೊಂಡಿದ್ದು, ಗ್ರಾಮೀಣ ಪ್ರದೇಶಗಳಲ್ಲಿ ಮನೆಮನೆಗೆ ತೆರಳಿ ಜನರಿಗೆ ಆರೋಗ್ಯ ಸೇವೆ ಒದಗಿಸುತ್ತಿದ್ದಾರೆ. ತಾಯಿ ಮತ್ತು ಮಕ್ಕಳ ಆರೋಗ್ಯ, ಲಸಿಕಾ ಕಾರ್ಯಕ್ರಮ, ಆರೋಗ್ಯ ಜಾಗೃತಿ ಸೇರಿದಂತೆ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸು ತ್ತಿದ್ದಾರೆ. ಆದರೆ, ಅವರ ಸೇವೆಗೆ ತಕ್ಕ ಗೌರವಧನ ಹಾಗೂ ಅಗತ್ಯ ಸೌಲಭ್ಯಗಳು ದೊರೆಯುತ್ತಿಲ್ಲ ಎಂದು ದೂರಿದ್ದಾರೆ.
ಇದನ್ನೂ ಓದಿ: ASHA Workers Protest: ಆಶಾ ಸಹೋದರಿಯರ ಹೋರಾಟಕ್ಕೆ ಸಿಎಂ ಸ್ಪಂದಿಸಲಿ: ಮಾಜಿ ಶಾಸಕಿ ಅನಿತಾ ಕುಮಾರಸ್ವಾಮಿ ಒತ್ತಾಯ
2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಆಶಾ ಕಾರ್ಯಕರ್ತೆಯರ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿತ್ತು. ಆದರೆ, ಅಧಿಕಾರಕ್ಕೆ ಬಂದು ಮೂರು ವರ್ಷ ಕಳೆದರೂ ಪ್ರಮುಖ ಬೇಡಿಕೆಗಳು ಈಡೇರಿಲ್ಲ ಎಂದು ಅವರು ಟೀಕಿಸಿದ್ದಾರೆ.
ಕಡಿಮೆ ಗೌರವಧನದಲ್ಲಿ ದುಡಿಯುತ್ತಿರುವ ಆಶಾ ಕಾರ್ಯಕರ್ತೆಯರು ಕುಟುಂಬ ನಿರ್ವಹಣೆಗೂ ಸಂಕಷ್ಟ ಎದುರಿಸುತ್ತಿದ್ದಾರೆ. ಗೌರವಧನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ನಿರಂತರವಾಗಿ ಹೋರಾಟ ನಡೆಸುತ್ತಿದ್ದರೂ ಸರ್ಕಾರ ಸೂಕ್ತ ಸ್ಪಂದನೆ ನೀಡಿಲ್ಲ. ಅವರ ಸೇವೆಯನ್ನು ಗುರುತಿಸಿ ಗೌರವಯುತ ಜೀವನ ನಡೆಸಲು ಅಗತ್ಯವಾದ ಆರ್ಥಿಕ ಭದ್ರತೆ ಹಾಗೂ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಒತ್ತಾಯಿಸಿದ್ದಾರೆ.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಆಶಾ ಕಾರ್ಯಕರ್ತೆಯರ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಿ ಶಾಶ್ವತ ಪರಿಹಾರ ಕಲ್ಪಿಸಬೇಕು. ಕಾಂಗ್ರೆಸ್ ಸರ್ಕಾರ ಚುನಾವಣಾ ಸಂದರ್ಭದಲ್ಲಿ ನೀಡಿರುವ ಭರವಸೆಗಳನ್ನು ಕೂಡಲೇ ಈಡೇರಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಆಶಾ ಕಾರ್ಯಕರ್ತೆಯರ ಹೋರಾಟ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆಯಿದೆ ಎಂದು ಮಾದಮಂಗಲ ಆಂಜಿ ಎಚ್ಚರಿಸಿದ್ದಾರೆ.