ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

115ನೇ ದಿನಕ್ಕೆ ಮುಂದುವರಿಕೆ ಪ್ರತಿಭಟನೆಗೆ ಹೆಚ್.ಡಿ.ಕುಮಾರಸ್ವಾಮಿ ಬೆಂಬಲ : ಭಕ್ತರಹಳ್ಳಿ ಬೈರೇಗೌಡ

ಜಂಗಮಕೋಟೆ ಹೋಬಳಿ ವ್ಯಾಪ್ತಿಯ 13 ಗ್ರಾಮಗಳ ಸುಮಾರು 2823 ಎಕರೆ ಫಲವತ್ತಾದ ಕೃಷಿಭೂಮಿ ಯನ್ನು ಕೈಗಾರಿಕಾ ಪಾರ್ಕ್ ನಿರ್ಮಾಣಕ್ಕಾಗಿ ಸ್ವಾಧೀನಪಡಿಸಿಕೊಳ್ಳಲು ಸರ್ಕಾರ ಮುಂದಾಗಿರುವ ಕ್ರಮವನ್ನು ಖಂಡಿಸಿ ರೈತ ಸಂಘದ ನೇತೃತ್ವದಲ್ಲಿ ಜಿಲ್ಲಾಡಳಿತ ಭವನದ ಎದುರು ಕಳೆದ 115 ದಿನಗಳಿಂದ ಅನಿರ್ದಿಷ್ಟಾವಧಿ ಧರಣಿ ನಡೆಯುತ್ತಿದೆ.

ಸುದ್ದಿಗೋಷ್ಠಿಯಲ್ಲಿ ಭಕ್ತರಹಳ್ಳಿ ಬೈರೇಗೌಡ ಮಾತನಾಡಿದರು

ಚಿಕ್ಕಬಳ್ಳಾಪುರ: ಜಂಗಮಕೋಟೆ ಹೋಬಳಿಯ ಫಲವತ್ತಾದ ಕೃಷಿ ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳುವ ಪ್ರಕ್ರಿಯೆ ವಿರೋಧಿಸಿ ಜಿಲ್ಲಾಡಳಿತ ಭವನದ ಎದುರು ನಡೆಯುತ್ತಿರುವ ಅನಿರ್ದಿಷ್ಟಾವಧಿ ರೈತರ ಹೋರಾಟಕ್ಕೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಬೆಂಬಲ ವ್ಯಕ್ತಪಡಿಸಿದ್ದಾರೆ ಎಂದು ರೈತ ಸಂಘದ ರಾಜ್ಯ ಕಾರ್ಯಾಧ್ಯಕ್ಷ ಭಕ್ತರಹಳ್ಳಿ ಬೈರೇಗೌಡ ತಿಳಿಸಿದರು.

ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಶುಕ್ರವಾರ ರೈತರ ನಿಯೋಗವು ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಜಿಲ್ಲೆಯ ರೈತರ ಹೋರಾಟಕ್ಕೆ ಬೆಂಬಲ ನೀಡುವಂತೆ ಮನವಿ ಮಾಡಿತ್ತು. ಇದಕ್ಕೆ ಸ್ಪಂದಿಸಿರುವ ಕುಮಾರಸ್ವಾಮಿ ಅವರು ರೈತರ ಪರವಾಗಿ ನಿಲ್ಲುವುದಾಗಿ ಭರವಸೆ ನೀಡಿದ್ದು, ಶೀಘ್ರದಲ್ಲೇ ಚಿಕ್ಕಬಳ್ಳಾಪುರದಲ್ಲಿ ನಡೆಯುತ್ತಿರುವ ರೈತರ ಧರಣಿಯಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ: Chinthamani News: ಕಾಂಗ್ರೆಸ್‌ನ ವೋಟ್ ಬ್ಯಾಂಕ್ ರಾಜಕೀಯಕ್ಕೆ ಬಿಎಲ್‌ಒಗಳ ಬಳಕೆ? ಸೀಕಲ್ ಆನಂದ್ ಗೌಡ ಆಕ್ರೋಶ...!

ಜಂಗಮಕೋಟೆ ಹೋಬಳಿ ವ್ಯಾಪ್ತಿಯ 13 ಗ್ರಾಮಗಳ ಸುಮಾರು 2823 ಎಕರೆ ಫಲವತ್ತಾದ ಕೃಷಿ ಭೂಮಿಯನ್ನು ಕೈಗಾರಿಕಾ ಪಾರ್ಕ್ ನಿರ್ಮಾಣಕ್ಕಾಗಿ ಸ್ವಾಧೀನಪಡಿಸಿಕೊಳ್ಳಲು ಸರ್ಕಾರ ಮುಂದಾಗಿರುವ ಕ್ರಮವನ್ನು ಖಂಡಿಸಿ ರೈತ ಸಂಘದ ನೇತೃತ್ವದಲ್ಲಿ ಜಿಲ್ಲಾಡಳಿತ ಭವನದ ಎದುರು ಕಳೆದ 115 ದಿನಗಳಿಂದ ಅನಿರ್ದಿಷ್ಟಾವಧಿ ಧರಣಿ ನಡೆಯುತ್ತಿದೆ. ಈಗಾಗಲೇ ದಲಿತ, ಕನ್ನಡಪರ ಹಾಗೂ ಕಾರ್ಮಿಕ ಸಂಘಟನೆಗಳು ಈ ಹೋರಾಟಕ್ಕೆ ಬೆಂಬಲ ಸೂಚಿಸಿವೆ ಎಂದು ಹೇಳಿದರು.

"ನಾವು ಕೈಗಾರಿಕೆಗಳ ಸ್ಥಾಪನೆಗೆ ವಿರೋಧಿಗಳಲ್ಲ. ಆದರೆ ಫಲವತ್ತಾದ ಕೃಷಿಭೂಮಿಯನ್ನು ಸ್ವಾಧೀನಪಡಿಸಿಕೊಂಡು ಕೈಗಾರಿಕೆ ಸ್ಥಾಪಿಸುವುದನ್ನು ಯಾವುದೇ ಕಾರಣಕ್ಕೂ ಒಪ್ಪುವುದಿಲ್ಲ. ಕೃಷಿಗೆ ಯೋಗ್ಯವಲ್ಲದ ಪ್ರದೇಶಗಳಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸಿದರೆ ನಮ್ಮ ವಿರೋಧವಿಲ್ಲ. ಜಂಗಮಕೋಟೆ ಭಾಗದ ರೈತರು ತಮ್ಮ ಫಲವತ್ತಾದ ಭೂಮಿಯನ್ನು ಉಳಿಸಿಕೊಳ್ಳಲು ಹೋರಾಟ ನಡೆಸುತ್ತಿದ್ದಾರೆ. ಸರ್ಕಾರ ತನ್ನ ನಿರ್ಧಾರವನ್ನು ಹಿಂಪಡೆಯುವವರೆಗೆ ಈ ಹೋರಾಟ ನಿಲ್ಲುವು ದಿಲ್ಲ" ಎಂದು ಭಕ್ತರಹಳ್ಳಿ ಬೈರೇಗೌಡ ಸ್ಪಷ್ಟಪಡಿಸಿದರು.

ಮಾಜಿ ಶಾಸಕ ಎಂ.ರಾಜಣ್ಣ ಮಾತನಾಡಿ, ಭೂತಾಯಿಯನ್ನು ನಂಬಿಕೊಂಡು ಬದುಕು ಕಟ್ಟಿಕೊಂಡು, ಆಧುನಿಕತೆಯ ಭರಾಟೆಯ ನಡುವೆಯೂ ಒಕ್ಕಲು ಸಂಸ್ಕೃತಿಯನ್ನು ಇಂದಿಗೂ ಕಾಪಿಟ್ಟುಕೊಂಡಿರುವ ರೈತಾಪಿ ಸಂಕುಲಕ್ಕೆ ಕೃಷಿ ಭೂಮಿಯೇ ಬದುಕಾಗಿದೆ. 2823 ಎಕರೆಗೂ ಹೆಚ್ಚು ಫಲವತ್ತಾದ ಕೃಷಿ ಭೂಮಿಯನ್ನು ಹೊಂದಿರುವ ಜಂಗಮಕೋಟೆ ಹೋಬಳಿಯ 13 ಹಳ್ಳಿಗಳ ರೈತರನ್ನು ಕೈಗಾರಿಕೆ ಸ್ಥಾಪನೆಯ ಹೆಸರಿನಲ್ಲಿ ಒಕ್ಕಲೆಬ್ಬಿಸಲು ಹೊರಟಿರುವುದು ಸರಿಯಲ್ಲ ಎಂದರು.

ಕಳೆದ ಎರಡು ವರ್ಷಗಳಿಂದ ಈ ಸಂಬಂಧ ಅವಿರತವಾಗಿ ಹೋರಾಟ ಮಾಡಿಕೊಂಡೇ ಬರಲಾಗಿದೆ. 850ಕ್ಕೂ ಹೆಚ್ಚು ಪಹಣಿದಾರರು ಯಾವ ಕಾರಣಕ್ಕೂ ಕೃಷಿ ಭೂಮಿಯನ್ನು ನಾವು ಕೆಐಎಡಿಬಿಗೆ ಕೊಡುವುದಿಲ್ಲ ಎಂದು ಲಿಖಿತವಾಗಿ ಸರ್ಕಾರಕ್ಕೆ ಸ್ಪಷ್ಟವಾಗಿ ತಿಳಿಸಿದ್ದರೂ ಬಲವಂತದಿಂದ ಭೂಮಿ ವಶಪಡಿಸಿಕೊಳ್ಳಲು ಸರ್ಕಾರ ಮುಂದಾಗಿದೆ. ಪ್ರಾಣ ಹೋದರೂ ಪರವಾಗಿಲ್ಲ, ಅಂತಿಮ ಅಧಿಸೂ ಚನೆ ವಾಪಸ್ಸಾಗುವವರೆಗೂ ಧರಣಿ ಸತ್ಯಾಗ್ರಹ ನಿಲ್ಲುವುದಿಲ್ಲ ಎಂದು ಇದೇ ವೇಳೆ ಸ್ಪಷ್ಟಪಡಿಸಿ ದರು.

ಸುದ್ದಿಗೋಷ್ಠಿಯಲ್ಲಿ ರೈತ ಸಂಘದ ಜಿಲ್ಲಾಧ್ಯಕ್ಷ ರಾಮನಾಥ ರೆಡ್ಡಿ, ಜಿಲ್ಲಾ ಕಾರ್ಯದರ್ಶಿ ಗೋಪಾಲ್, ಭೂಸ್ವಾಧೀನ ಹೋರಾಟ ಸಮಿತಿ ಅಧ್ಯಕ್ಷ ಈರೇಬಲ್ಲ ಕೃಷ್ಣಪ್ಪ, ಹಿತ್ತಲಹಳ್ಳಿ ರಮೇಶ್, ಮೂರ್ತಿ, ಅಜೀತ್, ಬಸವರಾಜ್  ಮತ್ತಿತರರು ಇದ್ದರು.